ಶೀಘ್ರವೇ ಕೆಪಿಸಿಸಿ ಪುನಾರಚನೆ: ದಿನೇಶ್‌ ಗುಂಡೂರಾವ್

Update: 2018-07-21 14:52 GMT

ಬೆಂಗಳೂರು, ಜು.21: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಿಂದ ಬಲಪಡಿಸುವ ಉದ್ದೇಶದಿಂದಾಗಿ ಶೀಘ್ರದಲ್ಲಿಯೇ ಕೆಪಿಸಿಸಿ ಪುನಾರಚನೆ ಮಾಡುವುದಾಗಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಶನಿವಾರ ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಶೀಘ್ರವೇ ಕೆಪಿಸಿಸಿ ಪುನಾರಚನೆ ಮಾಡಲಿದ್ದು, ಪಕ್ಷಕ್ಕಾಗಿ ಶ್ರಮಿಸುವವರಿಗೆ ಆದ್ಯತೆ ನೀಡಲಾಗುವುದು. ಜಿಲ್ಲಾ ಕಾಂಗ್ರೆಸ್ ಸಮಿತಿ(ಡಿಸಿಸಿ), ಬ್ಲಾಕ್ ಮಟ್ಟದಲ್ಲೂ ಪುನಾರಚನೆ ಮಾಡುವುದಾಗಿ ಪ್ರಕಟಿಸಿದರು.

ಕೆಪಿಸಿಸಿ ಪದಾಧಿಕಾರಿಗಳು, ಜಿಲ್ಲಾ ಅಧ್ಯಕ್ಷರ ಸಭೆ ನಡೆಸಿದ್ದೇವೆ. ಪಕ್ಷದ ಪುನರ್ ಸಂಘಟನೆ ಬಗ್ಗೆ ಚರ್ಚೆ ನಡೆಸಲಾಗಿದೆ. ಡಿಸೆಂಬರ್‌ನಲ್ಲೇ ಲೋಕಸಭಾ ಚುನಾವಣೆ ಎದುರಾಗುವ ಸಾಧ್ಯತೆ ಇದೆ ಎಂದ ಅವರು, ಉತ್ತರ ಭಾರತದಲ್ಲಿ ಅವರಿಗೆ ಹೊಡೆತ ಬೀಳುತ್ತಿರುವುದರಿಂದ ಪ್ರಧಾನಿ ನರೇಂದ್ರ ಮೋದಿಗೆ ಭಯ ಶುರುವಾಗಿದೆ ಎಂದರು.

ಮುಂದಿನ ಚುನಾವಣೆಯಲ್ಲಿ ಕೇಂದ್ರದಲ್ಲಿ ಬಿಜೆಪಿಯೇತರ ಸರಕಾರ ರಚನೆಯಾಗಲಿದೆ. ಹೀಗಾಗಿ, ರಾಜ್ಯದಲ್ಲಿ ನಾವು ಕಾಂಗ್ರೆಸ್ ಪಕ್ಷವನ್ನು ಬಲಪಡಿಸಲು ಮುಂದಾಗಿದ್ದೇವೆ. ಆಗಸ್ಟ್ 15ರೊಳಗೆ ರಾಜ್ಯದ ಎಲ್ಲ ಬ್ಲಾಕ್ ಸಮಿತಿಗಳ ಮಾಹಿತಿ ಸಂಗ್ರಹಿಸಲಿದ್ದು, ನಿಷ್ಕ್ರಿಯವಾಗಿರುವ ಸಮಿತಿಗಳನ್ನು ಪುನರ್ ರಚನೆ ಮಾಡಲಾಗುವುದು ಎಂದು ದಿನೇಶ್ ಗುಂಡೂರಾವ್ ಹೇಳಿದರು. ಆಗಸ್ಟ್ 9 ರಂದು ಕ್ವಿಟ್ ಇಂಡಿಯಾ ದಿನಾಚರಣೆ ಆಚರಿಸಲಾಗುವುದು. ಬ್ಲಾಕ್ ಮಟ್ಟದಲ್ಲಿ ಸ್ವಾತಂತ್ರ ದಿನಾಚರಣೆ ಆಚರಿಸಲು ಈಗಾಗಲೇ ಸೂಚನೆ ನೀಡಲಾಗಿದೆ. ಆಗಸ್ಟ್ 3ರಿಂದ 5ರವರೆಗೆ ಸಂಸದೀಯ ಮಂಡಳಿ ಸಭೆಯನ್ನು ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಹಾಗೂ, ಶಾಸಕಾಂಗ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕರೆಯಲಾಗಿದೆ ಎಂದು ಮಾಹಿತಿ ನೀಡಿದರು.

ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಅಕ್ಟೋಬರ್‌ನಲ್ಲಿ ಅಧಿಸೂಚನೆ ಹೊರಬೀಳುವ ಸಾಧ್ಯತೆ ಇರುವುದರಿಂದ ಸೆಪ್ಟಂಬರ್‌ನಲ್ಲಿ ಕಾರ್ಯಕರ್ತರ ಸಮಾವೇಶ ನಡೆಸಲು ನಿರ್ಧಾರ ಮಾಡಲಾಗಿದೆ ಎಂದ ಅವರು, ರಾಮನಗರ, ಜಮಖಂಡಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದರು.

ಕೇಂದ್ರ ಸರಕಾರವು ಎಲ್ಲ ಕ್ಷೇತ್ರಗಳಲ್ಲೂ ವಿಫಲವಾಗಿದೆ. ಬಿಜೆಪಿ ಕಳೆದ ಚುನಾವಣೆಗಳಲ್ಲಿ ಜನರನ್ನು ಹಸಿ ಸುಳ್ಳುಗಳನ್ನು ನೀಡಿತ್ತು. ಅದನ್ನ, ನಾವು ಜನರ ಮುಂದಿಡುವ ಕಾರ್ಯ ಮಾಡುತ್ತೇವೆ. ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಈಗಾಗಲೇ ಹೈಕಮಾಂಡ್ ಘೋಷಣೆ ಮಾಡಿದೆ, ಅದಕ್ಕೆ ಪೂರಕವಾಗಿ ಕೆಲಸ ಮಾಡುತ್ತೇವೆ. ಇದರಲ್ಲಿ ಯಾವುದೇ ಗೊಂದಲ ಇಲ್ಲ ಎಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News