ನಿಗಮ-ಮಂಡಳಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಶಾಸಕರ ತೀವ್ರ ಲಾಬಿ
ಬೆಂಗಳೂರು, ಜು. 9: ಸಚಿವ ಸ್ಥಾನ ಕೈತಪ್ಪಿದ ಶಾಸಕರು ಇದೀಗ ಪ್ರಮುಖ ನಿಗಮ-ಮಂಡಳಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕಾಗಿ ಲಾಬಿ ಆರಂಭಿಸಿದ್ದು, ಸಮನ್ವಯ ಸಮಿತಿ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ ಶೀಘ್ರದಲ್ಲೆ ನಿಗಮ-ಮಂಡಳಿಗಳಿಗೆ ನೇಮಕ ಮಾಡುವ ಸಾಧ್ಯತೆಗಳಿವೆ.
ಕಾಂಗ್ರೆಸ್ ಪಕ್ಷದ 20 ಮಂದಿ ಶಾಸಕರು ಹಾಗೂ ಮೂವತ್ತು ಮಂದಿ ಪಕ್ಷದ ಕಾರ್ಯಕರ್ತರಿಗೆ ನಿಗಮ-ಮಂಡಳಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನ ಕಲ್ಪಿಸಲಿದ್ದು, ಈಗಾಗಲೇ ‘ಕೈ’ ಆಕಾಂಕ್ಷಿಗಳ ಪಟ್ಟಿಯನ್ನು ಸಿದ್ದಪಡಿಸಿದ್ದು, ಅಧಿವೇಶನದ ಬಳಿಕ ನೇಮಕಾತಿ ಪ್ರಕ್ರಿಯೆ ಆರಂಭಗೊಳ್ಳಲಿದೆ ಎಂದು ಗೊತ್ತಾಗಿದೆ.
ಈ ಮಧ್ಯೆ ನಿಮಗ ಮಂಡಳಿಗಳ ಪೈಕಿ ಅತ್ಯಂತ ಪ್ರಮುಖವಾದ ‘ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನಕ್ಕೆ ಶಾಸಕರಾದ ಹೆಬ್ಬಾಳ ಕ್ಷೇತ್ರದ ಶಾಸಕ ಬೈರತಿ ಸುರೇಶ್, ಹೊಸಕೋಟೆ ಕ್ಷೇತ್ರದ ಶಾಸಕ ಎಂಟಿಬಿ ನಾಗರಾಜ್ ತೀವ್ರ ಲಾಬಿ ನಡೆಸಿದ್ದಾರೆಂದು ತಿಳಿದು ಬಂದಿದೆ.
ಮಾಜಿ ಮುಖ್ಯಮಂತ್ರಿ ಹಾಗೂ ಮೈತ್ರಿಕೂಟ ಸರಕಾರದ ಸಮನ್ವಯ ಸಮಿತಿ ಅಧ್ಯಕ್ಷರೂ ಆಗಿರುವ ಸಿದ್ದರಾಮಯ್ಯ ಶಾಸಕರಾದ ಬೈರತಿ ಸುರೇಶ್ ಹಾಗೂ ಎಂಟಿಬಿ ನಾಗರಾಜ್ ಪರ ಲಾಬಿ ನಡೆಸಿದ್ದಾರೆ ಎನ್ನಲಾಗಿದ್ದು, ಅತ್ಯಂತ ಪ್ರಭಾವಿ ಎಂದೆ ಹೇಳಲಾಗುವ ಬಿಡಿಎ ಅಧ್ಯಕ್ಷ ಸ್ಥಾನ ಯಾರಿಗೆ ದಕ್ಕಲಿದೆ ಎಂಬ ಕುತೂಹಲ ಸೃಷ್ಟಿಸಿದೆ.
ಈ ಮಧ್ಯೆ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತನ್ನ ಹಿಡಿತದಲ್ಲೆ ಇರುವ ಬಿಡಿಎ ಅಧ್ಯಕ್ಷ ಸ್ಥಾನಕ್ಕೆ ತಮ್ಮ ಆಪ್ತರಿಗೆ ಕೊಡಲು ಪ್ರಯತ್ನ ಮುಂದುವರಿಸಿದ್ದಾರೆ. ಹೀಗಾಗಿ ವರಿಷ್ಠರು ಯಾರಿಗೆ ಒಳವು ವ್ಯಕ್ತಪಡಿಸಲಿದ್ದಾರೆಂಬುದನ್ನು ಕಾದುನೋಡಬೇಕು.
ಈಗಾಗಲೇ ಕೆಪಿಸಿಸಿಗೆ ನೂತನ ಅಧ್ಯಕ್ಷರನ್ನಾಗಿ ದಿನೇಶ್ ಗುಂಡೂರಾವ್ ಅವರನ್ನು ನೇಮಕ ಮಾಡಿದ್ದು, ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಎಸ್.ಆರ್.ಪಾಟೀಲ್ ಅವರ ಹೆಸರು ಕೇಳಿಬರುತ್ತಿದೆ. ಆದರೆ, ಸಮನ್ವಯ ಸಮಿತಿ ಸಭೆಯಲ್ಲಿ ಈ ಬಗ್ಗೆ ಉಭಯ ಪಕ್ಷಗಳ ಮುಖಂಡರು ಚರ್ಚಿಸಿ ಅಂತಿಮಗೊಳಿಸಬೇಕಿದೆ.