ಕುಮಾರಸ್ವಾಮಿಯಿಂದ ದಲಿತ ವಿರೋಧಿ ನೀತಿ: ಎಸ್ಸಿ, ಎಸ್ಟಿ ನೌಕರರ ಒಕ್ಕೂಟದ ಅಧ್ಯಕ್ಷ ದಾಸಪ್ರಕಾಶ್

Update: 2018-07-21 13:02 GMT

ಬೆಂಗಳೂರು, ಜು.21: ರಾಷ್ಟ್ರಪತಿ ಅಂಕಿತ ಹಾಕಿರುವ ಎಸ್ಸಿ, ಎಸ್ಟಿ ಭಡ್ತಿ ಮೀಸಲಾತಿ ಕಾಯ್ದೆಯನ್ನು ಅನುಷ್ಠಾನಕ್ಕೆ ತರಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಿಂದೇಟು ಹಾಕುತ್ತಿರುವುದು ದಲಿತ ವಿರೋಧಿ ನೀತಿಯಾಗಿದೆ ಎಂದು ಎಸ್ಸಿ, ಎಸ್ಟಿ ನೌಕರರ ಒಕ್ಕೂಟದ ಅಧ್ಯಕ್ಷ ದಾಸಪ್ರಕಾಶ್ ಆರೋಪಿಸಿದ್ದಾರೆ.

ಎಸ್ಸಿ, ಎಸ್ಟಿ ಭಡ್ತಿ ಮೀಸಲಾತಿಗೆ ಒತ್ತಾಯಿಸಿ ನಗರದ ಸ್ವಾತಂತ್ರ ಉದ್ಯಾನವನದಲ್ಲಿ ಎಸ್ಸಿ, ಎಸ್ಟಿ ನೌಕರರು ಒಕ್ಕೂಟ ಹಾಗೂ ದಲಿತ ಸಂಘಟನೆಗಳು ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ 6ನೆ ದಿನಕ್ಕೆ ಕಾಲಿಟ್ಟಿದೆ. ಆದರೆ, ಇಲ್ಲಿಯವರೆಗೂ ರಾಜ್ಯ ಸರಕಾರ ಕಾಯ್ದೆಯನ್ನು ಅನುಷ್ಠಾನಕ್ಕೆ ತರುವ ನಿಟ್ಟಿನಲ್ಲಿ ಮನಸು ಮಾಡದೆ, ಎಸ್ಸಿ, ಎಸ್ಟಿ ನೌಕರರ ಬದುಕಿನಲ್ಲಿ ಚೆಲ್ಲಾಟವಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದಲಿತರ ಬದುಕನ್ನು ಸುಧಾರಿಸುವ ನಿಟ್ಟಿನಲ್ಲಿ ಎಸ್ಸಿ, ಎಸ್ಟಿ ಭಡ್ತಿ ಮೀಸಲಾತಿ ಕಾಯ್ದೆಗೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದಾರೆ. ಹಾಗೂ ಇದು ಕಾಯ್ದೆಯಾಗಿ ಕರ್ನಾಟಕ ರಾಜ್ಯಪತ್ರದಲ್ಲಿ ಅಧಿಕೃತವಾಗಿ ಪ್ರಕಟಿಸಲಾಗಿದೆ. ಈ ಕಾಯ್ದೆಯನ್ನು ಜಾರಿ ಮಾಡುವಂತೆ ಎಲ್ಲ ಇಲಾಖೆಗಳಿಗೂ ಸೂಚನೆ ನೀಡುವುದಷ್ಟೆ ಬಾಕಿಯಿದೆ. ಇಂತಹ ಸಂದರ್ಭದಲ್ಲಿ ಎಚ್.ಡಿ.ಕುಮಾರಸ್ವಾಮಿ ಕಾಯ್ದೆಯ ಅನುಷ್ಠಾನಕ್ಕೆ ಮೀನಾಮೇಷ ಎಣಿಸುತ್ತಿರುವುದು ದಲಿತ ವಿರೋಧಿ ನೀತಿಯಲ್ಲದೆ ಮತ್ತೇನು ಅಲ್ಲವೆಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ರಾಷ್ಟ್ರಪತಿ ಅಂಕಿತ ಹಾಕಿರುವ ಎಸ್ಸಿ, ಎಸ್ಟಿ ಭಡ್ತಿ ಮೀಸಲಾತಿ ಕಾಯ್ದೆಯನ್ನು ಜಾರಿ ಮಾಡುವುದು ಬೇಡವೆಂದು ದಲಿತ ವಿರೋಧಿ ಅಭಿಪ್ರಾಯ ಮೂಡಿಸುತ್ತಿರುವ ಉದಯ್ ಹೊಳ್ಳರನ್ನು ಅಡ್ವೋಕೇಟ್ ಜನರಲ್ ಹುದ್ದೆಯಿಂದ ಸರಕಾರ ಕೂಡಲೆ ವಜಾ ಮಾಡಬೇಕೆಂದು ಅವರು ಒತ್ತಾಯಿಸಿದರು. ಧರಣಿಯಲ್ಲಿ ಸಮತಾ ಸೈನಿಕ ದಳದ ವೆಂಕಟಸ್ವಾಮಿ ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದರು.

ಮುಖ್ಯುಂತ್ರಿ ಹೋದ ಎಲ್ಲೆಡೆ ಕಪ್ಪು ಬಾವುಟ
ಎಸ್ಸಿ, ಎಸ್ಟಿ ಭಡ್ತಿ ಮೀಸಲಾತಿ ಕಾಯ್ದೆ ಜಾರಿಗೆ ಹಿಂದೇಟು ಹಾಕುತ್ತಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಗೆ ರಾಜ್ಯದ ಯಾವುದೆ ಭಾಗಕ್ಕೆ ಹೋದರು ದಲಿತ ಸಮುದಾಯದ ಜನತೆ ಕಪ್ಪು ಬಾವುಟ ಪ್ರದರ್ಶಿಸಲು ತೀರ್ಮಾನಿಸಲಾಗಿದೆ. ಈ ನಿಟ್ಟಿನಲ್ಲಿ ಹಾಸನ ಹಾಗೂ ಹೊಳೆನರಸೀಪುರದಲ್ಲಿ ಜೆಡಿಎಸ್ ನಾಯಕರ ದಲಿತ ವಿರೋಧಿ ನೀತಿಯನ್ನು ಖಂಡಿಸಿ ಬೃಹತ್ ಪ್ರತಿಭಟನಾ ರ್ಯಾಲಿ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ.
-ಎ.ಸಿ.ತಿಪ್ಪೇಸ್ವಾಮಿ, ರಾಜ್ಯಧ್ಯಕ್ಷ, ರಾಜ್ಯ ಪರಿಶಿಷ್ಟ ಪಂಗಡಗಳ ಸರಕಾರಿ ನೌಕರರ ಸಂಘ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News