×
Ad

ಆರೆಸ್ಸೆಸ್ ಕಾರ್ಯಕರ್ತ ರುದ್ರೇಶ್ ಕೊಲೆ ಪ್ರಕರಣ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್

Update: 2018-07-27 20:43 IST

ಬೆಂಗಳೂರು, ಜು.27: ಆರೆಸ್ಸೆಸ್ಸ್ ಕಾರ್ಯಕರ್ತ ರುದ್ರೇಶ್ ಕೊಲೆ ಪ್ರಕರಣದಲ್ಲಿ ತನ್ನ ವಿರುದ್ಧದ ಆರೋಪಗಳನ್ನು ಕೈಬಿಡುವಂತೆ ಪ್ರಕರಣದ 5ನೆ ಆರೋಪಿ ಅಸೀಮ್ ಶರೀಫ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಪೂರ್ಣಗೊಳಿಸಿದೆ.

ಪ್ರಕರಣದ ಸಂಬಂಧ ಆರೋಪಗಳನ್ನು ಕೈಬಿಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ವಜಾಗೊಳಿಸಿದ್ದ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ವಿಶೇಷ ನ್ಯಾಯಾಲಯದ ಆದೇಶ ಪ್ರಶ್ನಿಸಿ ಅಸೀಮ್ ಶರೀಫ್ ಸಲ್ಲಿಸಿದ್ದ ಅರ್ಜಿಯ ಸಂಬಂಧ ವಾದ-ಪ್ರತಿವಾದಗಳನ್ನು ಆಲಿಸಿ ವಿಚಾರಣೆ ಪೂರ್ಣಗೊಳಿಸಿದ ನ್ಯಾಯಮೂರ್ತಿ ಎನ್.ಕೆ. ಸುಧೀಂದ್ರರಾವ್ ಅವರಿದ್ದ ಪೀಠ, ತೀರ್ಪು ಕಾಯ್ದಿರಿಸಿತು.

ವಿಚಾರಣೆ ವೇಳೆ ವಾದ ಮಂಡಿಸಿದ್ದ ಆರೋಪಿಯ ಪರ ವಕೀಲರು, ಕೊಲೆ ಪ್ರಕರಣಕ್ಕೂ ಅರ್ಜಿದಾರರಿಗೂ ಯಾವುದೇ ಸಂಬಂಧವಿಲ್ಲ. ಘಟನೆ ನಡೆದ ಸ್ಥಳದಲ್ಲಿ ಆರೋಪಿ ಇರಲಿಲ್ಲ. ಅರ್ಜಿದಾರರಿಗೆ ಪಿಎಫ್ಐ ಸಂಘಟನೆಯ ನಂಟಿದೆ ಎಂದಾದರೂ, ಅದು ನಿಷೇಧಿತ ಸಂಘಟನೆಯಲ್ಲ. ಇದೊಂದು ರಾಜಕೀಯ ಪ್ರೇರಿತ ಪ್ರಕರಣವಾಗಿದ್ದು, ಅರ್ಜಿದಾರರನ್ನು ಅನಗತ್ಯವಾಗಿ ಸಿಲುಕಿಸಲಾಗಿದ್ದು, ಅವರ ವಿರುದ್ಧದ ಆರೋಪಗಳನ್ನು ಕೈಬಿಡಬೇಕು ಎಂದು ಮನವಿ ಮಾಡಿದರು.

ಎನ್‌ಐಎ ಪರ ವಕೀಲ ಪಿ. ಪ್ರಸನ್ನ ಕುಮಾರ್ ವಾದ ಮಂಡಿಸಿ, ಆರೋಪಿ ಸಲ್ಲಿಸಿದ್ದ ಅರ್ಜಿಯನ್ನು ಈಗಾಗಲೇ ಎನ್‌ಐಎ ವಿಶೇಷ ನ್ಯಾಯಾಲಯ ವಜಾಗೊಳಿಸಿದ್ದು, ಎನ್‌ಐಎ ಕಾಯ್ದೆಯ ಸೆಕ್ಷನ್ 21ರ ಪ್ರಕಾರ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಲು ಅವಕಾಶವಿಲ್ಲ. ಪ್ರಕರಣದ ಇತರ ಆರೋಪಿಗಳು ಘಟನೆ ನಡೆಯುವ ಮುನ್ನ ಹಾಗೂ ಘಟನೆ ನಡೆದ ಬಳಿಕ ಅರ್ಜಿದಾರನ ಜತೆ ಸಂಪರ್ಕದಲ್ಲಿದ್ದಾರೆ ಎಂದು ನ್ಯಾಯಪೀಠಕ್ಕೆ ವಿವರಿಸಿದರು.

ಅಲ್ಲದೆ, ಆರೋಪಿಗೆ ನಿಷೇಧಿತ ಇಂಡಿಯನ್ ಮುಜಾಹಿದೀನ್ ಮತ್ತು ಸಿಮಿ ಸಂಘಟನೆಯ ಸದಸ್ಯನಾಗಿರುವ ಸೈಯ್ಯದ್ ಇಸ್ಮಾಯಿಲ್ ಅಫಾಕ್ ಜತೆ ಸಂಪರ್ಕವಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಅರ್ಜಿದಾರನು ಪ್ರಕರಣದ ಇತರ ಆರೋಪಿಗಳೊಡನೆ ಸೇರಿ ಜಯಮಹಲ್‌ನ ಅಕ್ಸಾ ಹಾಗೂ ಶಿವಾಜಿನಗರದ ಛೋಟಾ ಚಾರ್ಮಿನಾರ್ ಮಸೀದಿಗಳಲ್ಲಿ ಸಂಚು ರೂಪಿಸಿದ್ದಾನೆ. ಇದರಿಂದ ಪ್ರಕರಣದಲ್ಲಿ ಅರ್ಜಿದಾರನ ಪಾತ್ರವೂ ಇದೆ ಎಂಬುದು ಸಾಬೀತಾಗಿದೆ. ಹೀಗಾಗಿ ಅವನ ಅರ್ಜಿ ವಜಾಗೊಳಿಸುವಂತೆ ಮನವಿ ಮಾಡಿದರು. ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ವಿಚಾರಣೆ ಪೂರ್ಣಗೊಳಿಸಿ ಆ.1ರಂದು ತೀರ್ಪು ಪ್ರಕಟಿಸುವುದಾಗಿ ತಿಳಿಸಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News