ಬಿಜೆಪಿ ಶಾಸಕ ಎಸ್.ವಿ.ರಾಮಚಂದ್ರ ಸೇರಿ 11 ಮಂದಿ ಅಭ್ಯರ್ಥಿಗಳಿಗೆ ಹೈಕೋರ್ಟ್ ನೋಟಿಸ್

Update: 2018-07-25 15:41 GMT

ಬೆಂಗಳೂರು, ಜು.25: ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಸಿ ಚುನಾವಣೆಯಲ್ಲಿ ಗೆದ್ದಿದ್ದಾರೆಂದು ಜಗಳೂರು ಶಾಸಕ ಎಸ್.ವಿ.ರಾಮಚಂದ್ರ ಹಾಗೂ ಚುನಾವಣೆಯಲ್ಲಿ ಸ್ಪರ್ಧಿಸಿದ್ದ 11 ಮಂದಿ ಅಭ್ಯರ್ಥಿಗಳಿಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ. 

ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಎಚ್.ವಿ.ರಾಜೇಶ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠವು ಬಿಜೆಪಿ ಶಾಸಕ ಎಸ್.ವಿ.ರಾಮಚಂದ್ರ ಹಾಗೂ ಚುನಾವಣೆಯಲ್ಲಿ ಸ್ಪರ್ಧಿಸಿದ್ದ 11 ಮಂದಿ ಅಭ್ಯರ್ಥಿಗಳಿಗೆ ನೋಟಿಸ್ ಜಾರಿಗೊಳಿಸಿತು. ಅರ್ಜಿದಾರರ ಪರ ವಾದಿಸಿದ ವಕೀಲರು, ಜಗಳೂರು ವಿಧಾನಸಭಾ ಕ್ಷೇತ್ರ ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿದೆ. ಶಾಸಕ ಎಸ್.ವಿ.ರಾಮಚಂದ್ರ ಅವರು ಹಿಂದುಳಿದ ವರ್ಗಗಳ ಮರಾಠ ಸಮುದಾಯಕ್ಕೆ ಸೇರಿದ್ದಾರೆ. ಹೀಗಾಗಿ, ಜಗಳೂರು ವಿಧಾನಸಭಾ ಕ್ಷೇತ್ರದಿಂದ ಗೆದ್ದಿರುವ ಎಸ್.ವಿ.ರಾಮಚಂದ್ರ ಅವರ ಶಾಸಕ ಸ್ಥಾನವನ್ನು ರದ್ದುಗೊಳಿಸಬೇಕೆಂದು ಪೀಠಕ್ಕೆ ತಿಳಿಸಿದರು.

ಅಲ್ಲದೆ, ಎರಡನೆ ಸ್ಥಾನದಲ್ಲಿ ಹೆಚ್ಚು ಮತ ಪಡೆದಿರುವ ಅಭ್ಯರ್ಥಿಯನ್ನು ಶಾಸಕ ಎಂದು ಘೋಷಿಸಬೇಕೆಂದು ಪೀಠಕ್ಕೆ ಮನವಿ ಮಾಡಿದರು. ವಕೀಲರ ವಾದ ಆಲಿಸಿದ ನ್ಯಾಯಪೀಠವು ಅರ್ಜಿ ವಿಚಾರಣೆಯನ್ನು ಆ.20ಕ್ಕೆ ಮುಂದೂಡಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News