ಆರ್.ವಿ.ಕಾಂತರಾಜು ವಿರುದ್ಧದ ಎಫ್‌ಐಆರ್ ರದ್ದುಗೊಳಿಸಲು ಹೈಕೋರ್ಟ್ ನಕಾರ
ಬೆಂಗಳೂರು, ಜೂ.28: ಆದಾಯ ಮೀರಿ ಆಸ್ತಿಗಳಿಸಿದ ಆರೋಪದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ನಗರ ಯೋಜನೆ ಉಪ ನಿರ್ದೇಶಕರಾಗಿದ್ದ ಆರ್.ವಿ. ಕಾಂತರಾಜು ವಿರುದ್ಧ ಭ್ರಷ್ಟಾಚಾರ ನಿಗ್ರಹದಳ (ಎಸಿಬಿ) ದಾಖಲಿಸಿರುವ ಎಫ್ಐಆರ್ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ.
ಎಸಿಬಿ ತಮ್ಮ ವಿರುದ್ಧ ದಾಖಲಿಸಿರುವ ಎಫ್ಐಆರ್ ರದ್ದುಪಡಿಸುವಂತೆ ಕೋರಿ ಕಾಂತರಾಜು ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರಿದ್ದ ಪೀಠ, ಪ್ರಕರಣ ಇನ್ನೂ ತನಿಖಾ ಹಂತದಲ್ಲಿದ್ದು, ಈಗಲೇ ಎಫ್ಐಆರ್ ರದ್ದುಪಡಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿ ಅರ್ಜಿ ಇತ್ಯರ್ಥಪಡಿಸಿತು.
2018ರ ಜ.3ರಂದು ರಾಜ್ಯದ ವಿವಿಧೆಡೆ 12 ಅಧಿಕಾರಿಗಳ ನಿವಾಸದ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ಬಿಡಿಎ ನಗರ ಯೋಜನೆ ಉಪನಿರ್ದೇಶಕರಾಗಿದ್ದ ಆರ್.ವಿ. ಕಾಂತರಾಜು ಅವರ ಮಹಾಲಕ್ಷ್ಮೀ ಬಡಾವಣೆಯ ಮನೆ ಹಾಗೂ ಕಚೇರಿ ಮೇಲೂ ದಾಳಿ ನಡೆದಿತ್ತು. ದಾಳಿ ವೇಳೆ ಕಾಂತರಾಜು ತಮ್ಮ ಆದಾಯಕ್ಕಿಂತ ಶೇ. 150 ಅಕ್ರಮ ಆಸ್ತಿ ಹೊಂದಿರುವುದು ಪತ್ತೆಯಾಗಿತ್ತು. ಇದರಿಂದ ಕಾಂತರಾಜು ವಿರುದ್ಧ ಎಫ್ಐಆರ್ ದಾಖಲಿಸಿದ್ದ ಎಸಿಬಿ ಪೊಲೀಸರು ತನಿಖೆ ನಡೆಸುತ್ತಿದ್ದರು.