ಜು.11 ರಂದು ದಿನೇಶ್ ಗುಂಡೂರಾವ್ ಕೆಪಿಸಿಸಿ ಅಧ್ಯಕ್ಷರಾಗಿ ಪದಗ್ರಹಣ

Update: 2018-07-07 17:40 GMT

ಮಡಿಕೇರಿ, ಜು.7: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾದ ದಿನೇಶ್ ಗುಂಡೂರಾವ್ ಅವರು ಜು.11 ರಂದು ಅಧಿಕಾರ ಸ್ವೀಕಾರ ಮಾಡಲಿದ್ದು, ಈ ಕಾರ್ಯಕ್ರಮಕ್ಕೆ ಕೊಡಗು ಜಿಲ್ಲೆಯಿಂದ ಸುಮಾರು 300ಕ್ಕೂ ಅಧಿಕ ಮಂದಿ ಕಾಂಗ್ರೆಸ್ ನಾಯಕರು, ಜನಪ್ರತಿನಿಧಿಗಳು, ಕಾರ್ಯಕರ್ತರುಗಳು ಭಾಗವಹಿಸಲಿದ್ದಾರೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಎಂ.ಬಿ.ಶಿವು ಮಾದಪ್ಪ ತಿಳಿಸಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಅವರು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುವ ಕೆಪಿಸಿಸಿ ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಕೊಡಗು ಜಿಲ್ಲಾ ಕಾಂಗ್ರೆಸ್‍ನ ಪದಾಧಿಕಾರಿಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಮುಂಚೂಣಿ ಘಟಕಗಳ ಅಧ್ಯಕ್ಷರು, ಚುನಾಯಿತ ಪ್ರತಿನಿಧಿಗಳು ಹಾಗೂ ಎಲ್ಲಾ ವಲಯ ಕಾಂಗ್ರೆಸ್ ಅಧ್ಯಕ್ಷರು, ಕಾರ್ಯಕರ್ತರುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದ್ದಾರೆ.

ದಿನೇಶ್ ಗುಂಡೂರಾವ್ ಅವರು ಸಚಿವರಾಗಿದ್ದ ಸಂದರ್ಭದಲ್ಲಿ ಕೊಡಗಿನ ಉಸ್ತುವಾರಿ ಸಚಿವರಾಗಿ ಜಿಲ್ಲೆಯ ಸಮಸ್ಯೆಗಳಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸಿದ್ದು, ಇನ್ನು ಮುಂದೆಯೂ ಜಿಲ್ಲೆಯ ಜನರ ಹಿತವನ್ನು ಬಯಸುವವರಾಗಿದ್ದಾರೆ ಎಂದು ಬಣ್ಣಿಸಿದ್ದಾರೆ.

ಪಕ್ಷದ ರಾಜ್ಯ ನಾಯಕರುಗಳಾದ ಡಾ.ಜಿ.ಪರಮೇಶ್ವರ್, ಕೆ.ಸಿ.ವೇಣುಗೋಪಾಲ್, ಸಿದ್ದರಾಮಯ್ಯ ಸೇರಿದಂತೆ ಅನೇಕರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಶಿವುಮಾದಪ್ಪ ತಿಳಿಸಿದ್ದಾರೆ. ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ಮೂಲಕ ಕೆಪಿಸಿಸಿ ಅಧ್ಯಕ್ಷರ ಕೈಯನ್ನು ಬಲಗೊಳಿಸಬೇಕೆಂದು ಮನವಿ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News