×
Ad

ಸರಕಾರಿ ಶಾಲಾ-ಕಾಲೇಜುಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಉನ್ನತಮಟ್ಟದ ಸಭೆ

Update: 2018-07-24 19:53 IST

ಬೆಂಗಳೂರು, ಜು.24: ರಾಜ್ಯದಲ್ಲಿ ಸರಕಾರಿ ಶಾಲೆ, ಕಾಲೇಜುಗಳು, ಇಂಜಿನಿಯರಿಂಗ್, ವೈದ್ಯಕೀಯ ಕಾಲೇಜುಗಳಲ್ಲಿ ಮೂಲಸೌಕರ್ಯ ಕಲ್ಪಿಸಲು ತುರ್ತಾಗಿ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೂಚಿಸಿದರು.

ಮಂಗಳವಾರ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಉನ್ನತಮಟ್ಟದ ಸಭೆಯಲ್ಲಿ ಮಾತನಾಡಿದ ಅವರು, ಸರಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ತರಗತಿ ಕೊಠಡಿಗಳು, ಪ್ರಯೋಗಾಲಯ, ಶೌಚಾಲಯ, ಗ್ರಂಥಾಲಯ ಮತ್ತಿತರ ಸೌಲಭ್ಯಗಳನ್ನು ಒದಗಿಸಲು ಹಣಕಾಸಿನ ಕೊರತೆಯಾಗದಂತೆ ಕ್ರಮ ವಹಿಸಲಾಗುವುದು ಎಂದರು.

ತಾವು ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಮಂಜೂರು ಮಾಡಿದ್ದ ಶಾಲೆ- ಕಾಲೇಜುಗಳಿಗೆ ಮೂಲ ಸೌಕರ್ಯದ ಕೊರತೆ ಎದುರಿಸುತ್ತಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಮುಖ್ಯಮಂತ್ರಿ, ಕೂಡಲೇ ಈ ಶಾಲಾ, ಕಾಲೇಜುಗಳಿಗೆ ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸುವಂತೆ ಸೂಚಿಸಿದರು.
ಶಾಲೆಗಳಿಗೆ ಮೂಲಸೌಕರ್ಯ ಒದಗಿಸಲು ಹಿರಿಯ ವಿದ್ಯಾರ್ಥಿಗಳ ನೆರವು ಪಡೆಯಲು ಪೂರಕವಾಗಿ ಹಿರಿಯ ವಿದ್ಯಾರ್ಥಿಗಳ ಸಂಘಗಳನ್ನು ಸ್ಥಾಪಿಸಲು ತೀರ್ಮಾನಿಸಲಾಯಿತು.

ಗುಣಮಟ್ಟದ ಬೈಸಿಕಲ್ ವಿತರಣೆ: ಶಾಲಾ ಮಕ್ಕಳಿಗೆ ಬೈಸಿಕಲ್ ವಿತರಿಸುವಾಗ ಉತ್ತಮ ಗುಣಮಟ್ಟದ ಬೈಸಿಕಲ್ ಒದಗಿಸಬೇಕು. ಹಿಂದಿನ ವರ್ಷಗಳಲ್ಲಿ ವಿತರಿಸಲಾಗಿರುವ ಬೈಸಿಕಲ್‌ಗಳ ಬಗ್ಗೆ ಪೋಷಕರು ಅತೃಪ್ತಿ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚಿಸಿದರು.

ಇದೇ ಸಂದರ್ಭದಲ್ಲಿ ಶಾಲೆಗಳ ಕಟ್ಟಡಗಳ ನಿರ್ವಹಣೆಗಳ ಕುರಿತು ವಿವರವಾದ ಮಾಹಿತಿಯೊಂದಿಗೆ ದುರಸ್ತಿಯಾಗಬೇಕಾದ ಹಾಗೂ ಹೆಚ್ಚುವರಿಯಾಗಿ ನಿರ್ಮಿಸ ಬೇಕಾದ ಶಾಲಾ ಕೊಠಡಿಗಳ ಕುರಿತು ವಿವರವಾದ ಮಾಹಿತಿ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಮುಖ್ಯಮಂತ್ರಿ, ಕಾರ್ಪೊರೇಟ್ ಸಂಸ್ಥೆಗಳಿಂದ ಈ ಉದ್ದೇಶಕ್ಕೆ ನೆರವು ಪಡೆಯಲು ಪ್ರಯತ್ನಿಸುವುದಾಗಿ ತಿಳಿಸಿದರು.

ಸಭೆಗೆ ಮಾಹಿತಿ ನೀಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎನ್.ಮಹೇಶ್, 2018-19 ನೇ ಸಾಲಿಗೆ 5.14 ಲಕ್ಷ ಬೈಸಿಕಲ್‌ಗಳನ್ನು ಅಂದಾಜು 184 ಕೋಟಿ ರೂ.ವೆಚ್ಚದಲ್ಲಿ ಖರೀದಿಸಲಾಗುತ್ತಿದ್ದು, ಮೂರು ಹಂತಗಳಲ್ಲಿ ಗುಣಮಟ್ಟದ ಪರಿಶೀಲನೆ ನಡೆಸಲಾಗುವುದು ಎಂದರು.

ಈ ಸಭೆಯಲ್ಲಿ ಜಲಸಂಪನ್ಮೂಲ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್, ಲೋಕೋಪಯೋಗಿ ಸಚಿವ ಎಚ್.ಡಿ ರೇವಣ್ಣ, ಸಹಕಾರ ಸಚಿವ ಬಂಡೆಪ್ಪ ಕಾಶೆಂಪೂರ್, ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News