ಸಚಿವರ ಗೈರು ಹಾಜರಿಗೆ ಬಿಜೆಪಿ ಸದಸ್ಯರ ಆಕ್ಷೇಪ
ಬೆಂಗಳೂರು, ಜು.3: ಭೋಜನ ವಿರಾಮದ ನಂತರ ವಿಧಾನಸಭೆ ಕಲಾಪ ಆರಂಭಗೊಳ್ಳುತ್ತಿದ್ದಂತೆ ಮುಂದಿನ ಸಾಲಿನಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಕೃಷ್ಣಭೈರೇಗೌಡ ಹೊರತುಪಡಿಸಿ ಬೇರೆ ಯಾವ ಸಚಿವರು ಉಪಸ್ಥಿತರಿಲ್ಲದ್ದಕ್ಕೆ ಪ್ರತಿಪಕ್ಷ ಬಿಜೆಪಿ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು.
ಸದನ ಸಮಾವೇಶಗೊಳ್ಳುತ್ತಿದ್ದಂತೆ ಪ್ರತಿಪಕ್ಷದ ಮುಖ್ಯ ಸಚೇತಕ ವಿ.ಸುನೀಲ್‌ಕುಮಾರ್, ವಿಶ್ವೇಶ್ವರ ಹೆಗಡೆ ಕಾಗೇರಿ, ಮಾಧುಸ್ವಾಮಿ ಸೇರಿದಂತೆ ಇನ್ನಿತರ ಸದಸ್ಯರು ಸಚಿವರ ಗೈರು ಹಾಜರಿಗೆ ಆಕ್ಷೇಪ ವ್ಯಕ್ತಪಡಿಸಿದರು. ಸದನದ ಮೊದಲ ದಿನವೇ ಸಚಿವರು ಗೈರು ಹಾಜರಾದರೆ ಹೇಗೆ? ವಿರೋಧ ಪಕ್ಷದ ನಾಯಕರು ಯಾರನ್ನು ಉದ್ದೇಶಿಸಿ ಮಾತನಾಡಬೇಕು ಎಂದು ಪ್ರಶ್ನಿಸಿದರು.
ಇದಕ್ಕೆ ದನಿಗೂಡಿಸಿದ ಸ್ಪೀಕರ್ ಕೆ.ಆರ್.ರಮೇಶ್‌ಕುಮಾರ್, ವಿರೋಧ ಪಕ್ಷದ ನಾಯಕರು ಮಾತನಾಡುವಾಗ ಸಭಾನಾಯಕರು ಸದನದಲ್ಲಿ ಇರಬೇಕು ಎಂಬ ಆಶಯದಿಂದ ಅವರನ್ನು ಕರೆಸಿದ್ದೇನೆ. ಸದಸ್ಯರು, ಸಚಿವರು ಸದನದ ಗಾಂಭೀರ್ಯತೆಯನ್ನು ಅರ್ಥ ಮಾಡಿಕೊಳ್ಳಬೇಕು. ಸದನದ ಕಲಾಪದಲ್ಲಿ ಭಾಗಿಯಾಗುವುದಕ್ಕಿಂತ ದೊಡ್ಡ ಕೆಲಸ ಏನಿದೆ. ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಿಂತ ಹೆಚ್ಚು ಜವಾಬ್ದಾರಿ ಇವರ ಮೇಲಿದೆಯೆ? ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರು ಈ ಬಗ್ಗೆ ಸಚಿವರು ಹಾಗೂ ಆಡಳಿತ ಪಕ್ಷದ ಸದಸ್ಯರಿಗೆ ಸಲಹೆ ನೀಡಿ ಎಂದು ಸೂಚಿಸಿದರು.