ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಶುಲ್ಕ ನಿಯಂತ್ರಣ ಸಮಿತಿಗೆ ಹೈಕೋರ್ಟ್ ನೋಟಿಸ್

Update: 2018-07-27 15:38 GMT

ಬೆಂಗಳೂರು, ಜು.27: ವೃತ್ತಿಪರ ಕೋರ್ಸ್‌ಗಳ ಪ್ರವೇಶ ಶುಲ್ಕದಲ್ಲಿ ಶೇ.8ರಷ್ಟು ಹೆಚ್ಚಳ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ರಿಟ್ ಅರ್ಜಿಗೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆಯ ಅಧೀನ ಕಾರ್ಯದರ್ಶಿ ಮತ್ತು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಶುಲ್ಕ ನಿಯಂತ್ರಣ ಸಮಿತಿ ಅಧ್ಯಕ್ಷರಿಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.

ಈ ಕುರಿತಂತೆ ಜೆಎಸ್‌ಎಸ್ ಡೀಮ್ಡ್ ವಿಶ್ವವಿದ್ಯಾಲಯ ಹಾಗೂ ಜೆಎಸ್‌ಎಸ್ ವೈದ್ಯಕೀಯ ಕಾಲೇಜಿನ ರಿಜಿಸ್ಟ್ರಾರ್ ಬಿ.ಮಂಜುನಾಥ್ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎ.ಎಸ್.ಬೋಪಣ್ಣ ಹಾಗೂ ನ್ಯಾಯಮೂರ್ತಿ ಮೊಹಮದ್ ನವಾಜ್ ಅವರಿದ್ದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.

ಈಗಾಗಲೇ 2018-19ನೆ ಸಾಲಿನ ಪ್ರವೇಶಕ್ಕಾಗಿ ಪ್ರಥಮ ಸುತ್ತಿನ ಕೌನ್ಸೆಲಿಂಗ್ ಮುಗಿದಿದೆ. ಎರಡನೆ ಸುತ್ತಿನ ಕೌನ್ಸೆಲಿಂಗ್‌ಗೆ ಕಾಯಲಾಗುತ್ತಿದೆ. ಪ್ರವೇಶಕ್ಕೆ ಅಂತಿಮ ದಿನ ಆಗಸ್ಟ್ 8 ಎಂದು ನಿಗದಿ ಮಾಡಲಾಗಿದೆ. ಈ ಹಂತದಲ್ಲಿ ಶುಲ್ಕ ಹೆಚ್ಚಳ ಕುರಿತಂತೆ ನಿಯಂತ್ರಣ ಸಮಿತಿ ಕಳೆದ ತಿಂಗಳ 27ರಂದು ನೀಡಿರುವ ನೋಟಿಸ್ ಕಾನೂನು ಬಾಹಿರವಾಗಿದೆ ಎಂಬುದು ಅರ್ಜಿದಾರರ ಆಕ್ಷೇಪ.

ಡೀಮ್ಡ್ ವಿವಿಗಳು ಸರಕಾರದಿಂದ ಯಾವುದೇ ವಂತಿಗೆ ಅಥವಾ ಅನುದಾನ ಪಡೆಯುವುದಿಲ್ಲ. ಹೀಗಾಗಿ ಇವುಗಳಿಗೆ ಕರ್ನಾಟಕ ವೃತ್ತಿಪರ ಶೈಕ್ಷಣಿಕ ಸಂಸ್ಥೆಗಳ (ಶುಲ್ಕ ಮಿತಿ ನಿಗದಿ ಮತ್ತು ನಿಯಂತ್ರಣ) ಕಾಯ್ದೆ ಅನ್ವಯ ಆಗುವುದಿಲ್ಲ ಎಂದು ಅರ್ಜಿದಾರರು ಪ್ರತಿಪಾದಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News