ಚುನಾಯಿತ ಸದಸ್ಯರ ವಿಶೇಷ ಕೋರ್ಟ್‌ನಲ್ಲಿ ನಡೆಯುತ್ತಿರುವ ವಿಚಾರಣೆಗೆ ಹೈಕೋರ್ಟ್ ತೆರೆ

Update: 2018-07-20 16:48 GMT

ಬೆಂಗಳೂರು, ಜು.20: ಬೇಲೇಕೇರಿ ಬಂದರಿನಿಂದ ಅಕ್ರಮವಾಗಿ ಕಬ್ಬಿಣದ ಅದಿರು ಸಾಗಾಟ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ ಸತೀಶ್ ಸೈಲ್ ವಿರುದ್ಧ ಬೆಂಗಳೂರಿನ ವಿಧಾನಸಭೆ ಹಾಗೂ ಲೋಕಸಭೆ ಚುನಾಯಿತ ಸದಸ್ಯರ ವಿಶೇಷ ಕೋರ್ಟ್‌ನಲ್ಲಿ ನಡೆಯುತ್ತಿರುವ ವಿಚಾರಣೆಗೆ ಹೈಕೋರ್ಟ್ ಶುಕ್ರವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಪ್ರಕರಣದ ವಿಚಾರಣೆಯನ್ನು ಚುನಾಯಿತ ಸದಸ್ಯರ ವಿಶೇಷ ನ್ಯಾಯಾಲಯಕ್ಕೆ ವರ್ಗಾಯಿಸಿದ್ದ ಸಿಬಿಐ ಕೋರ್ಟ್ ಕ್ರಮ ಪ್ರಶ್ನಿಸಿ ಶ್ರೀ ಮಲ್ಲಿಕಾರ್ಜುನ ಶಿಪ್ಪಿಂಗ್ ಪ್ರೈವೇಟ್ ಲಿಮಿಟೆಡ್ ಹಾಗೂ ಸತೀಶ್ ಸೈಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹಾ ಅವರಿದ್ದ ನ್ಯಾಯಪೀಠ, ಸತೀಶ್ ಸೈಲ್ ವಿರುದ್ಧ ವಿಶೇಷ ನ್ಯಾಯಾಲಯದಲ್ಲಿ ನಡೆಯುತ್ತಿರುವ 7 ಪ್ರಕರಣಗಳ ವಿಚಾರಣೆಗೆ ತಡೆಯಾಜ್ಞೆ ನೀಡಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಮೂರ್ತಿ ಡಿ. ನಾಯಕ್ ವಾದ ಮಂಡಿಸಿ, ವಿಧಾನಸಭೆ ಹಾಗೂ ಲೋಕಸಭೆ ಚುನಾಯಿತ ಸದಸ್ಯರ ವಿರುದ್ಧ ದಾಖಲಾಗಿರುವ ಭ್ರಷ್ಟಾಚಾರ ಪ್ರಕರಣಗಳ ವಿಚಾರಣೆಗೆಂದೇ ವಿಶೇಷ ನ್ಯಾಯಾಲಯ ರಚಿಸುವಂತೆ ಸುಪ್ರೀಂಕೋರ್ಟ್ ನಿರ್ದೇಶಿಸಿತ್ತು. ಅದರಂತೆ ರಾಜ್ಯ ಸರಕಾರ 2018ರ ಮಾರ್ಚ್‌ನಲ್ಲಿ ವಿಶೇಷ ನ್ಯಾಯಾಲಯ ರಚಿಸಿತ್ತು. ಆದರೆ, ನ್ಯಾಯಾಲಯ ಸ್ಥಾಪನೆಗೂ ಮುನ್ನ ರಾಜ್ಯ ಸರಕಾರ ಯಾವುದೇ ಅಧಿಸೂಚನೆ ಹೊರಡಿಸಿಲ್ಲ. ಇದು ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 3(1)ರ ಉಲ್ಲಂಘನೆಯಾಗಿದೆ ಎಂದು ದೂರಿದರು.

