×
Ad

ರಸ್ತೆ ಸುರಕ್ಷತೆಗೆ ಆದ್ಯತೆ ನೀಡಿ, ಅಪಘಾತ ತಪ್ಪಿಸಿ: ಮೇಯರ್ ಸಂಪತ್‌ ರಾಜ್

Update: 2018-07-28 18:31 IST

ಬೆಂಗಳೂರು, ಜು. 28: ‘ಅತಿ ವೇಗ, ಅಜಾಗರೂಕತೆಯಿಂದ ವಾಹನ ಚಾಲನೆ ಮಾಡುವವರ ಮನಸ್ಥಿತಿ ಬದಲಾವಣೆ ಮಾಡುವುದು ಅಗತ್ಯ. ಆ ನಿಟ್ಟಿನಲ್ಲಿ ಪ್ರತಿಯೊಬ್ಬ ನಾಗರಿಕರೂ ರಸ್ತೆ ಸುರಕ್ಷತೆ ಆದ್ಯತೆ ನೀಡುವ ಮೂಲಕ ರಸ್ತೆ ಅಪಘಾತಗಳನ್ನು ತಪ್ಪಿಸಬೇಕೆಂದು ಬಿಬಿಎಂಪಿ ಮೇಯರ್ ಸಂಪತ್‌ರಾಜ್ ಮನವಿ ಮಾಡಿದ್ದಾರೆ.

ಶನಿವಾರ ಇಲ್ಲಿನ ಕಂಠೀರವ ಕ್ರೀಡಾಂಗಣದಲ್ಲಿ ಸಂಚಾರ ನಿಯಮ ಮತ್ತು ರಸ್ತೆ ಸುರಕ್ಷತೆ ಕಾಪಾಡುವ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಏರ್ಪಡಿಸಿದ್ದ ಬೈಕ್ ರ್ಯಾಲಿಗೆ ಚಾಲನೆ ನೀಡಿ ಮಾತನಾಡಿದ ಅವರು, ಕೇಂದ್ರ-ರಾಜ್ಯ ಸರಕಾರ ರಸ್ತೆ ಸುರಕ್ಷತೆಗೆ ಹಲವು ಉಪಕ್ರಮಗಳನ್ನು ಕೈಗೊಂಡಿವೆ. ಸಾರ್ವಜನಿಕರಿಗೆ ರಸ್ತೆ ಸುರಕ್ಷತೆ ಬಗ್ಗೆ ಅರಿವು ಮೂಡಿಸುತ್ತಿರುವುದು ಸ್ವಾಗತಾರ್ಹ ಎಂದು ಶ್ಲಾಘಿಸಿದರು.

ಬೆಂಗಳೂರಿನಲ್ಲಿ ಪ್ರತಿವರ್ಷ ರಸ್ತೆ ಅಪಘಾತದಿಂದ 4 ಸಾವಿರಕ್ಕೂ ಅಧಿಕ ಮಂದಿ ಸಾವನ್ನಪ್ಪುತ್ತಿದ್ದಾರೆಂದು ವರದಿಗಳು ಹೇಳುತ್ತವೆ. ಬೈಕ್ ಸವಾರರು, ಪಾದಚಾರಿಗಳು ಹೆಚ್ಚು ತೊಂದರೆ ಅನುಭವಿಸುತ್ತಾರೆ. ಅತಿವೇಗದಲ್ಲಿ ವಾಹನ ಚಾಲನೆ ಮಾಡುವುದು, ರಸ್ತೆಗಳ ಅಸುರಕ್ಷತೆ, ಕಳಪೆ ಗುಣಮಟ್ಟ ವಾಹನಗಳಿಂದಾಗಿ ಅಪಘಾತಗಳು ಹೆಚ್ಚು ಸಂಭವಿಸುತ್ತಿವೆ ಎಂದರು.

ಬಿಜಿಎಸ್ ಆಸ್ಪತ್ರೆಯ ಸಿಇಓ ಶೈಲಜಾ ಸುರೇಶ್ ಮಾತನಾಡಿ, ರಸ್ತೆ ಸುರಕ್ಷತೆ ಆಸ್ಪತ್ರೆಯಿಂದ ಹಲವು ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದ್ದೇವೆ. ತುರ್ತು ಸಂದರ್ಭಗಳಲ್ಲಿ ಪ್ರತಿ ಸೆಕೆಂಡ್ ಅತ್ಯಮೂಲ್ಯ. ಆದುದರಿಂದ ರಸ್ತೆ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸುವ ಮೂಲಕ ಅಪಘಾತಗಳನ್ನು ಕಡಿಮೆ ಮಾಡುವ ಸಂಕಲ್ಪ ಮಾಡಿದ್ದೇವೆಂದು ಹೇಳಿದರು. ರ್ಯಾಲಿಯಲ್ಲಿ ಆರೋಗ್ಯ ಸಚಿವ ಶಿವಾನಂದ ಪಾಟೀಲ್ ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News