ಶಿರೂರು ಸ್ವಾಮೀಜಿ ನಿಗೂಢ ಸಾವು: ಮಂಗಳೂರು ಪಶ್ಚಿಮ ವಲಯ ಐಜಿಪಿಯಿಂದ ಪರಿಶೀಲನೆ

Update: 2018-07-24 09:31 GMT

ಉಡುಪಿ, ಜು. 24: ಶಿರೂರು ಸ್ವಾಮೀಜಿ ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿಗೆ ಇಂದು ಆಗಮಿಸಿರುವ ಮಂಗಳೂರು ಪಶ್ಚಿಮ ವಲಯ ಐಜಿಪಿ ಅರುಣ್ ಚಕ್ರವರ್ತಿ ಶೀರೂರು ಮಠಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಇಂದು ಬೆಳಗ್ಗೆ ಎಸ್ಪಿ ಕಚೇರಿಯಲ್ಲಿ ತನಿಖಾ ತಂಡದ ಸಭೆ ನಡೆಸಿದರು. ಈ ಸಂದರ್ಭ ಉಡುಪಿ ಜಿಲ್ಲಾ ಎಸ್ಪಿ ಲಕ್ಷಣ್ ನಿಂಬರಗಿ, ತನಿಖಾ ತಂಡಗಳ ನೇತೃತ್ವ ವಹಿಸಿರುವ ಪೊಲೀಸ್ ನಿರೀಕ್ಷಕರಾದ ಶ್ರೀಕಾಂತ್, ಸಂಪತ್ ಕುಮಾರ್, ಬೆಳ್ಳಿಯಪ್ಪ ಹಾಗು ಇತರ ಅಧಿಕಾರಿಗಳು ಹಾಜರಿದ್ದರು.

ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಐಜಿಪಿ ಶೀರೂರು ಶ್ರೀಗಳ ನಿಗೂಢ ಸಾವಿನ ಪ್ರಕರಣಕ್ಕೆ ಕುರಿತಂತೆ ಈವರೆಗೆ ಯಾರನ್ನು ಬಂಧಿಸಿಲ್ಲ,  ಪ್ರಕರಣದ ಕುರಿತಂತೆ ತನಿಖೆ ನಡೆಯುತ್ತಿದೆ. ಸಿಸಿಟಿವಿ ದೃಶ್ಯಾವಳಿ ಸೇರಿದಂತೆ ಎಲ್ಲವೂ ತನಿಖಾ ಹಂತದಲ್ಲಿದೆ. ತನಿಖೆ ಯಾವ ಹಂತದಲ್ಲಿದೆ ಎನ್ನುವುದನ್ನು ಪರಿಶೀಲನೆ ಮಾಡಲು ಬಂದಿದ್ದೇನೆ. ಮರಣೋತ್ತರ ಪರೀಕ್ಷೆಯ ವರದಿ‌ ಹಾಗೂ ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ಬಂದ ಬಳಿಕ ಈ ಬಗ್ಗೆ ಮಾಹಿತಿ ನೀಡಲಾಗುವುದು ಎಂದು ಪಶ್ಚಿಮ ವಲಯದ ಪೊಲೀಸ್ ಮಹಾ ನಿರೀಕ್ಷಕ ಅರುಣ್ ಚಕ್ರವರ್ತಿ ಸ್ಪಷ್ಟಪಡಿಸಿದ್ದಾರೆ. 

ತನಿಖಾ ತಂಡದೊಂದಿಗೆ ಐಜಿಪಿ ಅವರು ಹಿರಿಯಡ್ಕ ಸಮೀಪ ಇರುವ ಶೀರೂರು ಮೂಲ ಮಠಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News