ನರ್ಸಿಂಗ್ ಕಾಲೇಜುಗಳಲ್ಲಿ ಅಂಕಪಟ್ಟಿ ತಿದ್ದುಪಡಿ ಮಾಡುವವರ ವಿರುದ್ಧ ಸೂಕ್ತ ಕ್ರಮ: ಡಿಕೆ ಶಿವಕುಮಾರ್

Update: 2018-07-09 15:18 GMT

ಬೆಂಗಳೂರು, ಜು.9: ನರ್ಸಿಂಗ್ ಕಾಲೇಜುಗಳಲ್ಲಿ ಅಂಕಪಟ್ಟಿ ತಿದ್ದುಪಡಿ ಮಾಡಿರುವ ಪ್ರಕರಣಗಳು ಸರಕಾರದ ಗಮನಕ್ಕೆ ಬಂದಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿದ್ದು, ಕಟ್ಟುನಿಟ್ಟಿನ ಕಾನೂನಿನ ಕ್ರಮ ಕೈಗೊಳ್ಳಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಚಿವ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಸೋಮವಾರ ವಿಧಾನ ಪರಿಷತ್‌ನಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ರಿಜ್ವಾನ್ ಅರ್ಷದ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಹಾಸ್ಮಟ್ ಗ್ರೂಪ್ ಆಫ್ ಇನ್ಸ್‌ಟಿಟ್ಯೂಷನ್ಸ್ ಮತ್ತು ಬೆಥೆಲ್ ಇನ್‌ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸಸ್ ಸೇರಿ ನರ್ಸಿಂಗ್ ಕಾಲೇಜುಗಳಲ್ಲಿ ನರ್ಸಿಂಗ್ ಕೋರ್ಸ್‌ನ ಅಂಕಪಟ್ಟಿ ತಿದ್ದುಪಡಿ ಮಾಡಿರುವ ಪ್ರಕರಣ ಮೇಲ್ನೋಟಕ್ಕೆ ಸಾಬೀತಾಗಿದ್ದು, ಹೆಚ್ಚಿನ ತನಿಖೆಗೆ ಸಿಐಡಿಗೆ ವಹಿಸಲಾಗಿದೆ. ವರದಿ ಬಂದ ತಕ್ಷಣ ಕಾನೂನು ರೀತಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಇನ್ನು ಹಲವು ನರ್ಸಿಂಗ್ ಕಾಲೇಜುಗಳು ಒಂದಕ್ಕೆ ಪರವಾನಿಗೆ ಪಡೆದು, ನಾಲ್ಕೈದು ಕಾಲೇಜುಗಳು ನಡೆಸುವುದು, ನಕಲಿ ಅಂಕಪಟ್ಟಿ ಸೃಷ್ಟಿಸುವುದು ಸೇರಿದಂತೆ ಹಲವು ಅಕ್ರಮಗಳನ್ನು ನಡೆಸುತ್ತಿವೆ. ಈ ಎಲ್ಲದಕ್ಕೂ ಕಡಿವಾಣ ಹಾಕಬೇಕಾಗಿದೆ ಎಂದು ಹೇಳಿದರು.

ನಕಲಿ ವೈದ್ಯಕೀಯ ಪ್ರಮಾಣ ಪತ್ರಗಳನ್ನು ಸೃಷ್ಟಿಸಿ ಮಾರಾಟ ಮಾಡುವುದು ಮತ್ತು ಅಂಕಪಟ್ಟಿ ತಿದ್ದುವ ಪ್ರಕರಣದಲ್ಲಿ ಯಾವುದೇ ವೈದ್ಯಕೀಯ ಕಾಲೇಜುಗಳು ಭಾಗಿಯಾಗಿರುವುದು ಕಂಡುಬಂದಿಲ್ಲ. ಆದರೆ ನರ್ಸಿಂಗ್ ಕೋರ್ಸ್‌ನ ಅಂಕಪಟ್ಟಿ ತಿದ್ದುಪಡಿ ಮಾಡಿರುವ ಪ್ರಕರಣ ಸರಕಾರದ ಗಮನಕ್ಕೆ ಬಂದಿದೆ. ತನಿಖೆ ನಂತರ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News