ತುಮಕೂರು: ನಾಮದ ಚಿಲುಮೆ ಜಿಂಕೆ ವನ, ಸಸ್ಯೋಧ್ಯಾನಕ್ಕೆ ಶಾಸಕ ಗೌರಿಶಂಕರ್ ಭೇಟಿ

Update: 2018-07-29 13:29 GMT

ತುಮಕೂರು,ಜು.29: ಗ್ರಾಮಾಂತರ ಕ್ಷೇತ್ರ ವ್ಯಾಪ್ತಿಯಲ್ಲಿರುವ ನಾಮದ ಚಿಲುಮೆಯ ಸಸ್ಯೋಧ್ಯಾನ ಹಾಗೂ ಜಿಂಕೆವನಕ್ಕೆ ಶಾಸಕ ಡಿ.ಸಿ ಗೌರಿಶಂಕರ್, ಪ್ರವಾಸೋಧ್ಯಮ ಇಲಾಖೆ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಾಮದ ಚಿಲುಮೆಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಇರುವ ಬಗ್ಗೆ ಸಾರ್ವಜನಿಕರಿಂದ ಹೆಚ್ಚು ದೂರುಗಳು ಬಂದ ಹಿನ್ನೆಲೆಯಲ್ಲಿ ಪ್ರವಾಸಿ ತಾಣಕ್ಕೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದ ಅವರು, ಇಲ್ಲಿಗೆ ಬರುವ ಪ್ರವಾಸಿಗರಿಗೆ ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಂತೆ ಅಧಿಕಾರಿಗಳಿಗೆ ಆದೇಶಿಸಿದರು.

ನಾಮದ ಚಿಲುಮೆಗೆ ಆಗಮಿಸುವ ಪ್ರವಾಸಿಗರಿಗೆ ಶುದ್ಧ ಕುಡಿಯುವ ನೀರನ್ನು ಕಲ್ಪಿಸುವ ದೃಷ್ಠಿಯಿಂದ ಶುದ್ಧ ಕುಡಿಯುವ ನೀರಿನ ಘಟಕವನ್ನು ಶೀಘ್ರವೇ ನಾಮದ ಚಿಲುಮೆಯಲ್ಲಿ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸ್ಥಳದಲ್ಲೇ ತಾಕೀತು ಮಾಡಿದರಲ್ಲದೇ, ಈ ಭಾಗಕ್ಕೆ ಬರುವ ಪ್ರವಾಸಿಗರು ಶೌಚಾಲಯವಿಲ್ಲದೆ ಪರೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಪ್ರವಾಸಿಗರು ಶಾಸಕರ ಗಮನ ಸೆಳೆದಾಗ ತಕ್ಷಣವೇ ಅಧಿಕಾರಿಗಳೊಂದಿಗೆ ಚರ್ಚಿಸಿ ನಾಮದ ಚಿಲುಮೆಯಲ್ಲಿ ಶೌಚಾಲಯವನ್ನು ನಿರ್ಮಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಆನಂತರ ಜಿಂಕೆವನಕ್ಕೆ ಭೇಟಿ ನೀಡಿದ ಶಾಸಕರು ಅಲ್ಲಿನ ಪರಿಸ್ಥಿತಿ ಅವಲೋಕಿಸಿ ಸೂಕ್ತ ಸಮಯದಲ್ಲಿ ಜಿಂಕೆಗಳಿಗೆ ಆಹಾರ ಮತ್ತು ಕುಡಿಯುವ ನೀರಿನ ಸೌಲಭ್ಯವನ್ನು ಒದಗಿಸುವಂತೆ ಅರಣ್ಯ ಅಧಿಕಾರಿಗಳಿಗೆ ಸೂಚಿಸಿದರು. ನಾಮದ ಚಿಲುಮೆಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಮತ್ತು ಶೌಚಾಲಯವನ್ನು ಶೀಘ್ರವೇ ನಿರ್ಮಿಸಿ ಸಾರ್ವಜನಿಕರು ಬಳಸಲು ಅನುಕೂಲ ಮಾಡಿಕೊಡಬೇಕು. ಇಲ್ಲಿರುವ ಉದ್ಯಾನವನವು ಅಕ್ರಮ ಚಟುವಟಿಕೆಗಳ ತಾಣವಾಗಿದ್ದು ಪೋಲೀಸ್ ಇಲಾಖೆಯ ಅಧಿಕಾರಿಗಳು ಅಕ್ರಮ ಎಸೆಯುವವರ ವಿರುದ್ದ ನಿರ್ದಾಕ್ಷೀಣ್ಯ ಕ್ರಮ ಜರುಗಿಸುವಂತೆ ಸೂಚನೆ ನೀಡಿದರು.

ಇಲ್ಲಿರುವ ಉದ್ಯಾನವನಕ್ಕೆ ವಾರಾಂತ್ಯದ ರಜಾದಿನಗಳಲ್ಲಿ ಆಗಮಿಸುವವರ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಇದನ್ನು ಸುಂದರ ಪ್ರವಾಸಿತಾಣವಾಗಿಸುವ ನಿಟ್ಟಿನಲ್ಲಿ ಹೆಚ್ಚಿನ ಅಭಿವೃದ್ಧಿಪಡಿಸುವ ಯೋಜನೆ ರೂಪಿಸುವಂತೆ ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳಿಗೆ ಸಲಹೆ ನೀಡಿದರು.

ಈ ವೇಳೆ ಜೆಡಿಎಸ್ ಹಿರಿಯ ಉಪಾಧ್ಯಕ್ಷ ಹಾಲನೂರು ಅನಂತ್ ಕುಮಾರ್, ಜೆಡಿಎಸ್ ಯುವ ಘಟಕದ ಅಧ್ಯಕ್ಷ ಹಿರೇಹಳ್ಳಿ ಮಹೇಶ್, ಜೆಡಿಎಸ್ ಮುಖಂಡರಾದ ಹರಳೂರು ರುದ್ರೇಶ್, ಭೈರೇಗೌಡ, ಹಾಗೂ  ಪ್ರವಾಸೋಧ್ಯಮ ಇಲಾಖೆ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು, ಸ್ಥಳಿಯರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News