ಗೌರಿ ಲಂಕೇಶ್ ಹತ್ಯೆ ಪ್ರಕರಣ: ಆರೋಪಿಗಳು ಸಲ್ಲಿಸಿರುವ ಅರ್ಜಿ ಮಾರ್ಪಾಡುಗೊಳಿಸಲು ಹೈಕೋರ್ಟ್ ಸೂಚನೆ

Update: 2018-07-24 16:50 GMT

ಬೆಂಗಳೂರು, ಜು.24: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಸಂಬಂಧ ಅಧೀನ ನ್ಯಾಯಾಲಯದಲ್ಲಿ ಸಮರ್ಪಕ ವಿಚಾರಣೆ ನಡೆಯುತ್ತಿಲ್ಲ ಎಂದು ಆಕ್ಷೇಪಿಸಿ ಪ್ರಕರಣದ ಆರೋಪಿಗಳು ಸಲ್ಲಿಸಿರುವ ಅರ್ಜಿ ಮಾರ್ಪಾಡುಗೊಳಿಸುವಂತೆ ಹೈಕೋರ್ಟ್ ಮಂಗಳವಾರ ಸೂಚಿಸಿದೆ.

ಪ್ರಕರಣದ ವಿಚಾರಣೆಗೆ ವಕೀಲರನ್ನು ನೇಮಿಸಿಕೊಳ್ಳಲು ಅವಕಾಶ ನೀಡುವ ವಿಚಾರದಲ್ಲಿ ಅಧೀನ ನ್ಯಾಯಾಲಯಗಳ ನ್ಯಾಯಾಧೀಶರು ನಿರ್ಲಕ್ಷ್ಯ ತೋರಿದ್ದಾರೆಂದು ಆಕ್ಷೇಪ ವ್ಯಕ್ತಪಡಿಸಿ ಆರೋಪಿಗಳಾದ ಸುಜಿತ್ ಕುಮಾರ್, ಮನೋಹರ ಯಡವೆ, ಅಮೋಲ್ ಕಾಳೆ ಮತ್ತು ರಾಮಚಂದ್ರ ದೇಗ್ವೇಕರ್ ಸಲ್ಲಿಸಿರುವ ತಕರಾರು ಅರ್ಜಿ ವಿಚಾರಣೆ ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರಿದ್ದ ಪೀಠದಲ್ಲಿ ನಡೆಯಿತು.

ಈ ವೇಳೆ ನ್ಯಾಯಪೀಠ, ಪ್ರಕರಣದ ಸಂಬಂಧ ಅಧೀನ ನ್ಯಾಯಾಲಯ ನೀಡಿರುವ ಆದೇಶಗಳ ಬಗ್ಗೆ ಯಾವುದೇ ಆಕ್ಷೇಪಣೆ ಇದ್ದಲ್ಲಿ, ಅವುಗಳನ್ನು ಮೇಲ್ಮನವಿಯಲ್ಲಿ ಅದನ್ನು ಪ್ರಶ್ನಿಸಬಹುದಲ್ಲವೇ? ನ್ಯಾಯಾಧೀಶರನ್ನೇ ಪ್ರತಿವಾದಿಯನ್ನಾಗಿಸುವ ಅಗತ್ಯವೇನಿತ್ತು ಎಂದು ಅರ್ಜಿದಾರರ ಪರ ವಕೀಲರನ್ನು ಪ್ರಶ್ನಿಸಿತಲ್ಲದೆ, ಅಧೀನ ನ್ಯಾಯಾಲಯಗಳ ನ್ಯಾಯಾಧೀಶರ ಹೆಸರುಗಳನ್ನು ತೆಗೆದು ಸೂಕ್ತ ವ್ಯಕ್ತಿ ಅಥವಾ ಇಲಾಖೆಗಳನ್ನು ಪ್ರತಿವಾದಿಯನ್ನಾಗಿಸುವಂತೆ ಸಲಹೆ ನೀಡಿತು.

ಇದಕ್ಕೆ ಸಮ್ಮತಿಸಿದ ಅರ್ಜಿದಾರರ ಪರ ವಕೀಲರ ಎನ್.ಪಿ.ಅಮೃತೇಶ್, ಅರ್ಜಿಯನ್ನು ಮಾರ್ಪಾಡುಗೊಳಿಸಿ ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವಾಲಯ, ರಾಜ್ಯ ಗೃಹ ಇಲಾಖೆ ಹಾಗೂ ರಾಜ್ಯ ಪೊಲೀಸ್ ಮಹಾನಿರ್ದೇಶಕರನ್ನು ಅರ್ಜಿಯಲ್ಲಿ ಪ್ರತಿವಾದಿಯನ್ನಾಗಿಸಲಾಗುವುದು. ಅದಕ್ಕಾಗಿ ಕಾಲಾವಕಾಶ ನೀಡುವಂತೆ ಮನವಿ ಮಾಡಿದರು.

ಈ ಮನವಿಯನ್ನು ಮಾನ್ಯ ಮಾಡಿದ ನ್ಯಾಯಪೀಠ, ಅರ್ಜಿ ಮಾರ್ಪಾಡುಗೊಳಿಸಲು ಕಾಲಾವಕಾಶ ನೀಡಿ, ವಿಚಾರಣೆಯನ್ನು ಆ.6ಕ್ಕೆ ಮುಂದೂಡಿತು. ಗೌರಿ ಹತ್ಯೆ ಪ್ರಕರಣದ ಆರೋಪಿಗಳು, ನಗರದ 5ನೆ ಎಸಿಎಂಎಂ ನ್ಯಾಯಾಲಯದ ಮ್ಯಾಜಿಸ್ಟ್ರೇಟ್ ಸೋಮಶೇಖರ್, 3ನೆ ಎಸಿಎಂಎಂ ನ್ಯಾಯಾಲಯದ ಮ್ಯಾಜಿಸ್ಟ್ರೇಟ್ ವಿ.ಪ್ರಕಾಶ್, 1ನೆ ಎಸಿಎಂಎಂ ನ್ಯಾಯಾಲಯದ ಮ್ಯಾಜಿಸ್ಟ್ರೇಟ್ ಜಗದೀಶ್, 44ನೆ ಎಸಿಎಂಎಂ ನ್ಯಾಯಾಲಯದ ಮ್ಯಾಜಿಸ್ಟ್ರೇಟ್ ಮಾಲಾ ಅವರನ್ನು ಪ್ರತಿವಾದಿಗಳನ್ನಾಗಿಸಿ ಅರ್ಜಿ ಸಲ್ಲಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News