ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಬೇಡಿಕೆ ಸರಿಯಲ್ಲ: ಸಂಸದೆ ಶೋಭಾ ಕರಂದ್ಲಾಜೆ

Update: 2018-07-27 17:49 GMT

ಮೈಸೂರು,ಜು.27: ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಆಗಬೇಕೆಂಬ ಬೇಡಿಕೆ ಸರಿಯಲ್ಲ. ಇದರಿಂದ ಎಲ್ಲಾ ಸಮಸ್ಯೆಗಳಿಗೂ ಉತ್ತರ ಸಿಗುವುದಿಲ್ಲ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.

ಎರಡನೇ ಆಷಾಢ ಶುಕ್ರವಾರ ಪ್ರಯುಕ್ತ ಚಾಮುಂಡಿ ಬೆಟ್ಟಕ್ಕೆ ದೇವಿಯ ದರ್ಶನಕ್ಕೆ ಆಗಮಿಸಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೃಷ್ಣ, ಮಹದಾಯಿ, ಕಾವೇರಿ ನದಿ ನೀರಿನ ಹಂಚಿಕೆಯಲ್ಲಿ ನ್ಯಾಯ ಸಿಗಬೇಕಾದರೆ ಇಡೀ ರಾಜ್ಯದ ಜನರು ಒಗ್ಗಟ್ಟಿನಿಂದ ಇರಬೇಕು. ಆಂಧ್ರ, ತೆಲಂಗಾಣ ಪ್ರತ್ಯೇಕ ರಾಜ್ಯಗಳಾದ ನಂತರ ಆ ರಾಜ್ಯಗಳು ದುರ್ಬಲವಾಗಿವೆ. ಆ ರಾಜ್ಯಗಳ ಸ್ಥಿತಿ ನಮಗೆ ಬರಬಾರದು. ಉತ್ತರ ಕರ್ನಾಟಕದ ಜನರ ಜೊತೆ ಬಿಜೆಪಿ ಸದಾಕಾಲ ಇರಲಿದೆ ಎಂದರಲ್ಲದೇ, ಪ್ರತ್ಯೇಕ ರಾಜ್ಯದ ಬೇಡಿಕೆ ಮುಂದಿಟ್ಟುಕೊಂಡು ಬಂದ್ ಗೆ ಕರೆ ನೀಡಿರುವುದಕ್ಕೆ ಕಳವಳ ವ್ಯಕ್ತಪಡಿಸಿದರು.

ರಾಜ್ಯದಲ್ಲಿರುವ ಸಮ್ಮಿಶ್ರ ಸರ್ಕಾರ ಇನ್ನೂ ಟೇಕ್ ಆಫ್ ಆಗಿಯೇ ಇಲ್ಲ. ರೈತರ ಸಾಲಮನ್ನಾ ವಿಚಾರದಲ್ಲಿ ಈಗಲೂ ಗೊಂದಲ ಮುಂದುವರೆದಿದೆ. ಪರಿಣಾಮ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರವೂ 20 ರಿಂದ 30 ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮುಖ್ಯಮಂತ್ರಿ ರಾಜನಿದ್ದಂತೆ. ರಾಜ್ಯದ ಎಲ್ಲಾ ಭಾಗಗಳ ಜನರ ಸಮಸ್ಯೆಗೆ ಮುಖ್ಯಮಂತ್ರಿ ಸ್ಪಂದಿಸಬೇಕು. ಆದರೆ ರಾಜ್ಯದ ಮುಖ್ಯಮಂತ್ರಿ ಕೇವಲ ಮೂರು ನಾಲ್ಕು ಜಿಲ್ಲೆಗಳಿಗೆ ಸೀಮಿತರಾಗಿದ್ದಾರೆ. ಇದೇ ಕಾರಣದಿಂದ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಆಗಬೇಕೆಂಬ ಕೂಗು ಎದ್ದಿದೆ ಎಂದು ಟೀಕಿಸಿದರು.

ಈ ಸಂದರ್ಭ ಬಿಜೆಪಿ ನಗರಾಧ್ಯಕ್ಷ ಡಾ.ಬಿ.ಮಂಜುನಾಥ್, ಶಾಸಕ ಎಲ್.ನಾಗೇಂದ್ರ, ಬಿಜೆಪಿ ಮುಖಂಡರು ಜೊತೆಯಲ್ಲಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News