ಅಧಿವೇಶನದ ಬಳಿಕ ಮಲೆನಾಡಿನಲ್ಲಿ ಗ್ರಾಮ ವಾಸ್ತವ್ಯ: ಮುಖ್ಯಮಂತ್ರಿ ಕುಮಾರಸ್ವಾಮಿ
ಬೆಂಗಳೂರು, ಜು. 10: ಶಿವಮೊಗ್ಗದ ತೀರ್ಥಹಳ್ಳಿ ತಾಲೂಕಿನ ಕೆಂದಾಳುಬೈಲು ಸಮೀಪದ ದೊಡ್ಲಿಮನೆಯಲ್ಲಿ ಹಳ್ಳದ ನೀರಿನಲ್ಲಿ ಕೊಚ್ಚಿಹೋದ ಪ್ರಕರಣವನ್ನು ರಾಜ್ಯ ಸರಕಾರ ಗಂಭೀರವಾಗಿ ಪರಿಗಣಿಸಿದ್ದು, ಸೂಕ್ತ ಪರಿಹಾರ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ತಿಳಿಸಿದ್ದಾರೆ.
ಮಂಗಳವಾರ ವಿಧಾನಸಭೆ ಶೂನ್ಯವೇಳೆಯಲ್ಲಿ ಬಿಜೆಪಿ ಸದಸ್ಯ ಅರಗ ಜ್ಞಾನೇಂದ್ರ ಪ್ರಸ್ತಾಪಿಸಿದ ವಿಷಯಕ್ಕೆ ಉತ್ತರ ನೀಡಿದ ಅವರು, ಮಲೆನಾಡಿನ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ದೃಷ್ಟಿಯಿಂದ ಅಧಿವೇಶನದ ಬಳಿಕ ನಾನೇ ಆ ಭಾಗದಲ್ಲಿ ಗ್ರಾಮ ವಾಸ್ತವ್ಯ ಮಾಡುತ್ತೇನೆ ಎಂದು ಹೇಳಿದರು.
ಬಾಲಕಿಯ ಕುಟುಂಬಕ್ಕೆ 10ಲಕ್ಷ ರೂ.ಪರಿಹಾರ ನೀಡಲು ಸೂಚಿಸಿದ್ದೇನೆ. ಮುಂದೆ ಇಂತಹ ಘಟನೆ ಮರುಕುಳಿಸದಂತೆ ಎಚ್ಚರ ವಹಿಸಲು ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದ ಅವರು, ಶಿಥಿಲಾವಸ್ಥೆಯಲ್ಲಿರುವ ಮರದ ಸೇತುವೆಗಳ ದುರಸ್ತಿಗೆ ತಕ್ಷಣವೇ ಕ್ರಮ ಕೈಗೊಳ್ಳಬೇಕೆಂದು ನಿರ್ದೇಶನ ನೀಡಿದರು.
‘ರಾಜ್ಯದಲ್ಲಿನ 102 ಪ್ರಥಮ ದರ್ಜೆ ಕಾಲೇಜುಗಳ ಕಟ್ಟಡ ದುರಸ್ತಿಗೆ 500 ಕೋಟಿ ರೂ.ಹಾಗೂ ಪ್ರಾಥಮಿಕ ಶಾಲಾ ಕಟ್ಟಡ ಹಾಗೂ ಮೂಲಸೌಕರ್ಯ ಕಲ್ಪಿಸಲು 250 ಕೋಟಿ ರೂ.ಒದಗಿಸಲಾಗುವುದು. ಮಲೆನಾಡು ಭಾಗದಲ್ಲಿನ ಸರಕಾರಿ ಶಾಲೆಗಳಿಗೆ ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸಲು ಕ್ರಮ ವಹಿಸಲಾಗುವುದು’
-ಕುಮಾರಸ್ವಾಮಿ, ಮುಖ್ಯಮಂತ್ರಿ