ಉಚಿತ ಬಸ್ ಪಾಸ್ ನೀಡಲು ಒತ್ತಾಯಿಸಿ ಎಬಿವಿಪಿ ಧರಣಿ

Update: 2018-07-18 13:27 GMT

ಬೆಂಗಳೂರು, ಜು.18: ರಾಜ್ಯ ಸರಕಾರ ಈ ಕೂಡಲೇ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಬೇಕೆಂದು ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಬುಧವಾರ ನಗರದ ಮೌರ್ಯ ವೃತ್ತದ ಗಾಂಧಿ ಪ್ರತಿಮೆ ಎದುರು ಜಮಾಯಿಸಿದ ಎಬಿವಿಪಿ ಕಾರ್ಯಕರ್ತರು, ರಾಜ್ಯ ಸರಕಾರ ಬಸ್ ಪಾಸ್ ವಿತರಣೆ ಮಾಡದೆ, ವಿದ್ಯಾರ್ಥಿ ವಿರೋಧಿಯಾಗಿ ವರ್ತಿಸುತ್ತಿದೆ ಎಂದು ಆರೋಪಿಸಿದರು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಎಬಿವಿಪಿ ರಾಜ್ಯ ಕಾರ್ಯದರ್ಶಿ ಹರ್ಷ ನಾರಾಯಣ, ಸರಕಾರದ ಬಳಿ, ಶಾಸಕರಿಗೆ ಕಾರು ಖರೀದಿಸಲು, ಮೋಜು ಮಸ್ತಿ ಮಾಡಲು ಹಣ ಇದೆ. ಆದರೆ, ಬಡ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಲು ಹಣವಿಲ್ಲ ಎಂದು ಹೇಳುತ್ತಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟನೆ ನೀಡಬೇಕು ಎಂದು ಒತ್ತಾಯಿಸಿದರು.

ಸಮ್ಮಿಶ್ರ ಸರಕಾರದ ಬಜೆಟ್‌ನಲ್ಲಿ ಉಚಿತ ಬಸ್ ಪಾಸ್ ಬಗ್ಗೆ ಪ್ರಸ್ತಾಪ ಮಾಡಿಲ್ಲ ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಹಾಗೂ ಪ್ರಾಥಮಿಕ ಶಿಕ್ಷಣ ಸಚಿವ ಎನ್.ಮಹೇಶ್ ಪಾಸ್ ನೀಡುವ ಸಂಬಂಧ ಮಾಧ್ಯಮಗಳ ಮೂಲಕ ಗೊಂದಲದ ಹೇಳಿಕೆ ನೀಡುತ್ತಿದ್ದಾರೆ. ಹೀಗಾಗಿ, ಅವರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಬೇಕು ಎಂದು ಆಗ್ರಹಿಸಿದರು.

ಕುಮಾರಸ್ವಾಮಿ ಮಂಡಿಸಿದ ಬಜೆಟ್‌ನಲ್ಲಿ ಶಿಕ್ಷಣ ಕ್ಷೇತ್ರವನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ವಿದ್ಯಾರ್ಥಿಗಳಿಗೆ ಅವಶ್ಯವಿರುವ ಉಚಿತ ಬಸ್ ಪಾಸ್ ವಿತರಣೆ, ಎಸ್ಸಿ-ಎಸ್ಟಿ ಮತ್ತು ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ಉನ್ನತೀಕರಣ, ಖಾಲಿಯಿರುವ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ನೇಮಕದ ಬಗ್ಗೆ ಪ್ರಸ್ತಾಪಿಸಿಲ್ಲ ಎಂದು ಪ್ರತಿಭಟನಾಕಾರರು ದೂರಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News