ಪಕ್ಷ ಸಂಘಟನೆಗಾಗಿ ದುಡಿಯುತ್ತೇನೆ: ಎಚ್.ಡಿ.ದೇವೇಗೌಡ
ಬೆಂಗಳೂರು, ಜು.14: ನನಗೆ 85 ವರ್ಷ ವಯಸ್ಸಾಗಿದೆ ಎಂದು ಸುಮ್ಮನೆ ಕೂರುವುದಿಲ್ಲ. ನನ್ನೆಲ್ಲಾ ಶಕ್ತಿಯನ್ನು ಮೀರಿ ವಿಶ್ರಾಂತಿಯಿಲ್ಲದೆ ಪಕ್ಷ ಸಂಘಟನೆಗಾಗಿ ಹೋರಾಡುತ್ತೇನೆ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಇಂದಿಲ್ಲಿ ಹೇಳಿದ್ದಾರೆ.
ಶನಿವಾರ ನಗರದ ಜೆಪಿ ಭವನದಲ್ಲಿ ಆಯೋಜಿಸಿದ್ದ ನೂತನ ಮುಖ್ಯಮಂತ್ರಿ ಹಾಗೂ ಶಾಸಕ ಮತ್ತು ವಿಧಾನಪರಿಷತ್ ಸದಸ್ಯರುಗಳಿಗೆ ಸನ್ಮಾನ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮೈತ್ರಿ ಸರಕಾರಕ್ಕೆ ಧಕ್ಕೆಯಾಗದಂತೆ ರಾಜ್ಯದಲ್ಲಿ ಪಕ್ಷವನ್ನು ಸಂಘಟಿಸಲು ಶ್ರಮಿಸುತ್ತೇನೆ. ಪಕ್ಷದ ಎಲ್ಲ ಕಾರ್ಯಕರ್ತರು ನನ್ನೊಂದಿಗೆ ಕೈ ಜೋಡಿಸಬೇಕು ಎಂದು ಮನವಿ ಮಾಡಿದರು.
ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕ, ಕರಾವಳಿ ಭಾಗ ಹಾಗೂ ಮೈಸೂರು ಭಾಗದಲ್ಲಿ ಚುನಾವಣಾ ಸಂದರ್ಭದಲ್ಲಿ ನಿರೀಕ್ಷೆಗೂ ಮೀರಿ ಜನ ಸೇರುತ್ತಿದ್ದರು. ವಿಧಾನಸಭಾ ಚುನಾವಣೆಯಲ್ಲಿ ನೂರಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ ಎಂಬ ನಿರೀಕ್ಷೆಯೂ ಇತ್ತು. ಆದರೆ, ಹಿಂದೆ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ನೀಡಿದ್ದ ಯೋಜನೆಗಳನ್ನು ಮತದಾರರಿಗೆ ತಿಳಿಸುವಲ್ಲಿ ಪಕ್ಷದ ಕಾರ್ಯಕರ್ತರು ವಿಫಲರಾಗಿದ್ದಾರೆ. ಇದನ್ನು ತಿದ್ದಿಕೊಳ್ಳಬೇಕು ಎಂದು ಅವರು ವಿಶ್ಲೇಷಿಸಿದರು.
ವಿಧಾನಸೌಧದ ಒಳಗೆ ಮತ್ತು ಹೊರಗೆ ನಡೆಯುತ್ತಿರುವ ಹೋರಾಟವನ್ನು ನಾನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ. ಬಿಜೆಪಿಯವರು ಸರಕಾರದ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ ಎಲ್ಲ ಯೋಜನೆಗಳನ್ನು ಮುಂದುವರಿಸುತ್ತೇನೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಆದರೂ, ಅಪ್ಪ-ಮಗನ, ಅಣ್ಣ-ತಮ್ಮನ ಬಜೆಟ್ ಎಂದು ಟೀಕಿಸುತ್ತಿದ್ದಾರೆ. ಅದಕ್ಕೆಲ್ಲಾ ಮುಖ್ಯಮಂತ್ರಿ ಕುಮಾರಸ್ವಾಮಿ ಸದನದಲ್ಲಿ ವಿರೋಧ ಪಕ್ಷಗಳಿಗೆ ಸಮರ್ಥವಾಗಿ ಉತ್ತರ ನೀಡಿದ್ದಾರೆ ಎಂದರು.
