ಚಿಕ್ಕಮಗಳೂರು: ಮುಂದುವರೆದ ಮಳೆ ಅವಾಂತರ; ಹಲವೆಡೆ ಮರ ಬಿದ್ದು ರಸ್ತೆ ಸಂಚಾರ ಬಂದ್

Update: 2018-07-12 13:58 GMT

ಚಿಕ್ಕಮಗಳೂರು, ಜು.12: ಜಿಲ್ಲೆಯ ಮಲೆನಾಡಿನ ತಾಲೂಕುಗಳಲ್ಲಿ ಎಡಬಿಡದೆ ಮಳೆ ಸುರಿಯುತ್ತಿದ್ದು, ಮಳೆಯ ಅವಾಂತರ ಜಿಲ್ಲೆಯಾದ್ಯಂತ ಮುಂದುವರಿದಿದೆ. ಸತತ ಒಂದು ವಾರದಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಭಾರೀ ಮಳೆ ಹಿನ್ನೆಲೆಯಲ್ಲಿ ಮೂಡಿಗೆರೆ, ಎನ್.ಆರ್.ಪುರ, ಶೃಂಗೇರಿ, ಕೊಪ್ಪ ತಾಲೂಕಿನ ಶಾಲಾ-ಕಾಲೇಜಿಗೆ ಗುರುವಾರ ಜಿಲ್ಲಾಡಳಿತ ರಜೆ ಘೋಷಿಸಿತ್ತು. ಮಳೆಯಿಂದಾಗಿ ಹಲವೆಡೆ ಮರಗಳು ಧರೆಗುರುಳಿ ರಸ್ತೆ ಸಂಚಾರ ಬಂದ್ ಆಗಿದ್ದು, ಇನ್ನು ಕೆಲವೆಡೆ ವಿದ್ಯುತ್ ಕಂಬಗಳು ಮುರಿದು ಬಿದ್ದು, ವಿದ್ಯುತ್ ಸರಬರಾಜು ಸ್ಥಗಿತಗೊಂಡ ಘಟನೆಗಳು ಗುರುವಾರ ವರದಿಯಾಗಿದೆ.

ಬುಧವಾರ ರಾತ್ರಿ ಸುರಿದ ಮಳೆಗೆ ಹೊರನಾಡು ಕಳಸ ಸಂಪರ್ಕ ಕಲ್ಪಿಸುವ ಹೆಬ್ಬಾಳೆ ಸೇತುವೆ ಮುಳುಗಿದ್ದು, ಇದುವರೆಗೂ ಐದು ಬಾರಿ ಸೇತುವೆ ಮುಳುಗಿದಂತಾಗಿದೆ. ಪದೇ ಪದೇ ಸೇತುವೆ ಮುಳುಗುತ್ತಿರುವುದರಿಂದ ಸೇತುವೆ ಭಾರೀ ಶಿಥಿಲಾವಸ್ಥೆಯ ಹಂತಕ್ಕೆ ತಲುಪಿದೆ. ಸೇತುವೆ ಮುಳುಗಡೆಯಿಂದಾಗಿ ದೂರದ ಪ್ರವಾಸಿಗರು ಹೊರನಾಡಿಗೆ ತೆರಳಲು ಪರ್ಯಾಯ ಮಾರ್ಗ ಬಳಸುವಂತಾಗಿದೆ.

