ಮೈತ್ರಿ ಸರಕಾರದ ವಿರುದ್ಧ ಬಹಿರಂಗ ಹೇಳಿಕೆ ಸಹಿಸುವುದಿಲ್ಲ: ಕೆ.ಸಿ.ವೇಣುಗೋಪಾಲ್ ಎಚ್ಚರಿಕೆ

Update: 2018-07-21 13:43 GMT

ಬೆಂಗಳೂರು, ಜು. 21: ರಾಜ್ಯದಲ್ಲಿನ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟ ಸರಕಾರದ ವಿರುದ್ಧ ಯಾರಾದರೂ ಬಹಿರಂಗ ಹೇಳಿಕೆ ನೀಡಿದರೆ ಸಹಿಸುವುದಿಲ್ಲ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಇಂದಿಲ್ಲಿ ಎಚ್ಚರಿಕೆ ನೀಡಿದ್ದಾರೆ.

ಶನಿವಾರ ಇಲ್ಲಿನ ಗುರುನಾನಕ್ ಭವನದಲ್ಲಿ ಏರ್ಪಡಿಸಿದ್ದ ಕೆಪಿಸಿಸಿ ಪದಾಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸರಕಾರದ ಆಡಳಿತಕ್ಕೆ ಸಂಬಂಧಿಸಿದ ಏನೇ ಆಕ್ಷೇಪಗಳಿದ್ದರೂ, ಪಕ್ಷದ ಆಂತರಿಕ ಮಟ್ಟದಲ್ಲಿ ಚರ್ಚೆ ಮಾಡಬೇಕು. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಮನ್ವಯ ಸಮಿತಿ ಅಧ್ಯಕ್ಷರೂ ಆಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಗಮನಕ್ಕೆ ತರಬೇಕು. ಅದನ್ನು ಬಿಟ್ಟು ಬಹಿರಂಗ ಹೇಳಿಕೆ, ಟೀಕೆಗಳನ್ನು ಸಹಿಸುವುದಿಲ್ಲ ಎಂದು ಗುಡುಗಿದರು.

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಬಗ್ಗೆ ಹೈಕಮಾಂಡ್ ಅಂತಿಮ ತೀರ್ಮಾನ ಕೈಗೊಳ್ಳಲಿದೆ. ಕೇಂದ್ರದಲ್ಲಿ ಈ ಬಾರಿ ಅಧಿಕಾರವನ್ನು ಹಿಡಿಯಲೇಬೇಕೆಂಬುದು ನಮ್ಮ ಉದ್ದೇಶ. ಆ ನಿಟ್ಟಿನಲ್ಲಿ ನಾಯಕರೊಂದಿಗೆ ಕಾಣಿಸಿಕೊಳ್ಳುವದನ್ನು ನಿಲ್ಲಿಸಿ ಪಕ್ಷಕ್ಕಾಗಿ ಶ್ರಮಿಸಬೇಕು. ಅಂತಹವರಿಗೆ ಅವಕಾಶಗಳು ದೊರೆಯಲಿದೆ ಎಂದು ಹೇಳಿದರು.

ಬಿಜೆಪಿ ತಂತ್ರಗಾರಿಕೆಗೆ ಕಾಂಗ್ರೆಸ್ ಪ್ರತಿತಂತ್ರ ರೂಪಿಸಬೇಕಿದೆ. ಈ ಹಂತದಲ್ಲಿ ಪಕ್ಷದ ವಿರುದ್ಧ ಕೆಲಸ ಮಾಡುವವರ ಮೇಲೆ ಹದ್ದಿನ ಕಣ್ಣಿಟ್ಟಿದ್ದೇವೆ. ಇಂತಹ ಪ್ರಕರಣಗಳನ್ನ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಎಲ್ಲರೂ ಪಕ್ಷಕ್ಕಾಗಿ ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ಅವರು ಸೂಚಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News