ಹೊಸ ರೇಶನ್ ಕಾರ್ಡ್, ಹೆಸರು ಸೇರ್ಪಡೆ, ತಿದ್ದುಪಡಿಗೆ ಅವಕಾಶ; ಜಿಪಂ ಮಾಸಿಕ ಕೆಡಿಪಿ ಸಭೆಯಲ್ಲಿ ಮಾಹಿತಿ

Update: 2018-07-11 13:55 GMT

ಉಡುಪಿ, ಜು.11: ರಾಜ್ಯ ಸರಕಾರ ಹೊಸ ರೇಶನ್ ಕಾರ್ಡ್‌ಗೆ ಅರ್ಜಿ ಸಲ್ಲಿಸಲು ಹಾಗೂ ಈಗಿನ ರೇಶನ್ ಕಾರ್ಡ್‌ಗೆ ಹೆಸರು ಸೇರಿಸಲು ಮತ್ತು ತಿದ್ದುಪಡಿಗೆ ಅವಕಾಶ ನೀಡಿದೆ ಎಂದು ಉಡುಪಿ ಜಿಲ್ಲಾ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಬುಧವಾರ ಮಣಿಪಾಲದ ಜಿಪಂ ಸಭಾಂಗಣದಲ್ಲಿ ಉಡುಪಿ ಜಿಪಂ ಅಧ್ಯಕ್ಷ ದಿನಕರಬಾಬು ಅವರ ಅಧ್ಯಕ್ಷತೆಯಲ್ಲಿ ನಡೆದ ಉಡುಪಿ ಜಿಲ್ಲಾ ಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಆಹಾರ ಇಲಾಖೆ ಅಧಿಕಾರಿಗಳು ಈ ವಿಷಯ ಪ್ರಕಟಿಸಿದರು.

ಚುನಾವಣೆ ಹಿನ್ನೆಲೆಯಲ್ಲಿ ಈ ಪ್ರಕ್ರಿಯೆಯನ್ನು ತಡೆ ಹಿಡಿಯಲಾಗಿತ್ತು. ಇದೀಗ ಈ ಪ್ರಕ್ರಿಯೆಯನ್ನು ಮುಂದುವರಿಸಲು ರಾಜ್ಯ ಸರಕಾರ ಸೂಚನೆ ನೀಡಿದೆ. ಗ್ರಾಮೀಣ ಪ್ರದೇಶದ ನಾಗರಿಕರು ಆಯಾ ಗ್ರಾಪಂಗಳಲ್ಲಿ ಹಾಗೂ ನಗರ ಪ್ರದೇಶಗಳಲ್ಲಿ ಇದಕ್ಕಾಗಿ ಗುರುತಿಸಿರುವ ಕೇಂದ್ರಗಳಲ್ಲಿ ಹೊಸ ರೇಶನ್ ಕಾರ್ಡ್‌ಗೆ ಅರ್ಜಿ ಅಥವಾ ಹೆಸರು ಸೇರ್ಪಡೆ ಮತ್ತು ತಿದ್ದುಪಡಿಗೆ ಅರ್ಜಿ ಸಲ್ಲಿಸಬಹುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕರು ಸಭೆಗೆ ವಿವರಿಸಿದರು.

ರಾಷ್ಟ್ರೀಯ ಉದ್ಯೋಗ ಖಾತ್ರಿ(ನರೇಗಾ) ಯೋಜನೆಯಡಿ ಸಾಕಷ್ಟು ಉದ್ಯೋಗಾವಕಾಶಗಳು ಲಭ್ಯವಿದ್ದರೂ, ಉಡುಪಿ ಜಿಲ್ಲೆಯಲ್ಲಿ ಕೆಲಸ ಮಾಡಲು ಜನರು ಮುಂದೆ ಬರುತ್ತಿಲ್ಲ. ಕೆಲವು ಗ್ರಾಪಂಗಳು ನರೇಗಾ ಯೋಜನೆಯಲ್ಲಿ ತಮ್ಮ ಗ್ರಾಪಂ ವ್ಯಾಪ್ತಿಯಲ್ಲಿ ಕೆಲಸ ಮಾಡಲು ಜನರು ಲ್ಯವಿಲ್ಲ ಎಂದು ಲಿಖಿತವಾಗಿಯೇ ತಿಳಿಸಿವೆ. ಕೃಷಿ, ತೋಟಗಾರಿಕೆ ಕ್ಷೇತ್ರಗಳ್ಲೂ ನರೇಗಾ ಅಡಿ ಕೆಲಸ ಮಾಡಲು ಅವಕಾಶ ಇರುವುದರಿಂದ ಈ ಬಗ್ಗೆ ಹೆಚ್ಚು ಮುತುವರ್ಜಿ ವಹಿಸಲು ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿವಾನಂದ ಕಾಪಶಿ ಅಧಿಕಾರಿಗಳಿಗೆ ಸೂಚಿಸಿದರು.

