×
Ad

ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನ ನೀಡಿದರೆ ನಿಭಾಯಿಸಲು ಸಿದ್ದ: ಶಾಸಕ ಎಚ್.ವಿಶ್ವನಾಥ್

Update: 2018-07-23 21:34 IST

ಮೈಸೂರು,ಜು.23: ಪಕ್ಷದ ವರಿಷ್ಠರು ನನ್ನ ಮೇಲೆ ವಿಶ್ವಾಸ ಇಟ್ಟು ಜಾ.ದಳ ರಾಜ್ಯಾಧ್ಯಕ್ಷ ಸ್ಥಾನ ನೀಡಿದರೆ ನಿಭಾಯಿಸಲು ಸಿದ್ದನಿದ್ದೇನೆ ಎಂದು ಶಾಸಕ ಎಚ್.ವಿಶ್ವನಾಥ್ ಹೇಳಿದರು.

ಮೈಸೂರಿನ ತಮ್ಮ ನಿವಾಸದಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದ ನಾಯಕರಾದ ಎಚ್.ಡಿ.ದೇವೇಗೌಡ ಮತ್ತು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ನನಗೆ ಪಕ್ಷದ ಜವಾಬ್ದಾರಿ ವಹಿಸಿದರೆ ಪ್ರಾಮಾಣಿಕವಾಗಿ ನಿಭಾಯಿಸುತ್ತೇನೆ ಎಂದು ಹೇಳಿದರು.
ನಾನು ರಾಜ್ಯಧ್ಯಕ್ಷ ಸ್ಥಾನ ನೀಡಿ ಎಂದು ಯಾರನ್ನು ಕೇಳಿಲ್ಲ, ಮಧು ಬಂಗಾರಪ್ಪ, ಬಿ.ಬಿ.ನಿಂಗಯ್ಯ, ಪಿ.ಜಿ.ಆರ್ ಸಿಂಧ್ಯಾ ಮತ್ತು ನನ್ನ ಹೆಸರು ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೇಳಿಬರುತ್ತಿದೆ. ಪಕ್ಷದ ವರಿಷ್ಠರು ಯಾರನ್ನೇ ಆಯ್ಕೆ ಮಾಡಿದರು ನಮ್ಮ ಅಭ್ಯಂತರ ಇಲ್ಲ ಎಂದು ಹೇಳಿದರು.

ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ನಿಮಗೆ ಬೇಸರವಾಗಿದೆ ಎಂದು ಹೇಳಲಾಗುತ್ತಿದೆಯಲ್ಲಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ವಿಶ್ವನಾಥ್, ಜೆಡಿಎಸ್ ಪಕ್ಷದ ಋಣ ನನ್ನ ಮೇಲಿದೆ. ಹಾಗಾಗಿ ನಾನು ಪಕ್ಷದಲ್ಲಿ ಯಾವುದೇ ಜವಾಬ್ದಾರಿ ನೀಡಿದರೂ ಯಶಸ್ವಿಯಾಗಿ ನಿರ್ವಹಿಸುತ್ತೇನೆ. ನಮ್ಮ ನಾಯಕರಾದ ಎಚ್.ಡಿ.ದೇವೇಗೌಡ ಮತ್ತು ಕುಮಾರಸ್ವಾಮಿ ನನಗೆ ರಾಜಕೀಯ ಪುನರ್ ಜನ್ಮ ನೀಡಿದ್ದಾರೆ. ನಾನು ಸದ್ಯ ಶಾಸಕನಾಗಿ ಆಯ್ಕೆಯಾಗಿರುವುದು ಖುಷಿ ತಂದಿದೆ ಎಂದರು.

ಸಚಿವ ಸ್ಥಾನ ಬೇಕು ಎಂದು ನಾನು ಲಾಭಿ ಮಾಡಿರಲಿಲ್ಲ. ನಮ್ಮ ನಾಯಕರಾದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸದ್ಯದ ಪರಿಸ್ಥಿತಿಯಲ್ಲಿ ಎದುರಿಸುತ್ತಿರುವ ಸಮಸ್ಯೆಗಳಲ್ಲಿ ಎಡ ಬಲ ಇದ್ದು ಬೆಂಬಲ ನೀಡುವ ಜವಾಬ್ದಾರಿ ನನ್ನ ಮೇಲಿತ್ತು. ಹಾಗಾಗಿ ಸಚಿವ ಸ್ಥಾನ ಬಯಸಿದ್ದೆ ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News