ಬಾಗೇಪಲ್ಲಿ: ಎಲ್ಲಾ ವಿದ್ಯಾರ್ಥಿಗಳಿಗೂ ಉಚಿತ ಬಸ್ ಪಾಸ್ ನೀಡಲು ಆಗ್ರಹಿಸಿ ಎಸ್‍ಎಫ್‍ಐ ಧರಣಿ

Update: 2018-07-28 11:43 GMT

ಬಾಗೇಪಲ್ಲಿ,ಜು.28: ರಾಜ್ಯದ ಸರ್ಕಾರಿ, ಖಾಸಗಿ ಶಾಲಾ ಕಾಲೇಜುಗಳ ಮಧ್ಯೆ ತಾರತಮ್ಯ ಮಾಡದೆ ಖಾಸಗಿ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೂ ಉಚಿತ ಬಸ್ ಪಾಸ್ ವಿತರಿಸಬೇಕು ಎಂದು ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಷನ್(ಎಸ್‍ಎಫ್‍ಐ) ತಾಲೂಕು ಸಮಿತಿ ನೇತೃತ್ವದಲ್ಲಿ ನೂರಾರು ವಿದ್ಯಾರ್ಥಿಗಳು ಶನಿವಾರ ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. 

ಪಟ್ಟಣದ ವಿಕಾಸ್ ಪಿಯು ಕಾಲೇಜಿನಿಂದ ಹೊರಟ ವಿದ್ಯಾರ್ಥಿಗಳು ಮುಖ್ಯರಸ್ತೆಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ, ಉಚಿತ ಬಸ್ ಪಾಸ್ ವಿತರಣೆಗೆ ತಾರತಮ್ಯ ಮಾಡುತ್ತಿದೆ ಎಂದು ರಾಜ್ಯ ಸರ್ಕಾರದ ಕ್ರಮದ ವಿರುದ್ಧ ಧಿಕ್ಕಾರಗಳನ್ನು ಕೂಗಿದರು. 

ಭಾರತ ವಿದ್ಯಾರ್ಥಿ ಫೆಡರೇಷನ್(ಎಸ್‍ಎಫ್‍ಐ)ನ ರಾಜ್ಯ ಸಮಿತಿ ಸದಸ್ಯ ಹಾಗೂ ತಾಲೂಕು ಸಮಿತಿ ಅಧ್ಯಕ್ಷ ಎ.ಸೋಮಶೇಖರ ಮಾತನಾಡಿ ರಾಜ್ಯ ಸರ್ಕಾರ ಸರ್ಕಾರಿ ಶಾಲಾ ಕಾಲೇಜುಗಳಿಗೆ ಉಚಿತ ಬಸ್ ಪಾಸ್ ವಿತರಿಸಲು ಮುಂದಾಗಿರುವುದು ಎಸ್‍ಎಫ್‍ಐ ಸ್ವಾಗತಿಸುತ್ತಿದೆ. ಆದರೆ ಸರ್ಕಾರಿ ಶಾಲಾ ಕಾಲೇಜುಗಳಂತೆ ಖಾಸಗಿ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಗೆ ಪಾಸ್ ನೀಡಬೇಕು. ಕೆಲ ಪೋಷಕರು ಹಗಲು ರಾತ್ರಿ ಶ್ರಮ ವಹಿಸಿ ದುಡಿದು ಖಾಸಗಿ ಶಾಲಾ ಕಾಲೇಜುಗಳಿಗೆ ವಿದ್ಯಾರ್ಥಿಗಳನ್ನು ಕಳುಹಿಸುತ್ತಿದ್ದಾರೆ. ಕೆಲ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ಶಿಕ್ಷಕರು, ಉಪನ್ಯಾಸಕರು ಸೇರಿದಂತೆ ಮೂಲಭೂತ ಸೌಲಭ್ಯಗಳು ಇಲ್ಲದೇ ವಿದ್ಯಾರ್ಥಿಗಳು ವಂಚಿತರಾಗುತ್ತಿದ್ದಾರೆ. ಇದರಿಂದ ಅನಿವಾರ್ಯವಾಗಿ ಖಾಸಗಿ ಶಾಲಾ-ಕಾಲೇಜುಗಳಿಗೆ ಕಳುಹಿಸುತ್ತಿದ್ದಾರೆ. ಇದರಿಂದ ಸರ್ಕಾರಿ ಶಾಲಾ-ಕಾಲೇಜುಗಳ ಜೊತೆಗೆ ಖಾಸಗಿ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಗೂ ಬಸ್ ಪಾಸ್ ವಿತರಿಸಬೇಕು ಎಂದು ಎಸ್‍ಎಫ್ ಐ ಆಗ್ರಹಿಸುತ್ತದೆ ಎಂದು ತಿಳಿಸಿದರು. 

ಪ್ರತಿಭಟನಾ ಸ್ಥಳಕ್ಕೆ ತಹಶೀಲ್ದಾರ್ ಮಹಮದ್ ಅಸ್ಲಂ ಆಗಮಿಸಿ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಂದ ಮನವಿ ಪತ್ರ ಸ್ವೀಕರಿಸಿದರು. ಪ್ರತಿಭಟನೆಯಲ್ಲಿ ಎಸ್‍ಎಫ್‍ಐ ತಾಲೂಕು ಸಹಕಾರ್ಯದರ್ಶಿ ಸತೀಶ್, ಮುಖಂಡರಾದ ದಿವಾಕರ್, ವೆಂಕಟೇಶ್, ಪವನ್, ಶ್ರೀನಾಥ್, ವೇಣು, ಪ್ರತಾಪ್, ವಿಜಯ್, ಆಸಿಯಾ, ಶಿರಿಷ, ಪವಿತ್ರ, ಶ್ರೀದೇವಿ ನಂದಿನಿ ಮತ್ತಿತರರು ಹಾಜರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News