108 ಅಂಬ್ಯುಲೆನ್ಸ್‌ಗಳಲ್ಲಿ ನರ್ಸ್ ಸೇರಿದಂತೆ ಅಗತ್ಯ ಸಿಬ್ಬಂದಿಗಳ ಕೊರತೆ ಕಂಡುಬರುತ್ತಿದೆ. ತುರ್ತು ಸಂದರ್ಭಗಳಲ್ಲಿ ಅಂಬ್ಯುಲೆನ್ಸ್‌ಗಳಲ್ಲಿ ಇವರ ಸೇವೆ ಅಗತ್ಯವಿದೆ. ಈ ಬಗ್ಗೆ ಶೀಘ್ರವೇ ಕ್ರಮ ಕೈಗೊಳ್ಳಲು ಜಿಪಂ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಬಾಬು ಶೆಟ್ಟಿ ಆರೋಗ್ಯ ಇಲಾಖೆಗೆ ಸೂಚಿಸಿದರು.

ಪ್ಲಾಸ್ಟಿಕ್ ಬಳಕೆ ಇಲ್ಲ : ಉಡುಪಿ ಜಿಲ್ಲೆಯಲ್ಲಿ ನಡೆಯುವ ಸರಕಾರಿ ಸಭೆ ಸಮಾರಂಭಗಳಲ್ಲಿ ಪ್ಲಾಸ್ಟಿಕ್‌ನ ನೀರಿನ ಬಾಟಲಿ, ಹೂವಿನ ಬುಕ್ಕೆ, ಲೋಟ ಮತ್ತಿತರ ಪ್ಲಾಸ್ಟಿಕ್ ವಸ್ತುಗಳನ್ನು ಬಳಸದಂತೆ ಈಗಾಗಲೇ ಎಲ್ಲಾ ಇಲಾಖೆಗಳಿಗೆ ಪತ್ರ ಬರೆಯಲಾಗಿದೆ. ಇದನ್ನು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರಬೇಕು ಎಂದು ಜಿಪಂ ಅಧ್ಯಕ್ಷ ದಿನಕರ ಬಾಬು ಅಧಿಕಾರಿಗಳಿಗೆ ಸೂಚಿಸಿದರು.

ಅಕ್ರಮಗಳ ತನಿಖೆ: ಕೇಂದ್ರ ಸರಕಾರದ ಉಜ್ವಲ ಯೋಜನೆಯಡಿ ಜಿಲ್ಲೆಯ ಕೆಲವು ಗ್ಯಾಸ್ ಏಜನ್ಸಿಗಳು ಅಕ್ರಮ ಸಂಪರ್ಕ ನೀಡಿರುವ ಪ್ರಕರಣಗಳು ಬೆಳಕಿಗೆ ಬಂದಿದ್ದು, ಈ ಕುರಿತ ತನಿಖೆಯ ಪ್ರಗತಿಯ ಬಗ್ಗೆ ಅಧ್ಯಕ್ಷರು ಸಭೆಯಲ್ಲಿ ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕರು, ಜಿಲ್ಲೆಯ ಎರಡು ಗ್ಯಾಸ್ ಏಜನ್ಸಿಗಳು ಫಲಾನುಭವಿಗಳ ಹೆಸರಿನಲ್ಲಿ ಬೇರೆಯವರಿಗೆ ಸಂಪರ್ಕ ನೀಡಿರುವ ಬಗ್ಗೆ ದೂರುಗಳು ಬಂದಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳು ಪರಿಶೀಲಿಸಿ, ತನಿಖೆಗೆ ಸೂಚಿಸಿದ್ದಾರೆ ಎಂದರು.

ಉಜ್ವಲ ಯೋಜನೆಗೆ ಉಡುಪಿ ಜಿಲ್ಲೆಯಲ್ಲಿ ಎಚ್‌ಪಿಸಿಎಲ್ ನೋಡಲ್ ಸಂಸ್ಥೆಯಾಗಿದ್ದು, ಈ ಪ್ರಕರಣಗಳ ಬಗ್ಗೆ ಎಚ್‌ಪಿಸಿಎಲ್ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಉಜ್ವಲ ಫಲಾನುಭವಿಗಳ ಮನೆಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗುತ್ತಿದೆ ಎಂದವರು ವಿವರಿಸಿದರು.

ಸಭೆಯಲ್ಲಿ ಜಿಪಂ ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಶಶಿಕಾಂತ್ ಪಡುಬಿದ್ರೆ, ಜಿಪಂ ಉಪಕಾರ್ಯದರ್ಶಿ ನಾಗೇಶ್ ರಾಯ್ಕರ್, ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News