ದೀಪಕ್ ರಾವ್ ಕೊಲೆ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ
ಮಂಗಳೂರು, ಜು.17: ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಕಾಟಿಪಳ್ಳ 2ನೇ ಬ್ಲಾಕ್‌ನಲ್ಲಿ ದೀಪಕ್ ರಾವ್ ಕೊಲೆ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ನಗರ ಅಪರಾಧ ಪತ್ತೆದಳ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ.
ಕೃಷ್ಣಾಪುರ 4ನೇ ಬ್ಲಾಕ್ ಬಳಿಯ ನಿವಾಸಿ ಸಫ್ವಾನ್ ಯಾನೆ ಚಪ್ಪು (23) ಬಂಧಿತ ಆರೋಪಿ.
ಈತ ಪ್ರಕರಣದ ಪ್ರಮುಖ ಆರೋಪಿ ರಿಝ್ವಾನ್ ಯಾನೆ ರಿಜ್ಜು ಎಂಬಾತನ ಸಹೋದರ. ಸುರತ್ಕಲ್ ಮುಕ್ಕ ಬಳಿ ಆರೋಪಿಯನ್ನು ಬಂಧಿಸಿ ಮುಂದಿನ ಕ್ರಮಕ್ಕಾಗಿ ಪ್ರಕರಣದ ತನಿಖಾಧಿಕಾರಿ ಎಸಿಪಿ ಮಂಜುನಾಥ ಶೆಟ್ಟಿ ಅವರಿಗೆ ಹಸ್ತಾಂತರಿಸಲಾಗಿದೆ.
ಪ್ರಕರಣದ ಹಿನ್ನೆಲೆ: 2018 ಜ. 3ರಂದು ಕಾಟಿಪಳ್ಳ 2ನೇ ಬ್ಲಾಕ್ ಸಮೀಪ ದೀಪಕ್ ರಾವ್ (30) ಎಂಬವರನ್ನು ಕಾರಿನಲ್ಲಿ ಬಂದ ನಾಲ್ವರ ತಂಡ ತಲವಾರ್‌ನಿಂದ ಕಡಿದು ಕೊಲೆ ಮಾಡಿ ಪರಾರಿಯಾಗಿತ್ತು. ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಆರೋಪಿಗಳ ಪೈಕಿ 12 ಮಂದಿಯನ್ನು ಈಗಾಗಲೇ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಆರೋಪಿಯ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಇನ್‌ಸ್ಪೆಕ್ಟರ್ ಶಾಂತಾರಾಮ, ಪಿಎಸ್ಸೈ ಶ್ಯಾಮ್ ಸುಂದರ್, ಕಬ್ಬಾಳ್‌ರಾಜ್ ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.