ಉನ್ನತ ಶಿಕ್ಷಣ ಪಡೆಯುವವರ ಸಂಖ್ಯೆ ಕುಸಿತ: ಸಚಿವ ಜಿ.ಟಿ.ದೇವೇಗೌಡ ಬೇಸರ

Update: 2018-06-29 18:31 GMT

ಬೆಳಗಾವಿ, ಜೂ. 29: ರಾಜ್ಯದಲ್ಲಿ ಶಿಕ್ಷಣ ಪಡೆದವರಿಗೆ ಉದ್ಯೋಗ ದೊರೆಯುತ್ತಿಲ್ಲ. ಹೀಗಾಗಿ ಉನ್ನತ ಶಿಕ್ಷಣ ಪಡೆಯುವವರ ಸಂಖ್ಯೆ ಕುಸಿಯುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಇಂದಿಲ್ಲಿ ತಿಳಿಸಿದ್ದಾರೆ.

ಶುಕ್ರವಾರ ಇಲ್ಲಿನ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವ ವಿದ್ಯಾಲಯದ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿಜ್ಞಾನ-ತಂತ್ರಜ್ಞಾನದ ಕೊರತೆ ಇಲ್ಲ. ಆದರೂ, ಉನ್ನತ ಶಿಕ್ಷಣ ಪಡೆಯುತ್ತಿರುವವರ ಸಂಖ್ಯೆ ಶೇ.25ರಷ್ಟು. ವಿದೇಶದಲ್ಲಿ ಉನ್ನತ ಶಿಕ್ಷಣ ಪಡೆಯುವವರ ಸಂಖ್ಯೆ ಹೆಚ್ಚಿದೆ. ಆದರೆ, ಉನ್ನತ ಶಿಕ್ಷಣ ಕಲಿಕೆ ಪ್ರಮಾಣ ಹೆಚ್ಚಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಖಾಸಗಿ ಶಿಕ್ಷಣವೇ ಗುಣಮಟ್ಟ: ಸರಕಾರಿ ಕಾಲೇಜುಗಳಿಗಿಂತ ಖಾಸಗಿ ಕಾಲೇಜುಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುತ್ತಿದ್ದು, ಸರಕಾರಿ ಕಾಲೇಜಿನ ಬೋಧಕರಿಗೆ ಹಚ್ಚಿನ ಸೌಲಭ್ಯವಿದೆ. ಆದರೂ ಯಾಕೆ ಉತ್ತಮ ಶಿಕ್ಷಣ ನೀಡಲಾಗುತ್ತಿಲ್ಲ ಎಂಬುದನ್ನ ಆತ್ಮಾವಲೋಕನ ಅಗತ್ಯ ಎಂದು ದೇವೇಗೌಡ ಇದೇ ವೇಳೆ ಸಲಹೆ ನೀಡಿದರು.

ಗ್ರಾಮೀಣ ಪ್ರದೇಶದ ಹೆಣ್ಣು ಮಕ್ಕಳಿಗೂ ಉನ್ನತ ಶಿಕ್ಷಣ ಸಿಗಬೇಕಿದೆ. ಜತೆಗೆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಉನ್ನತ ಶಿಕ್ಷಣ ದೊರೆಯುವಂತೆ ಮಾಡಬೇಕಿದೆ ಎಂದು ಸಲಹೆ ನೀಡಿದ ಅವರು, ಉಪನ್ಯಾಸಕರು ಶಿಕ್ಷಣ ಕ್ಷೇತ್ರದಲ್ಲಿ ಸಿಕ್ಕಿರುವ 'ಗುರು ಸ್ಥಾನ'ವನ್ನು ಸಮರ್ಥವಾಗಿ ನಿಭಾಯಿಸಬೇಕಿದೆ ಎಂದರು.

ರಾಜ್ಯದಲ್ಲಿ ಖಾಲಿ ಇರುವ ಪ್ರಾಂಶುಪಾಲರು ಮತ್ತು ಉಪನ್ಯಾಸಕರ ಹುದ್ದೆಗಳ ಭರ್ತಿಗೆ ಬಜೆಟ್ ಸಭೆಯಲ್ಲಿ ಸಿಎಂ ಕುಮಾರಸ್ವಾಮಿ ಅವರೊಂದಿಗೆ ಚರ್ಚಿಸಿದ್ದು, ಹುದ್ದೆಗಳ ಭರ್ತಿ ಹಾಗೂ ವೇತನ ಹೆಚ್ಚಳ ಸಂಬಂಧ ಕ್ರಮ ವಹಿಸಲಾಗುವುದು ಎಂದು ದೇವೇಗೌಡ ತಿಳಿಸಿದರು.

ನಾನು ಉನ್ನತ ಶಿಕ್ಷಣ ಸಚಿವನಾಗಿ ಅಧಿಕಾರ ಸ್ವೀಕರಿಸಿ ನಾಲ್ಕೈದು ದಿನಗಳಾಗಿವೆ. ನಾನು ಸಹಕಾರ ಸಚಿವನಾಗಿದ್ದ ವೇಳೆ ಬೆಳಗಾವಿಯಲ್ಲಿ ಸಹಕಾರಿ ಕಚೇರಿ ನಿರ್ಮಿಸಲು ಅನುದಾನ ಒದಗಿಸಿದ್ದೇ. ಹೀಗಾಗಿ ನನಗೂ ಬೆಳಗಾವಿಗೂ ನಂಟಿದೆ ಎಂದು ಅವರು ಸ್ಮರಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News