ಜನಪ್ರತಿನಿಧಿಗಳಿಗೆ ಸರ್ಕಾರಿ ಯೋಜನೆಗಳ ಮಾಹಿತಿ ಅಗತ್ಯ: ಚಿಕ್ಕಮಗಳೂರು ಡಿಸಿ ಶ್ರೀರಂಗಯ್ಯ

Update: 2018-07-16 18:31 GMT

ಚಿಕ್ಕಮಗಳೂರು,ಜು.16: ಜನಪ್ರತಿನಿಧಿಗಳು ಸರ್ಕಾರದ ಪ್ರತಿಯೊಂದು ಯೋಜನೆಗಳ ಬಗ್ಗೆ ಸಮರ್ಪಕ ಮಾಹಿತಿ ಹೊಂದಿದ್ದಾಗ ಮಾತ್ರ ಸುಲಭವಾಗಿ ಜನಸಾಮಾನ್ಯರಿಗೆ ತಲುಪಿಸಲು ಅನುಕೂಲವಾಗುತ್ತದೆ ಎಂದು ಜಿಲ್ಲಾಧಿಕಾರಿ ಎಂ.ಕೆ. ಶ್ರೀರಂಗಯ್ಯ ತಿಳಿಸಿದರು.

ಅವರು ಇಂದು ನಗರದ ಕುವೆಂಪು ಕಲಾಮಂದಿರದಲ್ಲಿ ಜಿಲ್ಲಾ ಪಂಚಾಯತ್ ವತಿಯಿಂದ ಆಯೋಜಿಸಿದ್ದ ಜನಪ್ರತಿನಿಧಿಗಳಿಗೆ ಇಲಾಖೆ ಕಾರ್ಯಕ್ರಮಗಳ ಮಾಹಿತಿ ಕಾರ್ಯಗಾರ ಉದ್ಘಾಟಿಸಿ ಮಾತನಾಡಿದರು. ಜನಸಾಮಾನ್ಯರ ಆಶೋತ್ತರಗಳನ್ನು ಈಡೇರಿಸುವುದು ಜನಪ್ರತಿನಿಧಿಗಳ ಕರ್ತವ್ಯ. ಸರ್ಕಾರ ರೂಪಿಸುವ ಜನಕಲ್ಯಾಣ ಯೋಜನೆಗಳನ್ನು ಜನರಿಗೆ ತಲುಪಿಸುವುದು ಅವುಗಳ ಸಮರ್ಪಕ ಮಾಹಿತಿ ಹೊಂದಿದಾಗ ಸರಳವಾಗುತ್ತದೆ ಎಂದರು.

ಗ್ರಾಮ ಪಂಚಾಯತ್ ವ್ಯಾಪ್ತಿಗಳಲ್ಲಿ ಜನಪ್ರತಿನಿಧಿಗಳು ಜವಬ್ದಾರಿಯುತವಾಗಿ ಜನಸಮಾನ್ಯರಿಗೆ ಸ್ಪಂದಿಸಿದಾಗ ಯಾವುದೇ ಸಮಸ್ಯೆಗಳು ಜಿಲ್ಲಾ ಮಟ್ಟಕ್ಕೆ ಬರುವುದಿಲ್ಲ ಎಂದ ಅವರು, ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಸಮನ್ವಯದೊಂದಿಗೆ ಕೈಜೋಡಿಸಿ ಕೆಲಸ ಮಾಡಿದಾಗ ಮಾತ್ರ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಸಾಧ್ಯವಾಗುತ್ತದೆ ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಸಿ.ಸತ್ಯಭಾಮ ಮಾತನಾಡಿ, ಗ್ರಾಮ ಪಂಚಾಯತ್ ಗಳು ಸ್ಥಳೀಯ ಸರ್ಕಾರವಿದ್ದಂತೆ. ಸ್ಥಳೀಯ ಸಂಪನ್ಮೂಲಗಳ ಮೂಲಕ ಆರ್ಥಿಕ ಕ್ರೋಡೀಕರಣಗೊಳಿಸಿ ಕ್ರಿಯಾ ಯೋಜನೆಗಳೊಂದಿಗೆ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೊಳ್ಳಬೇಕೆಂದರು.

ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಕೆ.ಆನಂದ್ ಮಾತನಾಡಿ, ಚುನಾಯಿತ ಪ್ರತಿನಿಧಿಗಳಿಗೆ ಹೆಚ್ಚಿನ ಜವಬ್ದಾರಿ ಇದ್ದು, ಇದನ್ನು ಅರಿತು ನಾವು ಕೆಲಸ ಮಾಡಬೇಕು. ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂಧಿಸುವುದು ನಮ್ಮ ಕರ್ತವ್ಯವಾಗಿರುತ್ತದೆ ಎಂದರು.

ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಸುಜಾತ ಕೃಷ್ಣಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಸರ್ಕಾರದ ಯೋಜನೆಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೆ ತಲುಪಿಸುವ ಜವಬ್ದಾರಿ ಜನಪ್ರಿನಿಧಿಗಳು ಹಾಗೂ ಅಧಿಕಾರಿಗಳ ಮೇಲಿದೆ. ಒಮ್ಮತದಿಂದ ಕೆಲಸ ಮಾಡಿದಾಗ ಮಾದರಿ ಗ್ರಾಮಗಳಾನ್ನಾಗಿಸಲು ಸಾಧ್ಯ ಎಂದರು.

ಕಾರ್ಯಾಗಾರದಲ್ಲಿ ಸಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷೆ ದಿವ್ಯ ನಟೇಶ್, ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಜಸಿಂತಾ ಅನಿಲ್ ಕುಮಾರ್, ಸದಸ್ಯರಾದ ಸೋಮಶೇಖರ್, ರವೀಂದ್ರ ಬೆಳವಾಡಿ ಹಿರಿಗಯ್ಯ ಹಾಗೂ ತಾಲೂಕು ಪಂಚಾಯತ್ ಅಧ್ಯಕ್ಷ ಜಯಣ್ಣ ಮಾತನಾಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News