ಲೋಕಸಭಾ ಚುನಾವಣೆಗೆ ತಯಾರಿ ನಡೆಸಲು ಸೂಚನೆ: ಡಾ.ಜಿ.ಪರಮೇಶ್ವರ್

Update: 2018-06-28 12:31 GMT

ಬೆಂಗಳೂರು, ಜೂ.28: 2019ರ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಹೆಚ್ಚು ಸ್ಥಾನ ಗೆಲ್ಲಲು ತಯಾರಿ ಹಾಗೂ ರಣನೀತಿ ರೂಪಿಸುವ ಬಗ್ಗೆ ಕಾಂಗ್ರೆಸ್ ಪಕ್ಷದ ಸಚಿವರೊಂದಿಗೆ ಸಭೆ ನಡೆಸಿ ಚರ್ಚೆ ನಡೆಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ತಿಳಿಸಿದರು.

ಗುರುವಾರ ನಗರದ ಕ್ವೀನ್ಸ್‌ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷದ ಸಚಿವರೊಂದಿಗೆ ನಡೆಸಿದ ಸಮಾಲೋಚನಾ ಸಭೆಯ ಬಳಿಕ ಅವರು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಯಾವ ರೀತಿ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂಬುದರ ಬಗ್ಗೆ ಎಐಸಿಸಿ ನೀಡಿದ ಸೂಚನೆ ಹಾಗೂ ಸಚಿವರ ನಿರ್ವಹಿಸಬೇಕಿರುವ ಜವಾಬ್ದಾರಿಗಳನ್ನು ಅವರಿಗೆ ತಿಳಿಸಿದ್ದೇನೆ ಎಂದು ಪರಮೇಶ್ವರ್ ಹೇಳಿದರು.

ನಾವು ಮೈತ್ರಿ ಸರಕಾರದಲ್ಲಿದ್ದೇವೆ. ತಮ್ಮ ತಮ್ಮ ಇಲಾಖೆಗಳಲ್ಲಿಗೆ ಕ್ರಿಯಾಶೀಲವಾಗಿ ಕೆಲಸ ಮಾಡುವಂತೆ ಸಚಿವರಿಗೆ ನಿರ್ದೇಶನ ನೀಡಲಾಗಿದೆ. ಕೆಲ ಸಣ್ಣಪುಟ್ಟ ಗೊಂದಲಗಳ ಬಗ್ಗೆ ಸಚಿವರು ನನ್ನ ಗಮನಕ್ಕೆ ತಂದಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಜೊತೆ ಚರ್ಚಿಸುವುದಾಗಿ ಹೇಳಿದ್ದೇನೆ ಎಂದು ಅವರು ತಿಳಿಸಿದರು.

ಜಿಲ್ಲಾ ಉಸ್ತುವಾರಿ ಸಚಿವರನ್ನು ಶೀಘ್ರವೇ ನೇಮಕ ಮಾಡಬೇಕು ಎಂಬ ವಿಚಾರವು ಇಂದಿನ ಸಭೆಯಲ್ಲಿ ಚರ್ಚೆಯಾಗಿದೆ. ಪಕ್ಷದ ತೀರ್ಮಾನಕ್ಕೆ ಎಲ್ಲರೂ ಬದ್ಧವಿರುವುದಾಗಿ ಸಚಿವರು ಹೇಳಿದ್ದಾರೆ. ಇದನ್ನು ಹೊರತುಪಡಿಸಿ ಸಭೆಯಲ್ಲಿ ಬೇರೆ ಯಾವ ರಾಜಕೀಯ ವಿಚಾರಗಳು ಚರ್ಚೆಯಾಗಿಲ್ಲ ಎಂದು ಪರಮೇಶ್ವರ್ ಹೇಳಿದರು.

ಸಚಿವರು ಜಿಲ್ಲಾ ಪ್ರವಾಸ ಕೈಗೊಳ್ಳುವ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಕಚೇರಿಗಳಿಗೆ ಭೇಟಿ ನೀಡಬೇಕು, ವಿಧಾನಸಭಾ ಕ್ಷೇತ್ರಗಳಿಗೆ ಹೋದಾಗ ಪಕ್ಷದ ಶಾಸಕರು, ಅಭ್ಯರ್ಥಿಗಳ ಜೊತೆ ಚರ್ಚಿಸಬೇಕು. ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ನಿರಂತರವಾಗಿ ಸಂಪರ್ಕವಿಟ್ಟುಕೊಳ್ಳುವಂತೆ ಸಚಿವರಿಗೆ ಸಲಹೆ ನೀಡಲಾಗಿದೆ ಎಂದು ಪರಮೇಶ್ವರ್ ಹೇಳಿದರು.

ಸಚಿವ ಸಂಪುಟ ವಿಸ್ತರಣೆ ಕುರಿತು ಸಭೆಯಲ್ಲಿ ಯಾವುದೆ ಚರ್ಚೆಯಾಗಿಲ್ಲ. ಆದಷ್ಟು ಶೀಘ್ರದಲ್ಲೇ ಖಾಲಿ ಇರುವ ಸ್ಥಾನಗಳನ್ನು ತುಂಬಲಾಗುವುದು. ಅದಕ್ಕೂ ಮುನ್ನ ನಿಗಮ, ಮಂಡಳಿಗಳಿಗೆ ನೇಮಕ ಆಗಬೇಕಿದೆ. ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಜೊತೆ ಈ ಬಗ್ಗೆ ಚರ್ಚೆ ಮಾಡಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಅವರು ತಿಳಿಸಿದರು.

ಸಿದ್ದರಾಮಯ್ಯ ನಡೆ ಕುರಿತು ಚರ್ಚೆ?: ಧರ್ಮಸ್ಥಳದ ಶಾಂತಿವನದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಮ್ಮಿಶ್ರ ಸರಕಾರದ ಕಾರ್ಯವೈಖರಿ, ಸರಕಾರದ ಆಯಸ್ಸು, ಬಜೆಟ್ ಮಂಡನೆ ಮಾಡಬೇಕೆಂಬ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನಡೆಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎನ್ನಲಾದ ವಿಡಿಯೋ ಹರಿದಾಡುತ್ತಿರುವ ಕುರಿತು ಹಿರಿಯ ಸಚಿವರೊಂದಿಗೆ ಪರಮೇಶ್ವರ್ ಚರ್ಚಿಸಿದ್ದಾರೆ ಎನ್ನಲಾಗಿದೆ.

ಪರಮೇಶ್ವರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಹಿರಿಯ ಸಚಿವರಾದ ಡಿ.ಕೆ.ಶಿವಕುಮಾರ್, ಆರ್.ವಿ.ದೇಶಪಾಂಡೆ, ಕೆ.ಜೆ.ಜಾರ್ಜ್, ಝಮೀರ್‌ ಅಹ್ಮದ್ ಖಾನ್, ಕೃಷ್ಣಭೈರೇಗೌಡ, ಶಿವಾನಂದಪಾಟೀಲ್, ಪ್ರಿಯಾಂಕ್ ಖರ್ಗೆ, ರಾಜಶೇಖರ್‌ಪಾಟೀಲ್, ಎನ್.ಎಚ್.ಶಿವಶಂಕರರೆಡ್ಡಿ, ಆರ್.ಶಂಕರ್, ಪುಟ್ಟರಂಗ ಶೆಟ್ಟಿ ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News