ಮಹಿಳಾ ಮೀಸಲಾತಿ ಕಾನೂನು ಪರಿಸ್ಥಿತಿ ಏನಾಗಿದೆ: ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಪ್ರಶ್ನೆ

Update: 2018-07-10 14:38 GMT

ಬೆಂಗಳೂರು, ಜು.10: 2014ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿಯ ಪ್ರಧಾನಿ ಅಭ್ಯರ್ಥಿಯಾಗಿದ್ದ ನರೇಂದ್ರಮೋದಿ, ತಮ್ಮ ಪ್ರಣಾಳಿಕೆಯಲ್ಲಿ ನಾವು ಸ್ವತಂತ್ರವಾಗಿ ಅಧಿಕಾರಕ್ಕೆ ಬಂದಲ್ಲಿ ಶಾಸನ ಸಭೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ಕಲ್ಪಿಸುವ ಕಾನೂನು ಜಾರಿಗೆ ತರುವುದಾಗಿ ಭರವಸೆ ನೀಡಿದ್ದರು. ಅದರ ಪರಿಸ್ಥಿತಿ ಏನಾಗಿದೆ ಎಂಬುದು ಗೊತ್ತಿಲ್ಲ ಎಂದು ಕಾಂಗ್ರೆಸ್ ಸದಸ್ಯೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.

ಮಂಗಳವಾರ ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಇದೇ ಪ್ರಥಮ ಬಾರಿಗೆ ಮಾತನಾಡಿದ ಅವರು, ರಾಜ್ಯ ಬಜೆಟ್‌ನಲ್ಲಿ ರೈತರ 34 ಸಾವಿರ ಕೋಟಿ ರೂ.ಸಾಲ ಮನ್ನಾ ಮಾಡುವ ತೀರ್ಮಾನ ಕೈಗೊಂಡಿದ್ದಕ್ಕೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯನ್ನು ಅಭಿನಂದಿಸುತ್ತೇನೆ ಎಂದರು.

ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದ್ದಂತೆ 2 ಕೋಟಿ ಉದ್ಯೋಗ ಸೃಷ್ಟಿ, ಸಂಸದರ ಆದರ್ಶ ಗ್ರಾಮ ಯೋಜನೆ, ಕಪ್ಪು ಹಣ ವಾಪಸ್ ತರುವ ಕುರಿತು ನೀಡಿದ್ದ ಭರವಸೆಗಳ ಕುರಿತು ನಾನು ಮಾತನಾಡುವುದಿಲ್ಲ. ಆದರೆ, ಸ್ವತಂತ್ರವಾಗಿ ಅಧಿಕಾರಕ್ಕೆ ಬಂದಲ್ಲಿ ಶಾಸನ ಸಭೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ಕಲ್ಪಿಸುವ ಕಾನೂನು ಜಾರಿಗೆ ತರುವುದಾಗಿ ಹೇಳಿದ್ದ ಭರವಸೆ ಏನಾಗಿದೆ ಗೊತ್ತಿಲ್ಲ ಎಂದು ಅವರು ಹೇಳಿದರು.

ರಾಜ್ಯದಲ್ಲಿ ಸತತ ಬರಗಾಲದಿಂದ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರು. ದೇಶದ ಇತಿಹಾಸದಲ್ಲೆ ಇದೇ ಮೊದಲ ಬಾರಿಗೆ ರಾಜ್ಯ ಸರಕಾರವೊಂದು ರೈತರ 34 ಸಾವಿರ ಕೋಟಿ ರೂ.ಸಾಲ ಮನ್ನಾ ಮಾಡುವ ತೀರ್ಮಾನ ಕೈಗೊಂಡಿದ್ದು ಅಭಿನಂದನಾರ್ಹ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.

