ಪ್ರತ್ಯೇಕ ರಾಜ್ಯದ ವಿರುದ್ಧ ಸಾಹಿತಿಗಳು ಧ್ವನಿ ಎತ್ತಬೇಕು: ವಾಟಾಳ್ ನಾಗರಾಜ್

Update: 2018-07-30 15:38 GMT

ಬೆಂಗಳೂರು, ಜು.30: ತಮ್ಮ ಸ್ವಾರ್ಥ ರಾಜಕೀಯ ಲಾಭಕ್ಕಾಗಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಮಾಡಬೇಕು ಎಂಬ ಮಾತು ಕೇಳಿಬರುತ್ತಿದ್ದು, ಇದರ ವಿರುದ್ಧ ಸಾಹಿತಿಗಳು ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಧ್ವನಿ ಎತ್ತಬೇಕು ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ನಾಯಕ ವಾಟಾಳ್ ನಾಗರಾಜ್ ಒತ್ತಾಯಿಸಿದ್ದಾರೆ.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಇಬ್ಭಾಗದ ಸಂಬಂಧ ಬಲವಾದ ಮಾತುಗಳು ಕೇಳಿ ಬರುತ್ತಿದ್ದರೂ, ಈ ಬಗ್ಗೆ ಸಾಹಿತಿಗಳು ಮತ್ತು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಮಾತನಾಡದಿರುವುದಕ್ಕೆ ತೀವ್ರ ಬೇಸರ ವ್ಯಕ್ತಪಡಿಸಿದರು.

ಉತ್ತರ ಕರ್ನಾಟಕದ ಕೆಲವು ರಾಜಕೀಯ ನಾಯಕರು ಸ್ವಾರ್ಥ ರಾಜಕೀಯ ಲಾಭಕ್ಕಾಗಿ ಪ್ರತ್ಯೇಕ ರಾಜ್ಯದ ಬಗ್ಗೆ ಮಾತನಾಡುತ್ತಿದ್ದು, ಇದಕ್ಕೆ ಕೆಲವು ಮಠಾಧೀಶರು ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ. ಇದು ಸರಿಯಾದ ಬೆಳವಣಿಗೆಯಲ್ಲ. ರಾಜ್ಯದ ರಾಜಕೀಯ ನಾಯಕರು ಹಾಗೂ ಮಠಾಧೀಶರು ರಾಜ್ಯವನ್ನು ಇಬ್ಭಾಗ ಮಾಡುವ ಕೆಲಸಕ್ಕೆ ಮುಂದಾಗಬಾರದು ಎಂದು ಹೇಳಿದರು.

ಕರ್ನಾಟಕ ಏಕೀಕರಣದ ನಂತರ ಉತ್ತರ ಕರ್ನಾಟಕ್ಕೆ ಅನ್ಯಾಯವಾಗುತ್ತಲೇ ಇದೆ. ಈ ಸಂಬಂಧ ಕೂಡಲೇ ಸ್ಪೀಕರ್ ವಿಶೇಷ ಅಧಿವೇಶನ ಕರೆದು ಚರ್ಚೆ ನಡೆಸಬೇಕು. ಸರಕಾರ ಇದುವರೆಗೂ ಉತ್ತರ ಕರ್ನಾಟದ ಅಭಿವೃದ್ಧಿ ಸಂಬಂಧ ನೀಡಿರುವ ಅನುದಾನದ ಬಗ್ಗೆ ಶ್ವೇತ ಪತ್ರ ಹೊರಡಿಸಬೇಕು ಎಂದು ಆಗ್ರಹಿಸಿ ಜು.31ರಂದು ನಗರದ ಮೈಸೂರು ಬ್ಯಾಂಕ್ ವೃತ್ತದಿಂದ ಕೆಂಪೇಗೌಡ ಬಸ್ ನಿಲ್ದಾಣದ ವರೆಗೆ ವಿನೂತನ ಮೆರವಣಿಗೆ ಹಮ್ಮಿಕೊಂಡಿರುವುದಾಗಿ ಮಾಹಿತಿ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News