ವೆುಟ್ರೊಗೆ ಇನ್ಫೋಸಿಸ್ ವತಿಯಿಂದ 200 ಕೋಟಿ ಕೊಡುಗೆ

Update: 2018-07-07 14:03 GMT

ಬೆಂಗಳೂರು, ಜು.7: ನಮ್ಮ ಮೆಟ್ರೋ ರೈಲು ಯೋಜನೆಗೆ ಇನ್ಫೋಸಿಸ್ ಪ್ರತಿಷ್ಠಾನ ಆರ್ಥಿಕ ನೆರವು ನೀಡಲು ಮುಂದೆ ಬಂದಿದ್ದು, ಇತರೆ ಕಾರ್ಪೊರೇಟ್ ಸಂಸ್ಥೆಗಳಿಗೂ ಇದು ಮಾದರಿಯಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಇಂದಿಲ್ಲಿ ತಿಳಿಸಿದ್ದಾರೆ.

ಶನಿವಾರ ಗೃಹ ಕಚೇರಿ ಕೃಷ್ಣಾದಲ್ಲಿ ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಎನ್.ಸುಧಾಮೂರ್ತಿ, ಸಹ ಸಂಸ್ಥಾಪಕ ಕ್ರಿಸ್ ಗೋಪಾಲಕೃಷ್ಣ ಅವರು ಭೇಟಿ ಮಾಡಿ ಮಾತುಕತೆ ನಡೆಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಕರ್ನಾಟಕದಲ್ಲಿ ನಾರಾಯಣಮೂರ್ತಿ ಕುಟುಂಬ ಐಟಿ ಕ್ಷೇತ್ರದಲ್ಲಿ ಪ್ರಮುಖವಾಗಿದೆ. ಇನ್ಫೋಸಿಸ್ ಪ್ರತಿಷ್ಠಾನದ ವತಿಯಿಂದ ಸಾರ್ವಜನಿಕರಿಗೆ ಉಪಯುಕ್ತವಾಗುವ ಹಲವಾರು ಕಾರ್ಯಗಳಾಗಿವೆ ಎಂದ ಮುಖ್ಯಮಂತ್ರಿಗಳು, ಇದೀಗ ಮೆಟ್ರೋ ನಿಲ್ದಾಣ ಮತ್ತು ಹಳಿಗಳ ನಿರ್ಮಾಣಕ್ಕೆ 200 ಕೋಟಿಗಳನ್ನು ವ್ಯಯಿಸಲು ತೀರ್ಮಾನಿಸಿದ್ದಾರೆ. ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಗೆ ದೊಡ್ಡ ಮಟ್ಟದ ಕೊಡುಗೆ ನೀಡಿದ್ದಾರಲ್ಲದೆ, ಶಿಕ್ಷಣ ಕ್ಷೇತ್ರಕ್ಕೂ ಮಹತ್ವದ ಕೊಡುಗೆ ನೀಡಿದ್ದಾರೆ. ಈ ರೀತಿಯ ಕಾರ್ಯಕ್ರಮಗಳ ಮೂಲಕ ರಾಜ್ಯದ ಅಭಿವೃದ್ಧಿಗೆ ಕಾರಣೀಭೂತರಾಗಿದ್ದಾರೆ ಎಂದರು.

ಮೆಟ್ರೊ ನಿಲ್ದಾಣ ಹಾಗೂ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಬಿಎಂಆರ್‌ಸಿಎಲ್ ಜತೆ ಒಪ್ಪಂದ ಮಾಡಿಕೊಳ್ಳಲು ಸಮಯ ನಿಗದಿ ಮಾಡಲು ಅವರು ಇಂದು ತಮ್ಮನ್ನು ಭೇಟಿಯಾಗಿದ್ದರು. ಜು.19 ರಂದು ಮೆಟ್ರೊಗೆ ಸಂಬಂಧಿಸಿದಂತೆ ಇನ್ಫೋಸಿಸ್ ಪ್ರತಿಷ್ಠಾನ ಹಾಗೂ ಬಿಎಂಆರ್‌ಸಿಎಲ್ ನಡುವೆ ಒಪ್ಪಂದ ಏರ್ಪಡಲಿದೆ ಎಂದು ಕುಮಾರಸ್ವಾಮಿ ಹೇಳಿದರು.

ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಮಾತನಾಡಿ, ಜನಸಾಮಾನ್ಯರಿಗೆ ಅನುಕೂಲವಾಗಬೇಕು ಎಂಬುದು ನಮ್ಮ ಉದ್ದೇಶವಾಗಿದೆ. ಕೋನೇನ ಅಗ್ರಹಾರದಲ್ಲಿ ಅತ್ಯುತ್ತಮವಾದ ಮೆಟ್ರೊ ರೈಲು ನಿಲ್ದಾಣ ಸ್ಥಾಪನೆ ಮಾಡಲು ನಿರ್ಧರಿಸಿದ್ದೇವೆ. ಮೆಟ್ರೋ ನಿಲ್ದಾಣ ಮತ್ತು ಹಳಿಗಳ ನಿರ್ಮಾಣ ಪೂರ್ಣಗೊಂಡ ನಂತರ 30 ವರ್ಷಗಳ ವರೆಗೆ ಅದರ ನಿರ್ವಹಣೆಯನ್ನು ಇನ್ಫೋಸಿಸ್ ಪ್ರತಿಷ್ಠಾನದ ಮೂಲಕ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News