ಪರಿಶಿಷ್ಟ ಒಳ ಮೀಸಲಾತಿ ಬಗ್ಗೆ ಸಂಸತ್‌ನಲ್ಲಿ ಚರ್ಚೆ ಆಗಲಿ: ಮಾಜಿ ಸಚಿವ ಗೋವಿಂದ ಕಾರಜೋಳ

Update: 2018-07-29 13:09 GMT

ಬೆಂಗಳೂರು, ಜು. 29: ಪರಿಶಿಷ್ಟರ ಒಳ ಮೀಸಲಾತಿ ಕಲ್ಪಿಸುವ ಸಂಬಂಧ ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿನ ಶಿಫಾರಸ್ಸಿನ ಬಗ್ಗೆ ಲೋಕಸಭೆಯಲ್ಲಿ ಚರ್ಚೆ ಆಗಬೇಕು ಎಂದು ಬಿಜೆಪಿ ಹಿರಿಯ ಮುಖಂಡ ಹಾಗೂ ಮಾಜಿ ಸಚಿವ ಗೋವಿಂದ ಎಂ.ಕಾರಜೋಳ ಆಗ್ರಹಿಸಿದ್ದಾರೆ.

ರವಿವಾರ ನಗರದ ಅಂಬೇಡ್ಕರ್ ಭವನದಲ್ಲಿ ಆದಿಜಾಂಬವ ಜಾಗೃತಿ ವೇದಿಕೆಯಿಂದ ಏರ್ಪಡಿಸಿದ್ದ ಸಮುದಾಯದ ನೂತನ ಶಾಸಕರಿಗೆ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಸಂವಿಧಾನ ಪರಿಶಿಷ್ಟರಿಗೆ ಕಲ್ಪಿಸಿರುವ ಸೌಲಭ್ಯಗಳಿಗಾಗಿ ಹೋರಾಟ ಅಗತ್ಯ ಎಂದರು.

ಈ ಹಿಂದೆ ಬಿಜೆಪಿ ಸರಕಾರ ಆಡಳಿತಾವಧಿಯಲ್ಲಿ ಪರಿಶಿಷ್ಟರಲ್ಲಿ ಅತ್ಯಂತ ಹಿಂದುಳಿದಿರುವ ಸಮುದಾಯಗಳಿಗೆ ಒಳ ಮೀಸಲಾತಿ ಕಲ್ಪಿಸಬೇಕೆಂದು ಕೋರಿ ಕೇಂದ್ರಕ್ಕೆ ಶಿಫಾರಸ್ಸು ಮಾಡಲಾಗಿತ್ತು. ಈ ವಿಷಯವನ್ನು ಸಂಸತ್ತಿನಲ್ಲಿ ಪ್ರಸ್ತಾಪಿಸಿದರೆ ಹೋರಾಟಕ್ಕೆ ಬಲ ಬರುತ್ತದೆ ಎಂದು ಅವರು ಪ್ರತಿಪಾದಿಸಿದರು.

ಸಮುದಾಯದ ಜನರಿಗೆ ದೊರೆಯಬೇಕಾದ ಸೌಲಭ್ಯಗಳ ಕುರಿತು ಹೋರಾಟ ಮಾಡುವವರನ್ನು ಅಪರಾಧಿ ಸ್ಥಾನಗಳಲ್ಲಿ ನಿಲ್ಲಿಸುತ್ತಿದ್ದಾರೆ. ಹೆಚ್ಚಿನ ಮೀಸಲಾತಿ ಸೌಲಭ್ಯ ಪಡೆದುಕೊಂಡಿರುವರು ಇಂತಹ ಅಪಪ್ರಚಾರ ಮಾಡುತ್ತಿದ್ದು, ಇದಕ್ಕೆ ಕಿವಿಗೊಡದೆ ನಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತಬೇಕು ಎಂದು ಸಲಹೆ ನೀಡಿದರು.

ಕೇಂದ್ರದ ಮಾಜಿ ಸಚಿವ ಕೆ.ಎಚ್.ಮುನಿಯಪ್ಪ ಮಾತನಾಡಿ, ವಿಧಾನಸಭೆಯಲ್ಲಿ ಸಮುದಾಯದ ಅಭಿವೃದ್ಧಿಗಾಗಿ ಪಕ್ಷಾತೀತವಾಗಿ ಧ್ವನಿಗೂಡಿಸಬೇಕು. ನಿಮ್ಮ ಕ್ಷೇತ್ರದಲ್ಲಿ ಜನರ ಮೆಚ್ಚುಗೆ ಗಳಿಸುವಂತಹ ಅಭಿವೃದ್ಧಿ ಕಾರ್ಯಗಳತ್ತ ಗಮನಹರಿಸಿ. ಈಗಾಗಲೇ ಆದಿ ಜಾಂಬವ ಅಭಿವೃದ್ಧಿ ನಿಗಮ ಸ್ಥಾಪನೆಯ ರೂಪುರೇಷೆ ಸಿದ್ದವಾಗಿದೆ ಎಂದು ನುಡಿದರು.

ಸಮಾರಂಭದಲ್ಲಿ ಮಾದಿಗ ದಂಡೋರ ರಾಷ್ಟ್ರೀಯಾಧ್ಯಕ್ಷ ಮಂದಕೃಷ್ಣ ಮಾದಿಗ, ಮಾಜಿ ಸಚಿವ ಎಚ್.ಆಂಜನೇಯ, ಆದಿಜಾಂಬವ ಶಾಖಾ ಮಠದ ಷಡಕ್ಷರ ಸ್ವಾಮಿ, ಶಾಸಕರಾದ ದುರ್ಯೋದನ ಐಹೊಳೆ, ಬಸವರಾಜ್ ಮಟ್ಟಿಮೋಡ, ರೂಪ ಶಶಿಧರ್ ಅವರನ್ನು ಸನ್ಮಾನಿಸಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News