ಉತ್ತರ ಕರ್ನಾಟಕಕ್ಕೆ ಬಜೆಟ್‌ನಲ್ಲಿ ಅನ್ಯಾಯವಾಗಿಲ್ಲ: ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ
ಹುಬ್ಬಳ್ಳಿ, ಜು.20: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಂಡಿಸಿರುವ ಸಮ್ಮಿಶ್ರ ಸರಕಾರದ ಮೊದಲ ಬಜೆಟ್‌ನಲ್ಲಿ ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿಲ್ಲ. ನಾವು ಅದಕ್ಕೆ ಅವಕಾಶವನ್ನು ನೀಡುವುದಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಉತ್ತಮ ಆಡಳಿತ ನೀಡಿದ್ದರೂ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಪಡೆಯಲು ಸಾಧ್ಯವಾಗಿಲ್ಲ. ಸರಕಾರದ ಜನಪರವಾದ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ನಾವು ವಿಫಲವಾಗಿದ್ದೇವೆ ಎಂದರು.
ವಿಧಾನಸಭಾ ಚುನಾವಣೆಯಲ್ಲಿ ನಮಗೆ ಹಿನ್ನಡೆಯಾಗಿದೆ. ಪಕ್ಷ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಜವಾಬ್ದಾರಿ ನನ್ನ ಮೇಲಿದೆ. ಅದನ್ನು ನಾನು ಸಮರ್ಥವಾಗಿ ನಿಭಾಯಿಸುತ್ತೇನೆ. ಲೋಕಸಭಾ ಚುನಾವಣೆಯಲ್ಲಿಯೂ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಮುಂದುವರೆಯಲಿದ್ದು, ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ಅಭ್ಯರ್ಥಿಗಳು ಗೆಲ್ಲಬೇಕು ಎಂದು ಅವರು ಹೇಳಿದರು.
ಮೈತ್ರಿ ಸರಕಾರದಲ್ಲಿ ನಮ್ಮದು ದೊಡ್ಡ ಪಾಲಿದೆ. ಇನ್ನು ಅನ್ನಭಾಗ್ಯ ಯೋಜನೆಯಡಿ ಅಕ್ಕಿ ಪ್ರಮಾಣ ಇಳಿಕೆ , ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆ ಹೆಚ್ಚಳ ವಿಚಾರ ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಈಶ್ವರ್ ಖಂಡ್ರೆ ಹೇಳಿದರು.
ಯುವಕರು ಕೇಂದ್ರ ಸರಕಾರದ ನೀತಿಗಳ ವಿರುದ್ಧ ಆಕ್ರೋಶಗೊಂಡಿದ್ದಾರೆ. ಪ್ರತಿವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿಸುವ ಭವಸೆ ನೀಡಿದ್ದ ಪ್ರಧಾನಿ ನರೇಂದ್ರಮೋದಿ ನೇತೃತ್ವದ ಕೇಂದ್ರ ಸರಕಾರ ವಾಗ್ದಾನ ಹುಸಿಯಾಗಿದೆ. ಒಂದು ಸುಳ್ಳನ್ನು ಸಾವಿರ ಬಾರಿ ಹೇಳಿ ಅದನ್ನು ಸತ್ಯ ಎಂದು ಜನರನ್ನು ನಂಬಿಸಿ, ದಾರಿ ತಪ್ಪಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ ಎಂದು ಅವರು ಆರೋಪಿಸಿದರು.
ಆದರೆ, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯವ ಈ ನಾಟಕ ನಡೆಯುವುದಿಲ್ಲ. ಅವರ ಸುಳ್ಳನ್ನು ಜನ ಅರ್ಥ ಮಾಡಿಕೊಂಡಿದ್ದಾರೆ. ಅವರ ಹುಸಿ ಭರವಸೆಗಳಿಗೆ ಮತದಾರರು ಮರಳಾಗುವುದಿಲ್ಲ ಎಂದು ಈಶ್ವರ್ ಖಂಡ್ರೆ ವಿಶ್ವಾಸ ವ್ಯಕ್ತಪಡಿಸಿದರು.