ಸುಳ್ಳು ಸಂದೇಶ ಹರಡುವವರ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆ: ಡಿಸಿಎಂ ಪರಮೇಶ್ವರ್

Update: 2018-07-16 13:30 GMT

ಬೆಂಗಳೂರು, ಜು. 16: ಮಕ್ಕಳ ಅಪಹರಣಕಾರರ ವದಂತಿ ನೆಪದಲ್ಲಿ ಸುಳ್ಳು ಸಂದೇಶಗಳನ್ನು ಹರಡುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೈಬರ್ ಕ್ರೈಂ ಠಾಣಾ ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದು ಡಿಸಿಎಂ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಸೋಮವಾರ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೆಲದಿನಗಳ ಹಿಂದೆ ಬೀದರ್‌ನಲ್ಲಿ ಮಕ್ಕಳ ಕಳ್ಳರು ಎಂಬ ಸಂಶಯದ ಮೇಲೆ ಗುಂಪೊಂದು ಅಮಾಯಕರ ಮೇಲೆ ಹಲ್ಲೆ ನಡೆಸಿದ್ದು, ಇದೇ ರೀತಿಯ ಘಟನೆಗಳು ಮರುಕಳಿಸುತ್ತಿವೆ. ಬೀದರ್ ಘಟನೆ ಸಂಬಂಧ 13 ಮಂದಿಯನ್ನು ಬಂಧಿಸಲಾಗಿದೆ ಎಂದರು. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಿದೆ. ಆದರೆ, ಸಾಮಾಜಿಕ ಜಾಲ ತಾಣಗಳಲ್ಲಿ ಅನಗತ್ಯವಾಗಿ ತಪ್ಪುಸಂದೇಶಗಳನ್ನು ಬಿತ್ತರಿಸಿ ಆತಂಕ ಮತ್ತು ಗೊಂದಲ ಸೃಷ್ಟಿಸುವವರ ವಿರುದ್ಧ ಸೈಬರ್ ಕ್ರೈಂ ವಿಭಾಗದ ಪೊಲೀಸರು ಕ್ರಮ ಕೈಗೊಳ್ಳಲಿದ್ದಾರೆ ಎಂದು ಹೇಳಿದರು.

ಉತ್ತರ ಕರ್ನಾಟಕ ನಿರ್ಲಕ್ಷಕ್ಕೆ ಒಳಗಾಗಿದೆ ಎಂಬ ಆರೋಪ ಕೇಳಿಬರುತ್ತಿದೆ. ಈ ಬಗ್ಗೆ ಬಜೆಟ್‌ನಲ್ಲಿ ಎಷ್ಟು ಹಣ ಮೀಸಲಿಡಲಾಗಿತ್ತು ಮತ್ತು ಎಷ್ಟು ಮೊತ್ತದ ಹಣ ಖರ್ಚು ಮಾಡಲಾಗಿದೆ ಎಂಬ ಬಗ್ಗೆ ಜನರಿಗೆ ಮಾಹಿತಿ ಗೊತ್ತಾಗಬೇಕಿದೆ ಎಂದು ದೇವೇಗೌಡ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು.

ರಸ್ತೆ ಸುಧಾರಣೆ: ಮೆಟ್ರೋ ಮಾರ್ಗದ ಕೆಳಭಾಗದ ರಸ್ತೆಗಳ ಸುಧಾರಣೆಗೆ ಅಧಿಕಾರಿಗಳು ಮತ್ತು ಗುತ್ತಿಗೆದಾರರಿಗೆ ಸೂಚಿಸಲಾಗಿದೆ. ರಸ್ತೆ ಮಾರ್ಗದ ಕೆಳ ಭಾಗದಲ್ಲಿರುವ ಡಬ್ರೀಸ್‌ಗಳನ್ನು ತೆರವುಗೊಳಿಸಬೇಕು. ರಸ್ತೆಯುದ್ದಕ್ಕೂ ಹೂವಿನ ಗಿಡಗಳನ್ನು ನೆಡಬೇಕೆಂದು ಸೂಚನೆ ನೀಡಲಾಗಿದೆ. ಮೆಟ್ರೋಗೆ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ನೇಮಕಗೊಂಡಿರುವ ಅಜಯ್ ಸೇಠ್ ಇಂದು ತಮ್ಮನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ. ಈಗಾಗಲೇ ಪ್ರಗತಿಯಲ್ಲಿರುವ ಯೋಜನೆಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಲು ಸೂಚಿಸಿದ್ದೇನೆ. ಹೊಸ ಯೋಜನೆಗಳಿಗೆ ಶೀಘ್ರ ಅನುಮತಿ ನೀಡಿ ಅಗತ್ಯ ಹಣಕಾಸು ಒದಗಿಸುವಂತೆ ಅವರು ಮನವಿ ಮಾಡಿದ್ದಾರೆಂದು ಹೇಳಿದರು.

‘ಇನ್ಫೋಸಿಸ್ ಸಂಸ್ಥಾಪಕರಲ್ಲಿ ಒಬ್ಬರಾದ ಸುಧಾಮೂರ್ತಿ ತನ್ನನ್ನು ಭೇಟಿ ಮಾಡಿದ್ದು, 150 ಕೋಟಿ ರೂ.ವೆಚ್ಚದಲ್ಲಿ ಮೆಟ್ರೋ ಸ್ಟೇಷನ್ ಅಭಿವೃದ್ಧಿಪಡಿಸುತ್ತಿದ್ದು, ಅದರ ಉದ್ಘಾಟನಾ ಕಾರ್ಯಕ್ರಮಕ್ಕೆ ನನ್ನನ್ನು ಆಹ್ವಾನಿಸಲು ಬಂದಿದ್ದರು. ಈ ವೇಳೆ ಪೊಲೀಸ್ ಠಾಣೆ, ಪೊಲೀಸ್ ಸಿಬ್ಬಂದಿ ವಸತಿ ಗೃಹ ನಿರ್ಮಾಣಕ್ಕೆ ನೆರವು ಕೋರಿದ್ದು, ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ’
-ಡಾ.ಜಿ.ಪರಮೇಶ್ವರ್ ಉಪ ಮುಖ್ಯಮಂತ್ರಿ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News