ಖಾಸಗಿ ಕೃಷಿ ಕಾಲೇಜು ಪ್ರಾರಂಭಿಸಲು ಅನುಮತಿ ನೀಡುವುದಿಲ್ಲ: ಸಚಿವ ಎನ್.ಎಚ್.ಶಿವಶಂಕರರೆಡ್ಡಿ
ಬೆಂಗಳೂರು, ಜು. 9: ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಖಾಸಗಿ ವಿಶ್ವವಿದ್ಯಾನಿಲಯಗಳಿಗೆ ಕೃಷಿ ಕಾಲೇಜು ಪ್ರಾರಂಭಿಸಲು ಅನುಮತಿ ನೀಡದಿರುವ ಸಂಬಂಧ ಕಾನೂನಿಗೆ ತಿದ್ದುಪಡಿ ತರಲು ಸರಕಾರ ಮುಂದಾಗಿದೆ ಎಂದು ಕೃಷಿ ಸಚಿವ ಎನ್.ಎಚ್. ಶಿವಶಂಕರರೆಡ್ಡಿ ಹೇಳಿದ್ದಾರೆ.
ಸೋಮವಾರ ವಿಧಾನ ಪರಿಷತ್‌ನಲ್ಲಿ ಬಿಜೆಪಿಯ ಸದಸ್ಯ ಎನ್.ರವಿಕುಮಾರ್ ನಿಯಮ 72ರಡಿ ಮಂಡಿಸಿದ ಗಮನ ಸೆಳೆಯುವ ಸೂಚನೆಗೆ ಉತ್ತರ ನೀಡಿದ ಸಚಿವರು, ಸಾಧ್ಯವಾದರೆ ಈ ಅಧಿವೇಶನದಲ್ಲೆ ವಿಧೇಯಕವನ್ನು ಮಂಡಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ದೊಡ್ಡಬಳ್ಳಾಪುರದ ರೈ ಟೆಕ್ನಾಲಜಿ ವಿಶ್ವವಿದ್ಯಾನಿಲಯ ಮತ್ತು ಕಲ್ಬುರ್ಗಿಯ ಸಿಂಗಾನಿಯಾ ಕೃಷಿ ಕಾಲೇಜುಗಳ ಸಂಬಂಧ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ವಿದ್ಯಾರ್ಥಿಗಳ ಮನವೊಲಿಸಿ ಪ್ರತಿಭಟನೆ ವಾಪಸ್ ಪಡೆಯುವಂತೆ ಮಾಡಿದ್ದಾರೆ ಎಂದರು. ಖಾಸಗಿ ವಿಶ್ವವಿದ್ಯಾನಿಲಯಗಳು ಬೇರೆ ಬೇರೆ ವಿಷಯಗಳನ್ನು ಬೋಧಿಸಬಹುದು. ಆದರೆ ಕೃಷಿಗೆ ಸಂಬಂಧಿಸಿದ ವಿಷಯಗಳನ್ನು ಬೋಧಿಸಲು ನಿರ್ಬಂಧ ಹೇರಲಾಗಿದೆ ಎಂದು ತಿಳಿಸಿದರು.
ದೊಡ್ಡಬಳ್ಳಾಪುರ ಮತ್ತು ಕಲ್ಬುರ್ಗಿ ಖಾಸಗಿ ವಿಶ್ವವಿದ್ಯಾನಿಲಯಗಳು ನಿಯಮ ಮೀರಿ ವಿದ್ಯಾರ್ಥಿಗಳನ್ನು ಪ್ರವೇಶ ಮಾಡಿಕೊಳ್ಳುವ ಜೊತೆಗೆ ದುಬಾರಿ ಶುಲ್ಕ ವಿಧಿಸಿವೆ. ಈ ಸಂಬಂಧ ತನಿಖೆ ನಡೆಸುವಂತೆ ಉನ್ನತ ಶಿಕ್ಷಣ ಪರಿಷತ್‌ಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.
ಕೃಷಿ ಕಾಲೇಜುಗಳನ್ನು ಸ್ಥಾಪನೆ ಮಾಡಲು ಸರಕಾರ ಕೆಲವೊಂದು ನಿಬಂಧನೆಗಳನ್ನು ಹಾಕಿದೆ. ಆದರೆ ಆ ನಿಬಂಧನೆಗಳನ್ನು ಪಾಲನೆ ಮಾಡದೆ ಈ ಎರಡು ವಿಶ್ವವಿದ್ಯಾನಿಲಯಗಳು ಮುಂದಾಗಿದ್ದರಿಂದವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು. ಅವರ ಮನವೊಲಿಸಿ ಪ್ರತಿಭಟನೆಯನ್ನು ವಾಪಸ್ ಪಡೆಯುವಲ್ಲಿ ಸರಕಾರ ಯಶಸ್ವಿಯಾಗಿದೆ ಎಂದರು.
ಇದೆ ವೇಳೆ ಮಾತನಾಡಿದ ಸಚಿವ ಕೃಷ್ಣ ಭೈರೇಗೌಡ ಅವರು, 2012ರಲ್ಲಿ ಖಾಸಗಿ ವಿಶ್ವವಿದ್ಯಾನಿಲಯಗಳಿಗೆ ಕಾನೂನಿಗೆ ತಿದ್ದುಪಡಿ ತಂದು ನಾವೇ ಅವಕಾಶ ಮಾಡಿಕೊಟ್ಟಿದ್ದೇವೆ. ಈಗ ಕೋರ್ಸ್‌ಗಳನ್ನು ತೆಗೆಯಬೇಕಾದರೆ ಕಾನೂನಿನ ಸಾಧಕ-ಬಾಧಕಗಳನ್ನು ಚರ್ಚಿಸಿ ಹೆಜ್ಜೆ ಇಡಬೇಕಾಗಿದೆ ಎಂದರು.