150 ಕ್ಕೂ ಹೆಚ್ಚು ವಿದ್ಯಾರ್ಥಿಗಳ ಆತಂಕ ನಿವಾರಿಸಿದ ಸಚಿವ ಝಮೀರ್‌ ಅಹ್ಮದ್

Update: 2018-07-04 15:00 GMT

ಬೆಂಗಳೂರು, ಜು.4: ವೈದ್ಯಕೀಯ, ದಂತ ವೈದ್ಯಕೀಯ ಸೀಟುಗಳಿಗಾಗಿ ಅರ್ಜಿ ಸಲ್ಲಿಸಲು ಉದ್ದೇಶಿಸಿದ 150ಕ್ಕೂ ಹೆಚ್ಚು ಧಾರ್ಮಿಕ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಎದುರಿಸುತ್ತಿದ್ದ ಸಮಸ್ಯೆಯನ್ನು ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಸಚಿವ ಬಿ.ಝೆಡ್.ಝಮೀರ್‌ ಅಹ್ಮದ್‌ ಖಾನ್ ಬಗೆಹರಿಸಿದ್ದಾರೆ.

ರಾಜ್ಯ ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಕೆ ವೇಳೆ ವಿದ್ಯಾರ್ಥಿಗಳು ಧಾರ್ಮಿಕ ಅಲ್ಪಸಂಖ್ಯಾತರ ಪ್ರಮಾಣ ಪತ್ರವನ್ನು ಅಪ್‌ಲೋಡ್ ಮಾಡಲು ತಾಂತ್ರಿಕ ಸಮಸ್ಯೆ ಎದುರಾಗಿತ್ತು. ಈ ಸಂಬಂಧ ಸಾಕಷ್ಟು ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಸಚಿವರು ವಿಕಾಸಸೌಧದಲ್ಲಿರುವ ತಮ್ಮ ಕಚೇರಿಯಲ್ಲಿ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ನಸೀರ್ ಅಹ್ಮದ್, ರಾಜ್ಯ ಪರೀಕ್ಷಾ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸಮಸ್ಯೆಯನ್ನು ಬಗೆಹರಿಸಿದರು.

ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಝಮೀರ್‌ ಅಹ್ಮದ್‌ ಖಾನ್, ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸುಗಳ ಪ್ರವೇಶಕ್ಕಾಗಿ ಅರ್ಜಿಸಲ್ಲಿಸಲು ಮುಂದಾದ ಧಾರ್ಮಿಕ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳು, ತಮ್ಮ ಅರ್ಜಿಯೊಂದಿಗೆ ಧಾರ್ಮಿಕ ಅಲ್ಪಸಂಖ್ಯಾತ ಪ್ರಮಾಣ ಪತ್ರ ಸಲ್ಲಿಸಲು ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ತಾಂತ್ರಿಕ ಸಮಸ್ಯೆ ಎದುರಾಗಿತ್ತು ಎಂದರು.

ಈ ಸಂಬಂಧ ನನಗೆ ಹಲವಾರು ಪೋಷಕರು, ವಿದ್ಯಾರ್ಥಿಗಳು ದೂರವಾಣಿ ಮೂಲಕ ಸಂಪರ್ಕಿಸಿ, ಸಮಸ್ಯೆಯನ್ನು ಬಗೆಹರಿಸುವಂತೆ ಮನವಿ ಮಾಡಿದರು. ಈ ಹಿನ್ನೆಲೆಯಲ್ಲಿ ಕೂಡಲೆ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ನಸೀರ್‌ ಅಹ್ಮದ್, ರಾಜ್ಯ ಪರೀಕ್ಷಾ ಪ್ರಾಧಿಕಾರದ ಆಡಳಿತಾಧಿಕಾರಿ ಗಂಗಾಧರ್, ಕಾರ್ಯನಿರ್ವಾಹಕ ನಿರ್ದೇಶಕ ವಿನೋದ್‌ ಪ್ರಿಯಾ ಜೊತೆ ಸಭೆ ನಡೆಸಿ ಸಮಸ್ಯೆಯನ್ನು ಬಗೆಹರಿಸಿದ್ದೇವೆ ಎಂದು ಅವರು ಹೇಳಿದರು.

ಸಭೆಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಕಾರ್ಯದರ್ಶಿ ಮುಹಮ್ಮದ್ ಮೊಹ್ಸಿನ್, ಅಲ್ಪಸಂಖ್ಯಾತರ ಆಯೋಗದ ಕಾರ್ಯದರ್ಶಿ ಮುಹಮ್ಮದ್ ಸಿರಾಜ್, ವಕೀಲ ಮನ್ಝೂರ್ ಅಹ್ಮದ್ ಸೇರಿದಂತೆ ಇತರ ಅಧಿಕಾರಿಗಳು ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News