ವೈದ್ಯರಿಗೆ ಒಂದುವರ್ಷ ಗ್ರಾಮೀಣ ಸೇವೆ ಕಡ್ಡಾಯ: ಎಚ್.ಡಿ.ಕುಮಾರಸ್ವಾಮಿ

Update: 2018-07-25 13:35 GMT

ಬೆಂಗಳೂರು, ಜು.25: ಸರಕಾರಿ ಕೋಟಾದಡಿ ವೈದ್ಯಕೀಯ ಕೋರ್ಸ್ ಮುಗಿಸಿದ ಯುವ ವೈದ್ಯರು ಒಂದು ವರ್ಷ ಕಡ್ಡಾಯವಾಗಿ ಗ್ರಾಮೀಣ ಪ್ರದೇಶದಲ್ಲಿ ಕಾರ್ಯನಿರ್ವಹಿಸುವ ಸಂಬಂಧ ಅಗತ್ಯ ಕಾಯ್ದೆ ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.

ಬುಧವಾರ ನಗರದ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ಅಳವಡಿಸಿರುವ ಸ್ಕಾನಿಂಗ್ ಯಂತ್ರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಯುವ ವೈದ್ಯರು ಗ್ರಾಮೀಣ ಪ್ರದೇಶದಲ್ಲಿ ವೈದ್ಯವೃತ್ತಿ ಮಾಡಬೇಕು. ಆ ಮೂಲಕ ಗ್ರಾಮೀಣ ಜನತೆಗೆ ಉತ್ತಮ ಆರೋಗ್ಯ ಸೇವೆ ಹಾಗೂ ಯುವ ವೈದ್ಯರಿಗೆ ಗ್ರಾಮೀಣ ಪ್ರದೇಶದ ಬದುಕನ್ನು ಅರ್ಥ ಮಾಡಿಕೊಳ್ಳಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ವೈದ್ಯರನ್ನು ಗೌರವಯುತವಾಗಿ ನಡೆಸಿಕೊಳ್ಳಲು ಹಲವು ಮಾರ್ಪಾಡುಗಳು ಆಗಬೇಕಿದೆ. ವೈದ್ಯರ ಮೇಲೆ ನಡೆಯುವ ಹಲ್ಲೆಯನ್ನು ತಡೆಯಲು ಈಗಾಗಲೆ 2006ರಲ್ಲಿ ತಂದಿರುವ ಕಾಯ್ದೆ ಸಮರ್ಪಕವಾಗಿ ಅನುಷ್ಠಾನಗೊಂಡಿಲ್ಲ. ಈ ಸಂಬಂಧ ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್ ಅವರೊಂದಿಗೆ ಚರ್ಚೆ ನಡೆಸಿ, ಈ ಕಾಯ್ದೆಯನ್ನು ಮತ್ತಷ್ಟು ಬಲಿಷ್ಠಗೊಳಿಸಲಾಗುವುದು ಎಂದು ಅವರು ಹೇಳಿದರು.

ಆಗಸ್ಟ್‌ನಲ್ಲಿ ಸಭೆ: ಆಗಸ್ಟ್‌ನ ಮೊದಲ ವಾರದಲ್ಲಿ ಎಲ್ಲ ಜಿಲ್ಲಾ ಆಸ್ಪತ್ರೆಯ ಮುಖ್ಯ ಆರೋಗ್ಯ ವೈದ್ಯಾಧಿಕಾರಿಗಳು ಹಾಗೂ ಆರೋಗ್ಯ ಸಂಸ್ಥೆಗಳ ನಿರ್ದೇಶಕರ ಸಭೆ ಕರೆದಿದ್ದೇನೆ. ಆಸ್ಪತ್ರೆಗಳ ಸ್ಥಿತಿಗತಿ ಮೂಲ ಸೌಲಭ್ಯಗಳ ಕೊರತೆ ಮತ್ತಿತರ ವಿಷಯಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲಿದ್ದೇನೆಂದು ಅವರು ತಿಳಿಸಿದರು.

ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ಅಂಗಾಂಗ ಕಸಿ ಯೋಜನೆಗೆ 30ಕೋಟಿ ರೂ. ವನ್ನು ಬಜೆಟ್‌ನಲ್ಲಿ ತೆಗೆದಿರಿಸಲಾಗಿದೆ. ಈ ಯೋಜನೆಗೆ ಆಸ್ಪತ್ರೆಯ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಆಶಯದಂತೆ ಮರು ಜನ್ಮ ಅಂಗಾಂಗ ಕಸಿಯೋಜನೆ ಹೆಸರನ್ನು ಇಡಲಾಗುವುದು ಎಂದು ಹೇಳಿದರು.

ಸಂಜಯಗಾಂಧಿ ಆಸ್ಪತ್ರೆ, ಜಯದೇವ, ಕಿದ್ವಾಯಿ, ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ಆಸ್ಪತ್ರೆಗೆ ಎಲ್ಲ ರೀತಿಯ ಆರ್ಥಿಕ ಶಕ್ತಿಯನ್ನು ತುಂಬುವುದಾಗಿ ಅವರು ಭರವಸೆ ನೀಡಿದರು. ಕಾರ್ಯಕ್ರಮದಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್, ಶಾಸಕಿ ಸೌಮ್ಯಾರೆಡ್ಡಿ, ಪಾಲಿಕೆ ಸದಸ್ಯ ಅಹ್ಮದ್ ರಿಝ್ವಿನ್, ಆರ್.ಗೋವಿಂದನಾಯ್ಡು, ವೈದ್ಯಕೀಯ ಶಿಕ್ಷಣ ಇಲಾಖೆಯ ಸರಕಾರದ ಅಪರ ಕಾರ್ಯದರ್ಶಿ ವಿ.ಮಂಜುಳಾ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News