ಮೈಸೂರು: ಬಿಎಸ್ಸೆನ್ನೆಲ್ ಗುತ್ತಿಗೆ ಕಾರ್ಮಿಕರ ಮರು ನೇಮಕಕ್ಕೆ ಒತ್ತಾಯಿಸಿ ಧರಣಿ

Update: 2018-06-28 16:44 GMT

ಮೈಸೂರು,ಜೂ.28: ಬಿಎಸ್‍ಎನ್‍ಎಲ್ ನಲ್ಲಿ ಕೆಲಸ ಮಾಡುತ್ತಿರುವ ಗುತ್ತಿಗೆ ಕಾರ್ಮಿಕರನ್ನು ರಾಜ್ಯಾದ್ಯಂತ ಕೆಲಸದಿಂದ ತೆಗೆದು ಹಾಕಲಾಗುತ್ತಿದ್ದು, ಗುತ್ತಿಗೆ ಕಾರ್ಮಿಕರನ್ನು ಕೆಲಸಕ್ಕೆ ವಾಪಸ್ ತೆಗೆದುಕೊಳ್ಳುವಂತೆ ಒತ್ತಾಯಿಸಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಬಿಎಸ್ ಎನ್ ಎಲ್ ನಾನ್ ಪರ್ಮನೆಂಟ್ ನೌಕರರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಮೈಸೂರಿನ ಜಯಲಕ್ಷ್ಮಿಪುರಂನಲ್ಲಿರುವ ಬಿಎಸ್‍ಎನ್ಎಲ್ ಕಚೇರಿ ಎದುರು ಗುರುವಾರ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರು ಮಾತನಾಡಿ. ಬಿಎಸ್ಎನ್ಎಲ್ ನಲ್ಲಿ ಕೆಲಸ ಮಾಡುತ್ತಿರುವ ಗುತ್ತಿಗೆ ಕಾರ್ಮಿಕರನ್ನು ರಾಜ್ಯಾದ್ಯಂತ ಕೆಲಸದಿಂದ ತೆಗೆದುಹಾಕಲಾಗುತ್ತಿದೆ. ಅದರ ಭಾಗವಾಗಿ ಮೈಸೂರಿನಲ್ಲಿಯೂ ಗುತ್ತಿಗೆ ಕಾರ್ಮಿಕರನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಗುತ್ತಿಗೆ ಕಾರ್ಮಿಕರನ್ನು ಕೆಲಸಕ್ಕೆ ವಾಪಸ್ ತೆಗೆದುಕೊಳ್ಳಬೇಕೆಂದು ಹೈಕೋರ್ಟ್ ತೀರ್ಪು ನೀಡಿದ್ದರೂ ಬಿಎಸ್ಎನ್ಎಲ್ ಆಡಳಿತ ವರ್ಗ ಕೆಲಸ ನೀಡದೇ ಹೈಕೋರ್ಟ್ ತೀರ್ಪನ್ನು ಉಲ್ಲಂಘಿಸಿದೆ. ಇದನ್ನು ನಾವು ವಿರೋಧಿಸುತ್ತೇವೆ ಎಂದರಲ್ಲದೇ, ಎಲ್ಲಾ ಕಾರ್ಮಿಕರಿಗೂ ಐದನೇ ತಾರೀಖಿನೊಳಗೆ ವೇತನ ಪಾವತಿಯಾಗಬೇಕು. ನ್ಯಾಯಾಲಯದ ಆದೇಶದಂತೆ ಬೋನಸ್ ನೀಡಬೇಕು. ಇಎಸ್ ಐ ಮತ್ತು ಇಪಿಎಫ್ ಜಾರಿಗೊಳಿಸಬೇಕು. ಕಾರ್ಮಿಕ ಕಾನೂನುಗಳನ್ನು ಕಡ್ಡಾಯವಾಗಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಯ ಪ್ರಧಾನ ಕಾರ್ಯದರ್ಶಿಗಳಾದ ಶಭರೀಶ್ ಕುಮಾರ್, ರಾಮಲಿಂಗು, ಸೋಮೇಶ್, ಲಿಂಗರಾಜು, ಬಸವಯ್ಯ, ಸೇರಿದಂತೆ ಹಲವರು ಪಾಲ್ಗೊಂಡಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News