ಬೆಂಗಳೂರು ಅಭಿವೃದ್ಧಿ: ಕಾಲಮಿತಿಯಲ್ಲಿ ಯೋಜನೆ ಜಾರಿಗೆ ಸಿಎಂ ಸೂಚನೆ

Update: 2018-07-14 14:58 GMT

ಬೆಂಗಳೂರು, ಜು. 14: ಬೆಂಗಳೂರು ನಗರ ಅಭಿವೃದ್ಧಿಗಾಗಿ ಜಾರಿಗೊಳಿಸುತ್ತಿರುವ ಯೋಜನೆ, ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಶನಿವಾರ ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಬಯೋಕಾನ್ ಅಧ್ಯಕ್ಷೆ ಕಿರಣ್ ಮಜುಂದಾರ್ ಷಾ ಮತ್ತು ಬಿ-ಪ್ಯಾಕ್ ಸಂಸ್ಥೆಯೊಂದಿಗೆ ಬೆಂಗಳೂರು ನಗರ ಅಭಿವೃದ್ಧಿ ಕುರಿತು ಸಮಾಲೋಚನೆ ನಡೆಸಿದರು. ನಗರದಲ್ಲಿ ಸಂಚಾರ ದಟ್ಟಣೆ ಸಮಸ್ಯೆ, ರಸ್ತೆಗಳ ಅಭಿವೃದ್ಧಿ, ತ್ಯಾಜ್ಯ ನಿರ್ವಹಣೆ, ಕೆರೆಗಳ ಸಂರಕ್ಷಣೆ ಮತ್ತು ಅಭಿವೃದ್ಧಿ ಹಾಗೂ ಮೆಟ್ರೋ ಕಾಮಗಾರಿ ಬಗ್ಗೆ ಚರ್ಚಿಸಲಾಯಿತು ಎಂದು ತಿಳಿಸಲಾಗಿದೆ.

ಉಪ ಮುಖ್ಯಮಂತ್ರಿ ಡಾ.ಪರಮೇಶ್ವರ್ ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಪ್ರತಿ ತಿಂಗಳು ಪ್ರಗತಿ ಪರಿಶೀಲನಾ ಸಭೆ ನಡೆಸಿ, ಎಲ್ಲ ಅಭಿವೃದ್ಧಿ ಕಾಮಗಾರಿಗಳನ್ನು ಚುರುಕುಗೊಳಿಸಲಾಗುವುದು ಎಂದ ಅವರು, ರಸ್ತೆ ಅಭಿವೃದ್ಧಿ, ತ್ಯಾಜ್ಯ ನಿರ್ವಹಣೆ ಸೇರಿದಂತೆ ಮೂಲಭೂತ ಸೌಕರ್ಯ ಕಲ್ಪಿಸಲು ಸರಕಾರ ಆಸ್ಥೆ ವಹಿಸಲಿದೆ ಎಂದರು.

ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್, ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಮಹೇಂದ್ರ ಜೈನ್, ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಅಜಯ್ ಸೇಠ್, ಬಿಬಿಎಂಪಿ ಆಯುಕ್ತ ಮಂಜುನಾಥ ಪ್ರಸಾದ್, ನಗರ ಪೊಲೀಸ್ ಆಯುಕ್ತ ಟಿ.ಸುನೀಲ್ ಕುಮಾರ್, ಬಿ-ಪ್ಯಾಕ್‌ನ ಸದಸ್ಯರು ಸಭೆಯಲ್ಲಿ ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News