ಲಿಂಗಾಯತ ಸ್ವತಂತ್ರ ಧರ್ಮ ಮಾನ್ಯತೆಗೆ ಆಗ್ರಹ: ಸಂಸದರು, ಕೇಂದ್ರ ಸಚಿವರ ನಿವಾಸದ ಎದುರು ಧರಣಿ

Update: 2018-07-21 13:26 GMT

ಬೆಂಗಳೂರು/ವಿಜಯಪುರ, ಜು.21: ಕೇಂದ್ರದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರಕಾರ ಲಿಂಗಾಯತ ಸ್ವತಂತ್ರ ಧರ್ಮಕ್ಕೆ ಮಾನ್ಯತೆ ನೀಡಬೇಕು ಎಂದು ಆಗ್ರಹಿಸಿ ರಾಷ್ಟ್ರೀಯ ಬಸವ ದಳ ಕಾರ್ಯಕರ್ತರು, ರಾಜ್ಯದಿಂದ ಪ್ರತಿನಿಧಿಸುತ್ತಿರುವ ಸಂಸದರು ಹಾಗೂ ಕೇಂದ್ರ ಸಚಿವರ ನಿವಾಸದ ಎದುರು ಧರಣಿ ನಡೆಸಿದರು.

ಶನಿವಾರ ಇಲ್ಲಿನ ಸಂಜಯನಗರದ ಬಳಿಯಿರುವ ಕೇಂದ್ರ ಸಚಿವ ಸದಾನಂದ ಗೌಡ, ಸಂಸದ ಕೆ.ಎಚ್. ಮುನಿಯಪ್ಪ ನಿವಾಸಕ್ಕೆ ತೆರಳಿದ ಬಸವ ದಳದ ಕಾರ್ಯಕರ್ತರು, ಕೇಂದ್ರ ಸರಕಾರ, ಲಿಂಗಾಯತ ಧರ್ಮಕ್ಕೆ ಮಾನ್ಯತೆ ನೀಡಲು ಮುಂದಾಗಬೇಕು. ಈ ನಿಟ್ಟಿನಲ್ಲಿ ಸಂಸದರು ಸರಕಾರದ ಮೇಲೆ ಒತ್ತಡ ಹಾಕಬೇಕೆಂದು ಮನವಿ ಸಲ್ಲಿಸಿದರು.

ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರ, ಲಿಂಗಾಯತಕ್ಕೆ ಸ್ವತಂತ್ರ ಧರ್ಮಕ್ಕೆ ಮಾನ್ಯತೆ ನೀಡಿ ಅಲ್ಪಸಂಖ್ಯಾತರ ಸ್ಥಾನಮಾನ ನೀಡಲು ಶಿಫಾರಸ್ಸಿಗಾಗಿ ಕೇಂದ್ರ ಸರಕಾರಕ್ಕೆ ಕಳಿಸಿಕೊಟ್ಟಿದೆ. ಆದರೆ, ಈವರೆಗೂ ಕೇಂದ್ರ ಸರಕಾರ ಪ್ರತಿಕ್ರಿಯೆ ನೀಡಿಲ್ಲ. ಹೀಗಾಗಿ, ರಾಜ್ಯದಿಂದ ಆಯ್ಕೆಯಾಗಿರುವ ಸಂಸದರು ಕೇಂದ್ರ ಸರಕಾರದ ಮೇಲೆ ಒತ್ತಡ ತರಬೇಕೆಂದು ಲಿಂಗಾಯತ ಮಹಾಸಭಾದ ಅಧ್ಯಕ್ಷ ಎನ್.ಚಂದ್ರಮೌಳಿ ಒತ್ತಾಯ ಮಾಡಿದರು.

ವಿಜಯಪುರ: ಕೇಂದ್ರ ಸಚಿವ ರಮೇಶ ಜಿಗಜಿಣಗಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಕೂಡಲೇ ಸ್ವತಂತ್ರ ಧರ್ಮದ ಮಾನ್ಯತೆ ನೀಡುವಂತೆ ಆಗ್ರಹಿಸಿದರು.

ಹಿಂದಿನ ರಾಜ್ಯ ಸರಕಾರ ಲಿಂಗಾಯತ ಸ್ವತಂತ್ರ ಧರ್ಮಕ್ಕೆ ಮಾನ್ಯತೆ ನೀಡಿ ಕೇಂದ್ರಕ್ಕೆ ಶಿಫಾರಸು ಮಾಡಿದರೂ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ ಅವರು, ಕೂಡಲೇ ಲಿಂಗಾಯತ ಸ್ವತಂತ್ರ ಧರ್ಮದ ಮಾನ್ಯತೆ ನೀಡುವಂತೆ ರಾಷ್ಟ್ರೀಯ ಬಸವ ದಳದ ರಾಜ್ಯಾಧ್ಯಕ್ಷ ಬಸವರಾಜ ಕೊಂಡಗೂಳಿ ಮನವಿ ಮಾಡಿದರು.

ಕೇಂದ್ರ ಸರಕಾರ ಲಿಂಗಾಯತ ಜನಾಂಗದ ಬೇಡಿಕೆ ಈಡೇರಿಸಲು ಮುಂದಾಗದಿದ್ದಲ್ಲಿ, ಹೊಸದಿಲ್ಲಿಯಲ್ಲೂ ಹೋರಾಟ ನಡೆಸಲಾಗುವುದು.
-ಎನ್.ಚಂದ್ರವೌಳಿ, ಅಧ್ಯಕ್ಷ, ಲಿಂಗಾಯತ ಮಹಾಸಭಾ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News