ಈ ಬಾರಿ ಪ್ರವಾಸೋದ್ಯಮ ಕೇಂದ್ರಿತ ದಸರಾ ಆಚರಣೆ: ಮುಖ್ಯಮಂತ್ರಿ ಕುಮಾರಸ್ವಾಮಿ

Update: 2018-07-11 15:56 GMT

ಬೆಂಗಳೂರು, ಜು. 11: ಈ ಬಾರಿ ಮೈಸೂರು ದಸರಾ ಉತ್ಸವವನ್ನು ಪ್ರವಾಸೋದ್ಯಮ ಕೇಂದ್ರಿತವಾಗಿ ಆಚರಿಸಲು ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಬುಧವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಮೈಸೂರು ದಸರಾ ಉತ್ಸವ ಸಿದ್ಧತೆ ಕುರಿತು ಉನ್ನತ ಮಟ್ಟದ ಸಭೆಯಲ್ಲಿ ಮಾತನಾಡಿದ ಅವರು, ಮೈಸೂರು ಹಾಗೂ ಸುತ್ತಮುತ್ತಲಿನ ಜಿಲ್ಲೆಗಳ ಪ್ರವಾಸಿ ತಾಣಗಳಲ್ಲಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು ಪೂರಕವಾಗಿ ಮೈಸೂರು ದಸರಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ವುುಖ್ಯಮಂತ್ರಿಗಳು ಸಲಹೆ ನೀಡಿದರು.

ಪ್ರತಿವರ್ಷದ ಕಾರ್ಯಕ್ರಮಗಳಿಗಿಂತ ವಿಭಿನ್ನ ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ಅವರು ತಿಳಿಸಿದರು. ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಜಲಾಶಯಗಳು ಭರ್ತಿಯಾಗುತ್ತಿವೆ. ಈ ಹಿನ್ನೆಲೆಯಲ್ಲಿ ಜು.20 ರಂದು ತಲಕಾವೇರಿಗೆ ಪೂಜೆ ಸಲ್ಲಿಸಿ, ಮೈಸೂರು ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ, ಕೃಷ್ಣರಾಜಸಾಗರ ಮತ್ತು ಕಬಿನಿ ಜಲಾಶಯಗಳಿಗೆ ಬಾಗಿನ ಅರ್ಪಿಸಲಾಗುವುದು ಎಂದರು.

ಸಭೆಯಲ್ಲಿ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ, ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎನ್.ಮಹೇಶ್, ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಿ. ಎಸ್.ಪುಟ್ಟರಂಗಶೆಟ್ಟಿ, ಕನ್ನಡ ಮತ್ತು ಸಂಸ್ಕೃತಿ ಸಚಿವೆ ಡಾ.ಜಯಮಾಲ ಸೇರಿದಂತೆ ಅಧಿಕಾರಿಗಳು ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News