ಗಾಂಜಾ ಮಾರಾಟಕ್ಕೆ ಯತ್ನ: ಕೃಷ್ಣಾಪುರ ನಿವಾಸಿಯ ಸೆರೆ

Update: 2018-07-22 08:08 GMT

ಮಂಗಳೂರು, ಜು.22: ಕೇರಳದಿಂದ ಅಕ್ರಮವಾಗಿ ಗಾಂಜಾ ತಂದು ನಗರದಲ್ಲಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯೊಬ್ಬನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

5ನೇ ಬ್ಲಾಕ್ ಕೃಷ್ಣಾಪುರ ನಿವಾಸಿ ಕೇಶವ ಸನಿಲ್ ಬಂಧಿತ ಆರೋಪಿ. ಖಚಿತ ಮಾಹಿತಿಯನ್ನಾಧರಿಸಿ ಈತನನ್ನು ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ತಲಪಾಡಿ ಟೋಲ್ ಗೇಟ್ ಬಳಿ ಸಿಸಿಬಿ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಬಂಧಿತನಿಂದ 1.830 ಕೆ.ಜಿ. ಗಾಂಜಾ, ಒಂದು ಮೊಬೈಲ್ ಫೋನ್ ಹಾಗೂ ಹುಂಡೈ ಇಯಾನ್ ಕಾರೊಂದನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 2.85 ಲಕ್ಷ ರೂ. ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಯು ಕೇರಳ ಮೂಲದ ವ್ಯಕ್ತಿಯೊಬ್ಬನಿಂದ ಗಾಂಜಾ ಖರೀದಿಸಿ ತಂದು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದನೆನ್ನಲಾಗಿದೆ. ಬಂಧಿತ ಕೇಶವ್ ಸನಿಲ್‌ನನ್ನು ಮುಂದಿನ ಕ್ರಮಕ್ಕಾಗಿ ಉಳ್ಳಾಲ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.

ಆರೋಪಿ ಕೇಶವ ಸನಿಲ್ ವಿರುದ್ಧ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ, ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಒಂದು ಕೊಲೆ, ಶಸ್ತ್ರಾಸ್ತ್ರ ಕಾಯ್ದೆ ಹಾಗೂ ಗಾಂಜಾ ಮಾರಾಟಕ್ಕೆ ಸಂಬಂಧಪಟ್ಟಂತೆ ಒಟ್ಟು 12 ಪ್ರಕರಣ, ಪಣಂಬೂರು ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ, ಕಾರ್ಕಳ ಪೊಲೀಸ್ ಠಾಣೆಯಲ್ಲಿ ಗಾಂಜಾ ಪ್ರಕರಣ, ಹೀಗೆ ವಿವಿಧ ಠಾಣೆಗಳಲ್ಲಾಗಿ ಒಟ್ಟು 15 ಪ್ರಕರಣ ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News