ಮಲೆನಾಡಿನಲ್ಲಿ ಭೂಮಿಯೊಳಗೆ ‘ವಿದ್ಯುತ್ ಲೈನ್’ ಅಳವಡಿಸಲು ಕ್ರಮ: ಮುಖ್ಯಮಂತ್ರಿ ಕುಮಾರಸ್ವಾಮಿ
ಬೆಂಗಳೂರು, ಜು. 10: ಮಲೆನಾಡು ಭಾಗದಲ್ಲಿ ತೀವ್ರ ಮಳೆ ಹಿನ್ನೆಲೆಯಲ್ಲಿ ವಿದ್ಯುತ್ ಪೂರೈಕೆಯಲ್ಲಿನ ವ್ಯತ್ಯಯವನ್ನು ತಪ್ಪಿಸಲು ಭೂಮಿಯೊಳಗೆ ವಿದ್ಯುತ್ ಲೈನ್ ಅಳವಡಿಸುವ ಸಂಬಂಧ ಚರ್ಚಿಸಿ ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.
ಮಂಗಳವಾರ ವಿಧಾನಸಭೆ ಪ್ರಶ್ನೋತ್ತರ ಅವಧಿಯಲ್ಲಿ ಸದಸ್ಯರಾದ ರಾಜೇಗೌಡ, ಸಿ.ಟಿ.ರವಿ. ಅರಗ ಜ್ಞಾನೇಂದ್ರ ಪ್ರಸ್ತಾಪಿಸಿದ ವಿಷಯಕ್ಕೆ ಉತ್ತರ ನೀಡಿದ ಅವರು, ಮಲೆನಾಡಿನಲ್ಲಿ ಮಳೆ-ಗಾಳಿಯಿಂದ ವಿದ್ಯುತ್ ಕಂಬಗಳು ಬಿದ್ದು, ವಿದ್ಯುತ್ ಪೂರೈಕೆಯಲ್ಲಿ ತೊಂದರೆಯಾಗುತ್ತಿದೆ ಎಂಬುದು ಸರಕಾರದ ಗಮನಕ್ಕೆ ಬಂದಿದೆ. ಈಗಾಗಲೇ ಬಿದ್ದ ವಿದ್ಯುತ್ ಕಂಬಗಳ ದುರಸ್ತಿ ಕೈಗೊಂಡಿದ್ದು, ಹೊಸ ವಿದ್ಯುತ್ ಕಂಬಗಳನ್ನು ಅಳವಡಿಸಲಾಗಿದೆ. ಹೀಗಾಗಿ ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲು ನೆಲದೊಳಗೆ ವಿದ್ಯುತ್ ಲೈನ್ ಅಳವಡಿಸಲು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಕುಮಾರಸ್ವಾಮಿ ಭರವಸೆ ನೀಡಿದರು.
ಶಾಸಕರ ಸಭೆ: ವಿದ್ಯುತ್ ಕಂಬ ಹಾಗೂ ಲೈನ್‌ಗಳ ಮೇಲೆ ಬಾಗಿರುವ ಮರದ ಕೊಂಬೆಗಳನ್ನು ಕಡಿಯಲು ಅರಣ್ಯ ಇಲಾಖೆ ಅಡ್ಡಿಪಡಿಸುತ್ತಿದ್ದು, ಈ ಬಗ್ಗೆ ಅರಣ್ಯ ಮತ್ತು ಇಂಧನ ಇಲಾಖೆ ಅಧಿಕಾರಿಗಳು ಹಾಗೂ ಮಲೆನಾಡು ಭಾಗದ ಶಾಸಕರ ಸಭೆ ಕರೆದು ಸಮಸ್ಯೆ ಪರಿಹರಿಸಲಾಗುವುದು ಎಂದು ಕುಮಾರಸ್ವಾಮಿ ಹೇಳಿದರು.
‘ಕೆಟ್ಟಿರುವ ವಿದ್ಯುತ್ ಪರಿವರ್ತಕಗಳನ್ನು ನಗರ ಪ್ರದೇಶದಲ್ಲಿ 24 ಗಂಟೆಯೊಳಗೆ ಹಾಗೂ ಗ್ರಾಮೀಣ ಪ್ರದೇಶದಲ್ಲಿ 72 ಗಂಟೆಯೊಳಗೆ ಬದಲಾವಣೆ ಮಾಡಬೇಕೆಂಬ ನಿಯಮವಿದೆ. ಈ ನಿಯಮ ಪಾಲಿಸದ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು’
-ಕುಮಾರಸ್ವಾಮಿ ಮುಖ್ಯಮಂತ್ರಿ