ಬಜೆಟ್‌ನಲ್ಲಿ ಅನ್ಯಾಯವಾಗಿದ್ದರೆ ಚರ್ಚಿಸಲಿ: ಮುಖ್ಯಮಂತ್ರಿ ಕುಮಾರಸ್ವಾಮಿ

Update: 2018-07-06 13:07 GMT

ಬೆಂಗಳೂರು, ಜು. 6: ರಾಜ್ಯದ ಸಮಗ್ರ ಅಭಿವೃದ್ಧಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ಮಂಡಿಸಿದ ಬಜೆಟ್ ಇದು. ಯಾವುದೇ ಜಿಲ್ಲೆ ಅಥವಾ ಯಾವುದೇ ಸಮುದಾಯಕ್ಕೆ ಅನ್ಯಾಯವಾಗಿದ್ದರೆ ಅದರ ಬಗ್ಗೆ ಚರ್ಚೆ ಮಾಡಲಿ ಎಂದು ಸಿಎಂ ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.

ಶುಕ್ರವಾರ ಬಾಬು ಜಗಜೀವನ್ ರಾಂ ಅವರ 32ನೆ ಪುಣ್ಯಸ್ಮರಣೆ ಅಂಗವಾಗಿ ವಿಧಾನಸೌಧದಲ್ಲಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದ ಬಳಿಕ ಮಾತನಾಡಿದ ಅವರು, ಕೇಂದ್ರ ಸರಕಾರ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಮಾಡಿದ್ದು ಇವರ ಕಣ್ಣಿಗೆ ಕಾಣಲಿಲ್ಲವೇ ಎಂದು ತೀಕ್ಷ್ಮವಾಗಿ ಪ್ರಶ್ನಿಸಿದರು. ಕರಾವಳಿ ಭಾಗವನ್ನು ನಿರ್ಲಕ್ಷ ಮಾಡಿಲ್ಲ. ಹಿಂದಿನ ಸರಕಾರ ಆ ಭಾಗಕ್ಕೆ ಆದ್ಯತೆ ನೀಡಿದೆ. ಮೀನುಗಾರರ ಸಮಸ್ಯೆಗೆ 150 ಕೋಟಿ ರೂ.ಮೀಸಲಿಟ್ಟಿದೆ. ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಕ್ಲಸ್ಟರ್ ನಿರ್ಮಾಣಕ್ಕೆ ಹಣ ನೀಡಲಾಗಿದೆ. ಇದು ಕೆಲ ಜಿಲ್ಲೆಗಳಿಗೆ ಸೀಮಿತ ಬಜೆಟ್ ಖಂಡಿತ ಅಲ್ಲ ಎಂದು ಸ್ಪಷ್ಟಪಡಿಸಿದರು.

ಹಿಂದಿನ ಸರಕಾರದ ಎಲ್ಲ ಯೋಜನೆಗಳನ್ನು ಮುಂದುವರಿಸುವ ಘೋಷಣೆ ಮಾಡಿದ್ದೇನೆ. ಆದರೂ, ಇದು ಬಿಜೆಪಿ ಮುಖಂಡರಿಗೆ ಅರ್ಥ ಆಗುವುದಿಲ್ಲ ಎಂದರೆ ನಾವು ಏನೂ ಮಾಡಲು ಆಗುವುದಿಲ್ಲ. ಸದನದಲ್ಲಿ ಈ ಬಗ್ಗೆ ಚರ್ಚೆ ಮಾಡಿದರೆ ಸೂಕ್ತ ಉತ್ತರ ನೀಡುತ್ತೇನೆ ಎಂದು ಹೇಳಿದರು.

ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಸಮಾಜಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ, ಬಿಬಿಎಂಪಿ ಮೇಯರ್ ಸಂಪತ್ ರಾಜ್, ಸಮಾಜ ಕಲ್ಯಾಣ ಇಲಾಖೆ ಕಾರ್ಯದರ್ಶಿ ಎಂ.ಲಕ್ಷ್ಮಿನಾರಾಯಣ, ಆಯುಕ್ತ ವಿಕಾಸ್ ಕುಮಾರ್ ವಿಕಾಸ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News