ಸ್ತ್ರೀ ಶಕ್ತಿ ಸಂಘಗಳಿಗೆ ‘ಕಾಯಕ’ ಯೋಜನೆಯಡಿ 5 ಲಕ್ಷ ರೂ.ವರೆಗೆ ಬಡ್ಡಿರಹಿತ ಸಾಲ, ಆನಂತರ ಶೇ.4ರಷ್ಟು ಬಡ್ಡಿದರದಲ್ಲಿ 5 ಲಕ್ಷ ರೂ. ಹೀಗೆ ಒಟ್ಟು 10 ಲಕ್ಷ ರೂ.ವರೆಗೆ 3 ಸಾವಿರ ಸ್ತ್ರೀ ಶಕ್ತಿ ಸಂಘಗಳಿಗೆ ಸಾಲ ಸೌಲಭ್ಯ ನೀಡುವ ಯೋಜನೆಯು ಮಹಿಳಾ ಸಬಲೀಕರಣಕ್ಕೆ ಸಹಕಾರಿಯಾಗಲಿದೆ. ಆದರೆ, ಇದರ ಪ್ರಯೋಜನ ಹೆಚ್ಚಿನ ಸಂಘಗಳಿಗೆ ಸಿಗುವಂತೆ ಸರಕಾರ ಕ್ರಮ ಕೈಗೊಳ್ಳಬೇಕು ಎಂದು ಅವರು ಮನವಿ ಮಾಡಿದರು. ಗರ್ಭಿಣಿ ಸ್ತ್ರೀಯರಿಗೆ ಹೆರಿಗೆಗಿಂತ ಮುನ್ನ 3 ಮೂರು ತಿಂಗಳು ಹಾಗೂ ನಂತರ 3 ಮೂರು ತಿಂಗಳು ಮಾಸಿಕ 1 ಸಾವಿರ ರೂ. ಆರ್ಥಿಕ ನೆರವು ಒದಗಿಸುವ ಯೋಜನೆಯು ಬಡತನ ರೇಖೆಗಿಂತ ಕೆಳಗಿರುವ ಮಹಿಳೆಯರಿಗೆ ಪ್ರಯೋಜನಕಾರಿಯಾಗಲಿದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.

ಬೆಳಗಾವಿ ಜಿಲ್ಲೆಗೆ ಹೊಂದಿಕೊಂಡಿರುವ ನೆರೆಯ ರಾಜ್ಯದ ಕೋಲ್ಹಾಪುರ, ಮೀರಜ್‌ನಲ್ಲಿ ಯುವಕರಿಗೆ ಉದ್ಯೋಗ ಸೃಷ್ಟಿಗೆ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ನಮ್ಮ ಜಿಲ್ಲೆಯಲ್ಲಿ ಎಲ್ಲ ರೀತಿಯ ಮೂಲಭೂತ ಸೌಕರ್ಯಗಳು ಲಭ್ಯವಿದೆ. ಆದುದರಿಂದ, ಇಲ್ಲಿಯೂ ಕೈಗಾರಿಕೆಗಳ ಸ್ಥಾಪನೆ, ಉದ್ಯೋಗಾವಕಾಶಗಳ ಸೃಷ್ಟಿಗೆ ಹೆಚ್ಚಿನ ಒತ್ತು ನೀಡಬೇಕು. ಬೆಳಗಾವಿ ನಗರದ ಸಮಗ್ರ ಅಭಿವೃದ್ಧಿಗೆ 100 ಕೋಟಿ ರೂ.ಗಳ ವಿಶೇಷ ಅನುದಾನ ಒದಗಿಸಬೇಕು ಎಂದು ಅವರು ಕೋರಿದರು.

ನಾನು ಪ್ರತಿನಿಧಿಸುತ್ತಿರುವ ಬೆಳಗಾವಿ ಗ್ರಾಮಾಂತರ ಕ್ಷೇತ್ರವು ತೀರಾ ಹಿಂದುಳಿದಿದ್ದು, ಸ್ವತಂತ್ರ ಭಾರತದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸಿದಂತಾಗಿದೆ. ಬೆಳಗಾವಿ ಗ್ರಾಮಾಂತರ ಕ್ಷೇತ್ರದಲ್ಲೆ ಒಂದು ಅಣೆಕಟ್ಟು ಇದೆ. ಅದರಿಂದ ಇಡೀ ಬೆಳಗಾವಿ ನಗರಕ್ಕೆ ನೀರು ಪೂರೈಸಲಾಗುತ್ತದೆ. ಆದರೆ, ಬೆಳಗಾವಿ ಗ್ರಾಮಾಂತರ ಕ್ಷೇತ್ರಕ್ಕೆ ಮಾತ್ರ ನೀರಿನ ಸೌಲಭ್ಯವಿಲ್ಲ. ಈ ಬಗ್ಗೆ ಸರಕಾರ ಗಮನ ಹರಿಸಬೇಕು ಎಂದು ಅವರು ಮನವಿ ಮಾಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News