ಮೂಡಿಗೆರೆ ತಾಲೂಕಿನ ಹಿರೇಬೈಲು ಸಮೀಪದ ಚನ್ನಹಡ್ಲು ಗ್ರಾಮದಲ್ಲಿ ಭಾರೀ ಮಳೆಯಿಂದಾಗಿ ಗುರುವಾರ ಮಧ್ಯಾಹ್ನದ ವೇಳೆ ರಸ್ತೆ ಪಕ್ಕದ ಗುಡ್ಡ ಕುಸಿದು ಹಿರೇಬೈಲು ಬಾಳೆಹೊಳೆ ರಸ್ತೆ ಸಂಪರ್ಕ ಕಡಿತಗೊಂಡಿತ್ತು. ಗುಡ್ಡ ಕುಸಿತದಿಂದಾಗಿ ಎರಡು ಮನೆಗಳಿಗೂ ಹಾನಿಯಾಗಿದ್ದು, 10ಕ್ಕೂ ಹೆಚ್ಚು ಹಳ್ಳಿಗಳ ಸಂಪರ್ಕ ಕಡಿತಗೊಂಡಿದೆ ಎಂದು ತಿಳಿದು ಬಂದಿದೆ. ಲೋಕೋಪಯೋಗಿ ಇಲಾಖೆ ಸಿಬ್ಬಂದಿ ಸ್ಥಳೀಯರ ಸಹಕಾರದಿಂದ ರಸ್ತೆ ಮೇಲೆ ಬಿದ್ದ ಮಣ್ಣನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಕೊಪ್ಪ, ಶೃಂಗೇರಿ, ಎನ್.ಆರ್.ಪುರ, ಮೂಡಿಗೆರೆ ತಾಲೂಕು ವ್ಯಾಪ್ತಿಯಲ್ಲಿ ಮಾತ್ರ ಹೆಚ್ಚು ಮಳೆ ಸುರಿಯುತ್ತಿದ್ದು, ಚಿಕ್ಕಮಗಳೂರು, ಕಡೂರು, ತರೀಕೆರೆ ತಾಲೂಕು ವ್ಯಾಪ್ತಿಯಲ್ಲಿ ಸಾಧಾರಣ ಮಳೆಯಾಗುತ್ತಿದೆ. ಈ ತಾಲೂಕುಗಳಲ್ಲಿ ಒಮ್ಮೊಮ್ಮೆ ಭಾರೀ ಮಳೆಯಾಗುತ್ತಿದ್ದು, ಅವಾಂತರಗಳು ನಡೆದ ಬಗ್ಗೆ ವರದಿಯಾಗಿಲ್ಲ. ಮಲೆನಾಡು ಭಾಗದಲ್ಲಿ ಹರಿಯುವ ತುಂಗಾ, ಭದ್ರಾ, ಹೇಮಾವತಿ ನದಿಗಳು ತುಂಬಿ ಹರಿಯುತ್ತಿವೆ.

ಹಳ್ಳದಲ್ಲಿ ಕೊಚ್ಚಿ ಹೋದ ಯುವಕನಿಗಾಗಿ ಎನ್‍ಡಿಆರ್‍ಎಫ್ ಶೋಧ

ಕೊಪ್ಪ ತಾಲೂಕಿನ ಬಸ್ತಿಹಳ್ಳದ ಸೇತುವೆಯಲ್ಲಿ ಮಂಗಳವಾರ ರಾತ್ರಿ ಬೈಕ್ ಸಮೇತ ಕೊಚ್ಚಿ ಹೋಗಿದ್ದ ಯುವಕ ಅಶೋಕ್‍ಗಾಗಿ ಶೋಧ ಕಾರ್ಯ ಮುಂದುವರೆದಿದ್ದು, ಗುರುವಾರ ಎನ್‍ಡಿಆರ್‍ಎಫ್ ಸಿಬ್ಬಂದಿ ಸುರಿಯುವ ಮಳೆಯಲ್ಲೇ ಯುವಕನಿಗಾಗಿ ಶೋಧ ಕಾರ್ಯ ನಡೆಸಿದರು. ಆದರೆ ಗುರುವಾರ ಸಂಜೆಯಾದರೂ ಯುವಕನ ಬಗ್ಗೆ ಯಾವುದೇ ಸುಳಿವು ಪತ್ತೆಯಾಗಿಲ್ಲ ಎಂದು ತಿಳಿದು ಬಂದಿದೆ.

ಅಲ್ಲದೇ ಎಡಬಿಡದೇ ಸುರಿಯುತ್ತಿರುವ ಮಳೆ ಸಿಬ್ಬಂದಿ ಶೋಧ ಕಾರ್ಯಕ್ಕೆ ಅಡಚಣೆ ಮಾಡಿದೆ. ಬುಧವಾರ ಪೊಲೀಸ್ ಸಿಬ್ಬಂದಿ, ಅಗ್ನಿಶಾಮಕ ದಳ ಶೋಧ ಕಾರ್ಯ ನಡೆಸಿದಾಗ ಅಶೋಕ್‍ನ ಹಳ್ಳದಲ್ಲಿ ಬೈಕ್ ಪತ್ತೆಯಾಗಿತ್ತು. ಗುರುವಾರ ಎನ್.ಡಿ.ಆರ್.ಎಫ್‍ನ 30 ಜನರ ತಂಡದೊಂದಿಗೆ ಪೊಲೀಸ್ ಸಿಬ್ಬಂದಿ, ಅಗ್ನಿಶಾಮಕ ದಳ ಸಿಬ್ಬಂದಿ ಶೋಧ ಕಾರ್ಯ ನಡೆಸಿದರು. ಘಟನೆ ಹಿನ್ನೆಲೆಯಲ್ಲಿ ಬುಧವಾರ ಸಂಜೆ ಜಿಲ್ಲಾಧಿಕಾರಿ ಶ್ರೀರಂಗಯ್ಯ ಹಾಗೂ ಜಿಪಂ ಅಧ್ಯಕ್ಷೆ ಸುಜಾತಾ ಕೃಷ್ಣಪ್ಪ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲಿಸಿ, ಸ್ಥಳೀಯರಿಂದ ಮಾಹಿತಿ ಪಡೆದಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News