ರಾಜ್ಯದ 17 ಜಿಲ್ಲೆಗಳಲ್ಲಿ ನಮ್ಮ ಪಕ್ಷದ ಪ್ರತಿನಿಧಿಗಳಿಲ್ಲ. ಹೀಗಾಗಿ, ಗೆದ್ದಿರುವ ಎಲ್ಲ ಶಾಸಕರದ್ದೂ ನೈತಿಕ ಜವಾಬ್ದಾರಿ ಹೆಚ್ಚಿದೆ. ಜಿಲ್ಲೆಗಳಿಗೆ ಭೇಟಿ ನೀಡುವ ಪ್ರತಿಯೊಬ್ಬ ಸಚಿವರೂ ಪಕ್ಷದ ಕಚೇರಿಗೆ ಭೇಟಿ ನೀಡಬೇಕು. ಅಲ್ಲಿನ ಸ್ಥಳೀಯ ಕಾರ್ಯಕರ್ತರ ಅಹವಾಲುಗಳನ್ನು ಸ್ವೀಕರಿಸಬೇಕು. ಅಲ್ಲದೆ, ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರೂ ಮಾತನಾಡುವುದನ್ನು ಕಲಿಯಬೇಕು. ನಾವು ಏನು ಮಾಡಿದ್ದೇವೆ, ಮಾಡುತ್ತಿದ್ದೇವೆ ಎಂದು ಜನರಿಗೆ ಮನವರಿಕೆ ಮಾಡಿಕೊಡಬೇಕು ಎಂದು ಹೇಳಿದರು.
ದೇಶದಲ್ಲಿ ಹಿಂದೂ, ಮುಸ್ಲಿಮ್, ಕ್ರೈಸ್ತ, ಬೌದ್ಧರು ಸೇರಿದಂತೆ ಎಲ್ಲ ಜಾತಿ, ಧರ್ಮದ ಜನರು ಸೌಹಾರ್ದತೆಯಿಂದ ಜೀವನ ನಡೆಸುವ ವಾತಾವರಣವನ್ನು ಸೃಷ್ಟಿಸಬೇಕು. ಆದರೆ, ಕೇಂದ್ರದಲ್ಲಿರುವ ಸರಕಾರ ದೇಶಕ್ಕೆ ಭಂಗ ತರುವ ಕೆಲಸ ಮಾಡುತ್ತಿದೆ ಎಂದ ಅವರು, ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಬಿಜೆಪಿ ನಾಯಕರು ಹೊರತುಪಡಿಸಿ ದೇಶದ ಎಲ್ಲ ರಾಜ್ಯಗಳಿಂದ ಜಾತ್ಯತೀತ ನಾಯಕರು ಹಾಗೂ ಪ್ರಾದೇಶಿಕ ಪಕ್ಷಗಳ ಮುಖಂಡರು, ಮುಖ್ಯಮಂತ್ರಿಗಳು ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಮುಂದಿನ ರಾಜಕೀಯ ಭವಿಷ್ಯದ ನಿರ್ಣಯವನ್ನು ಮಂಡಿಸಲಾಗಿದೆ ಎಂದು ತಿಳಿಸಿದರು.
ಕರ್ನಾಟಕದಲ್ಲಿ ರೈತರ ಪರವಾದ ಏಕೈಕ ಮುಖ್ಯಮಂತ್ರಿ ಕುಮಾರಸ್ವಾಮಿ. ರೈತರ ಸಾಲ ಮನ್ನಾ ಮಾಡಲಾಗಿದೆ. ಅಲ್ಲದೆ, ಇದೀಗ ನೇಕಾರರು ಹಾಗೂ ಮೀನುಗಾರರು ಸಾಲ ಮನ್ನಾ ಮಾಡಬೇಕು ಎಂದು ಒತ್ತಾಯಿಸುತ್ತಿದ್ದಾರೆ. ಆದರೆ, ಸಾಲ ಮನ್ನಾದ ಹೊರೆಯನ್ನು ತುಂಬಿಸಿಕೊಳ್ಳಲು 1 ರೂ. ಬೆಲೆ ಏರಿಕೆ ಮಾಡಿದರೆ ಕುಮಾರಸ್ವಾಮಿ ಸರಕಾರ ಜನವಿರೋಧಿ ಎಂದು ಅಪಪ್ರಚಾರ ಮಾಡುತ್ತಿದ್ದಾರೆ.
-ಎಚ್.ಡಿ.ದೇವೇಗೌಡ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