ಲೋಕಸಭಾ ಚುನಾವಣೆಯಲ್ಲಿ ರಾಜ್ಯದಿಂದ 4 ಮಹಿಳೆಯರಿಗೆ ಟಿಕೆಟ್ ನೀಡಿ: ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಆಗ್ರಹ

Update: 2018-06-30 13:09 GMT

ಬೆಂಗಳೂರು, ಜೂ.30: ಮುಂಬರಲಿರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಿಂದ ಕನಿಷ್ಠ ಮೂರರಿಂದ ನಾಲ್ಕು ಮಂದಿ ಅರ್ಹ ಮಹಿಳಾ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿ, ಗೆಲ್ಲಿಸಿಕೊಂಡು ಬರಬೇಕು ಎಂದು ಕೆಪಿಸಿಸಿ ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಳ್ಕರ್ ಆಗ್ರಹಿಸಿದರು.

ಶನಿವಾರ ನಗರದ ಕ್ವೀನ್ಸ್‌ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ನಡೆದ ರಾಜ್ಯ ಮಹಿಳಾ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು. 'ನಾಲ್ಕು ತಿಂಗಳ ನಂತರ ಮಹಿಳಾ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯನ್ನು ನಡೆಸಲಾಗಿದೆ. ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಮತ್ತು ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿ ಆದೇಶದ ಮೇರೆಗೆ ದೇಶಾದ್ಯಂತ ಪಕ್ಷದಲ್ಲಿ ಮಹಿಳಾ ಕಾಂಗ್ರೆಸ್ ಸಬಲೀಕರಣಕ್ಕಾಗಿ ‘ಪ್ರೊಜೆಕ್ಟ್ ಶಕ್ತಿ’ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅವರು ಹೇಳಿದರು.

ನಮ್ಮ ರಾಜ್ಯದಲ್ಲಿಯೂ ಇಂದು ಈ ಯೋಜನೆಗೆ ಚಾಲನೆ ನೀಡುತ್ತಿದ್ದು, ಇಡೀ ದೇಶಕ್ಕೆ ಅನ್ವಯಿಸುವಂತೆ ಮಹಿಳಾ ಕಾಂಗ್ರೆಸ್ ಸಶಕ್ತಿಕರಣಕ್ಕಾಗಿ ಒಂದು ವಾಟ್ಸ್ ಆ್ಯಪ್ ನಂಬರ್ ‘7996479964’ ನೀಡಲಾಗುತ್ತಿದೆ. ಕಾಂಗ್ರೆಸ್ ಪಕ್ಷದೊಂದಿಗೆ ಗುರುತಿಸಿಕೊಳ್ಳಲು ಇಚ್ಛಿಸುವ ಮಹಿಳೆಯರು ತಮ್ಮ ಮತದಾರರ ಗುರುತಿನ ಚೀಟಿ ಸಂಖ್ಯೆಯನ್ನು ಈ ನಂಬರ್‌ಗೆ ಕಳುಹಿಸಬೇಕಿದೆ ಎಂದು ಅವರು ತಿಳಿಸಿದರು.

ಬೂತ್, ಬ್ಲಾಕ್, ರಾಜ್ಯಮಟ್ಟದ ಕಾರ್ಯಕರ್ತರೊಂದಿಗೆ ನೇರವಾಗಿ ಸಂಪರ್ಕ ಸಾಧಿಸುವ ಉದ್ದೇಶದಿಂದ ರಾಹುಲ್‌ಗಾಂಧಿ ಈ ನೂತನ ಕಾರ್ಯಕ್ರಮವನ್ನು ಜಾರಿಗೆ ತಂದಿದ್ದಾರೆ. ಈ ವಾಟ್ಸ್ ಆ್ಯಪ್ ಸಂಖ್ಯೆಗೆ ಮಹಿಳಾ ಕಾಂಗ್ರೆಸ್ ಸಬಲೀಕರಣಕ್ಕಾಗಿ ಅಗತ್ಯವಿರುವ ಸಲಹೆಗಳು, ಸೂಚನೆಗಳು, ಅಭಿಪ್ರಾಯಗಳನ್ನು ಸಲ್ಲಿಸಬಹುದಾಗಿದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.

ಮಹಿಳಾ ಕಾಂಗ್ರೆಸ್ ಬಲವರ್ಧನೆಯಿಂದಾಗಿ, ಮಹಿಳೆಯರ ಧ್ವನಿಯು ರಾಷ್ಟ್ರಮಟ್ಟದಲ್ಲಿ ರಾಹುಲ್‌ಗಾಂಧಿಯ ಸಂಪರ್ಕಕ್ಕೆ ಸಹಾಯವಾಗಲಿದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮಹಿಳೆಯರ ಪಾತ್ರದ ಕುರಿತು ಇಂದಿನ ಕಾರ್ಯಕಾರಿಣಿ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ ಎಂದು ಅವರು ಹೇಳಿದರು.

ಮುಂಬರಲಿರುವ ಲೋಕಸಭೆ ಚುನಾವಣೆಯಲ್ಲಿ ಕನಿಷ್ಠ 3-4 ಮಹಿಳೆಯರಿಗಾದರೂ ಟಿಕೆಟ್ ನೀಡಬೇಕು, ಒಳ್ಳೆಯ ಅಭ್ಯರ್ಥಿಗಳ ಬೆನ್ನುತಟ್ಟಿ ಗೆಲ್ಲಿಸಿಕೊಂಡು ಬರಬೇಕು. ಸಂಪುಟ ವಿಸ್ತರಣೆಯಲ್ಲಿ ಮತ್ತೊಬ್ಬ ಮಹಿಳೆಗೆ ಸಚಿವ ಸ್ಥಾನ ನೀಡಬೇಕು ಎಂಬ ಬೇಡಿಕೆಯೂ ಇದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಅಖಿಲ ಭಾರತ ಮಹಿಳಾ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜನೆಟ್ ಡಿ’ಸೋಜಾ, ಮಾಜಿ ಸಚಿವರಾದ ಮೋಟಮ್ಮ, ರಾಣಿ ಸತೀಶ್, ಕೆಪಿಸಿಸಿ ಕಾರ್ಯದರ್ಶಿ ಸುಷ್ಮಾ ರಾಜಗೋಪಾಲ್‌ರೆಡ್ಡಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News