×
Ad

ವಿದ್ಯಾರ್ಥಿಗಳಿಗೆ ಶೀಘ್ರ ಉಚಿತ ಬಸ್‌ಪಾಸ್: ಸಚಿವ ಮಹೇಶ್ ಭರವಸೆ

Update: 2018-07-17 18:19 IST

ಬೆಂಗಳೂರು, ಜು.17: ಮುಖ್ಯಮಂತ್ರಿ ಎಚ್.ಡಿ.ಕಮಾರಸ್ವಾಮಿ ಅವರೊಂದಿಗೆ ಚರ್ಚಿಸಿ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಶೀಘ್ರವಾಗಿಯೇ ಉಚಿತ ಬಸ್‌ಪಾಸ್ ನೀಡಲಾಗುವುದು ಎಂದು ಪ್ರಾಥಮಿಕ ಶಿಕ್ಷಣ ಸಚಿವ ಎನ್.ಮಹೇಶ್ ಭರವಸೆ ನೀಡಿದ್ದಾರೆ.

ನಗರದಲ್ಲಿಂದು ವಸಂತನಗರದ ಸರಕಾರಿ ಕನ್ನಡ ಮತ್ತು ತಮಿಳು ಹಿರಿಯ ಪ್ರಾಥಮಿಕ ಶಾಲೆಯ ನೂತನ ಶಾಲಾ ಕಟ್ಟಡ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ವಿದ್ಯಾರ್ಥಿಗಳ ಉಚಿತ ಬಸ್‌ಪಾಸ್ ವಿತರಣೆ ಸಂಬಂಧ ಶಿಕ್ಷಣ ಇಲಾಖೆಯಿಂದ ಶೇ.25ರಷ್ಟು ಹಣ ಕೊಡಲು ಸಿದ್ಧರಿದ್ದೇವೆ. ಈ ಬಗ್ಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಚರ್ಚೆ ನಡೆಸಿ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.

ಶಾಲಾ ಶಿಕ್ಷಕರ ವರ್ಗಾವಣೆ ಕುರಿತು ಇನ್ನು ಎರಡು ವಾರದಲ್ಲಿ ಕೌನ್ಸಲಿಂಗ್ ನಡೆಯಲಿದ್ದು, ಸದ್ಯದಲ್ಲೇ ವರ್ಗಾವಣೆ ಪ್ರಕ್ರಿಯೆ ಆರಂಭವಾಗಲಿದೆ. ಈ ವರ್ಷದಿಂದ 175 ಪಬ್ಲಿಕ್ ಶಾಲೆಗಳನ್ನು ತೆರೆಯಲು ನಿರ್ಧರಿಸಿದ್ದೇವೆ. ಒಂದರಿಂದ 10 ನೆ ತರಗತಿವರೆಗೆ ಈ ಶಾಲೆಯಲ್ಲಿ ವಿದ್ಯಾಭ್ಯಾಸ ಕೊಡಲಾಗುತ್ತದೆ. ಜೊತೆಗೆ ಈ ಶಾಲೆಗಳಲ್ಲಿ ಎಲ್ಲ ಮೂಲಭೂತ ಸೌಕರ್ಯ ಕಲ್ಪಿಸಲಾಗುತ್ತೆ ಎಂದು ಅವರು ಹೇಳಿದರು.

ಎಲ್ಲ ಶಿಕ್ಷಕರು ವಿದ್ಯಾರ್ಥಿಗಳನ್ನು ತಮ್ಮ ಮಕ್ಕಳೆಂದು ತಿಳಿದು ಪಾಠ ಕಲಿಸಬೇಕು. ಮಕ್ಕಳ ಮನಸಿನಲ್ಲಿ ಸಕಾರಾತ್ಮಕ ಅಂಶಗಳನ್ನು ತುಂಬುವಂತೆ ಜಾಗ್ರತೆ ವಹಿಸಬೇಕು. ಇದರ ಜೊತೆಗೆ ಇವತ್ತಿನ ಜಾಗತೀಕರಣದ ಯುಗದಲ್ಲಿ ಸರಕಾರಿ ಶಾಲೆಯಲ್ಲಿ ಮಕ್ಕಳು ಎಲ್ಲ ಕ್ಷೇತ್ರದಲ್ಲಿ ಧೈರ್ಯವಾಗಿ ಮುನ್ನುಗ್ಗುವಂತೆ ಸಜ್ಜುಗೊಳಿಸಬೇಕಾಗಿದೆ ಎಂದು ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಶಾಸಕ ಆರ್‌.ರೋಶನ್ ಬೇಗ್, ಶಿಕ್ಷಣ ಇಲಾಖೆ ಕಾರ್ಯದರ್ಶಿ ಶಾಲಿನಿ ರಜನೀಶ್, ರೋಟರಿ ಡಿಸ್ಟ್ರಿಕ್ಟ್ ಗೌರ್ನರ್ ಸುರೇಶ್ ಗುರು, ಸಮಾಜ ಸೇವಕ ಬ್ರಿಗೇಡಿಯರ್ ಮಿಲಾನಿ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News