ಕೆಪಿಟಿಸಿಎಲ್ 49ನೆ ಸಂಸ್ಥಾಪನಾ ದಿನಾಚರಣೆ: ಹೆಚ್ಚಿನ ವಿದ್ಯುತ್ ಉತ್ಪಾದನೆಗೆ ಕರೆ

Update: 2018-07-20 17:47 GMT

ಬೆಂಗಳೂರು, ಜು.20: ನಮ್ಮಲ್ಲಿರುವ ತಂತ್ರಜ್ಞಾನವನ್ನು ಸಮರ್ಪಕವಾಗಿ ಬಳಸಿಕೊಂಡು  ಹೆಚ್ಚಿನ ವಿದ್ಯುತ್ ಉತ್ಪಾದನೆ ಮಾಡಬೇಕಾಗಿದೆ ಎಂದು ಇಂಧನ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ಪಿ. ರವಿಕುಮಾರ್ ಹೇಳಿದರು

ಶುಕ್ರವಾರ ನಗರದ ಚೌಡಯ್ಯ ಮೆಮೋರಿಯಲ್ ಹಾಲ್ ನಲ್ಲಿ ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (ಕೆಪಿಟಿಸಿಎಲ್) ಆಯೋಜಿಸಿದ್ದ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿದ್ಯುತ್ ಉತ್ಪಾದನಾ ವಲಯದಲ್ಲಿ ದುಡಿಯುತ್ತಿರುವವರ ಶ್ರಮ ಮಹತ್ವದಾಗಿದ್ದು, ರಾಜ್ಯಕ್ಕೆ ಬೆಳಕು ನೀಡುವ ಇಲಾಖೆಯಲ್ಲಿ ದುಡಿಯುತ್ತಿದ್ದೇವೆ ಎಂಬ ಹೆಮ್ಮೆ ನೌಕರರಿಗಿರ ಬೇಕು. ಜೊತೆಗೆ ಲಭ್ಯವಿರುವ ತಂತ್ರಜ್ಞಾನವನ್ನು ಗರಿಷ್ಠ ಪ್ರಮಾಣದಲ್ಲಿ ಬಳಸಿಕೊಂಡು ಹೆಚ್ಚು- ಹೆಚ್ಚು ವಿದ್ಯುತ್ ಉತ್ಪಾದಿಸುವ ಜವಾಬ್ದಾರಿ ನಮ್ಮ ಇಲಾಖೆ ಮೇಲಿದೆ ಎಂದರು.

ಮುಂದಿನ ದಿನಗಳಲ್ಲಿ ಉತ್ಕೃಷ್ಟ ಮಟ್ಟದ ತಂತ್ರಜ್ಞಾನ ಉಪಯೋಗಿಸಿಕೊಂಡು ಅಧಿಕ ವಿದ್ಯುತ್ ಉತ್ಪಾದಿಸುವ ಗುರಿ ಇಲಾಖೆ ಇಟ್ಟುಕೊಂಡಿದೆ. ಇದಕ್ಕೆ ನೌಕರರ ಬೆಂಬಲ ಅಗತ್ಯವಾಗಿದೆ ಎಂದು ಹೇಳಿದರು.

ನಿಗಮದ ವ್ಯವಸ್ಥಾಪಕ ನಿರ್ದೇಶಕ ಜಿ. ಕುಮಾರ ನಾಯಕ ಮಾತನಾಡಿ, ಸರ್ಕಾರದ ಎಲ್ಲ ಇಲಾಖೆಗಳಿಗಿಂತ ಇಂಧನ ಇಲಾಖೆಗಳಲ್ಲಿ ದುಡಿಯುವವರ ಶ್ರಮಕ್ಕೆ ಹೆಚ್ಚಿನ ಮಹತ್ವವಿದೆ. ಕಡಿಮೆ ವೆಚ್ಚದಲ್ಲಿ ಅಧಿಕ ವಿದ್ಯುತ್ ತಯಾರಿಸಿ ರಾಜ್ಯಕ್ಕೆ ಸರಬರಾಜು ಮಾಡಬೇಕಾಗಿದೆ. ಭವಿಷ್ಯದಲ್ಲಿ ವಿದ್ಯುತಿನ ಅಭಾವ ಎದುರಾಗದಂತೆ ನೋಡಿಕೊಳ್ಳಲು ಇಂದಿನಿಂದಲೇ ಸನ್ನದ್ಧರಾಗಬೇಕು ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಎಸ್‍ಎಸ್‍ಎಲ್‍ಸಿ ಮತ್ತು ಪಿಯು ವಾರ್ಷಿಕ ಪರೀಕ್ಷೆಯಲ್ಲಿ ಹೆಚ್ಚು ಅಂಕಪಡೆದ ನಿಗಮದ ಉದ್ಯೋಗಿಗಳ ಮಕ್ಕಳಿಗೆ ವಿದ್ಯಾ ಪುರಸ್ಕಾರ ಹಾಗೂ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ವಿವಿಧ ಘಟಕಗಳಿಗೆ ಪುರಸ್ಕಾರ ನೀಡಲಾಯಿತು. ಜೊತೆಗೆ ನಿವೃತ್ತ ಉದ್ಯೋಗಿಗಳನ್ನು ಸನ್ಮಾನಿಸಲಾಯಿತು.

ಕೆಪಿಟಿಸಿಎಲ್ ಪ್ರಸರಣ ವಿಭಾಗದ ವ್ಯವಸ್ಥಾಪಕ ನಿರ್ದೇಶಕ ಜಾವೇದ್ ಅಖ್ತರ್, ಆರ್. ನಾಗರಾಜ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News