ವಿಶೇಷ ನ್ಯಾಯಾಲಯಕ್ಕೆ ವಿಶೇಷ ನ್ಯಾಯಾಧೀಶರನ್ನು ನೇಮಿಸಿ ಸರಕಾರದ ಅಧಿಸೂಚನೆ ಹೊರಡಿಸದ ಕಾರಣ, ಭ್ರಷ್ಟಾಚಾರ ಪ್ರಕರಣಗಳ ವಿಚಾರಣೆ ಅದರ ವ್ಯಾಪ್ತಿಗೆ ಬರುವುದಿಲ್ಲ. ಹೀಗಿದ್ದರೂ ಅರ್ಜಿದಾರರ ವಿರುದ್ಧ ಸಿಬಿಐ ಕೋರ್ಟ್‌ನಲ್ಲಿ ವಿಚಾರಣೆಗೆ ಬಾಕಿ ಇದ್ದ 7 ಪ್ರಕರಣಗಳನ್ನು ವಿಶೇಷ ನ್ಯಾಯಾಲಯಕ್ಕೆ ವರ್ಗಾಯಿಸಲಾಗಿದ್ದು, ಈ ಪೈಕಿ 4 ಪ್ರಕರಣಗಳ ವಿಚಾರಣೆಗೆ ದಿನಾಂಕ ನಿಗದಿಪಡಿಸಲಾಗಿದೆ. ಹೀಗಾಗಿ ಅರ್ಜಿದಾರರ ವಿರುದ್ಧ ವಿಶೇಷ ನ್ಯಾಯಾಲಯದಲ್ಲಿ ನಡೆಯುತ್ತಿರುವ ಪ್ರಕರಣದ ವಿಚಾರಣೆ ರದ್ದುಪಡಿಸಬೇಕೆಂದು ಕೋರಿದರು.

ಪ್ರಕರಣವೇನು: ಅಕ್ರಮ ಗಣಿಕಾರಿಕೆ ಆರೋಪದಲ್ಲಿ ಮಾಜಿ ಶಾಸಕ ಸತೀಶ್ ಸೈಲ್ ವಿರುದ್ಧ ಪ್ರಕರಣ ದಾಖಲಿಸಿದ್ದ ಸಿಬಿಐ, ತನಿಖೆ ನಡೆಸಿ ಸಿಬಿಐ ವಿಶೇಷ ನ್ಯಾಯಾಲಯಕ್ಕೆ 6 ದೋಷಾರೋಪ ಪಟ್ಟಿಗಳನ್ನು ಸಲ್ಲಿಸಿತ್ತು. ಈ ಮಧ್ಯೆ ತಮ್ಮ ವಿರುದ್ಧದ ಆರೋಪಗಳನ್ನು ಕೈಬಿಡುವಂತೆ ಕೋರಿ ಸತೀಶ್ ಸೈಲ್ ಸಲ್ಲಿಸಿದ್ದ ಅರ್ಜಿಯನ್ನು ಸಿಬಿಐ ಕೋರ್ಟ್ ವಜಾಗೊಳಿಸಿತ್ತು. ಇದರಿಂದ ಸತೀಶ್ ಸೈಲ್, ಪ್ರಕರಣ ರದ್ದುಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿಗಳು ವಿಚಾರಣೆಗೆ ಬಾಕಿ ಇದ್ದಾಗಲೇ, ಸತೀಶ್ ಸೈಲ್ ವಿರುದ್ಧದ ಪ್ರಕರಣಗಳನ್ನು 2018ರ ಮಾರ್ಚ್ ತಿಂಗಳಿನಲ್ಲಿ ಚುನಾಯಿತ ಸದಸ್ಯರ ವಿಶೇಷ ನ್ಯಾಯಾಲಯಕ್ಕೆ ವರ್ಗಾಯಿಸಲಾಗಿತ್ತು. ಇದನ್ನು ಪ್ರಶ್ನಿಸಿ ಸತೀಶ್ ಸೈಲ್ ಹೈಕೋರ್ಟ್‌ಗೆ ಮಧ್ಯಂತರ ಅರ್ಜಿ ಸಲ್ಲಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News