ಉ.ಕ ಬಂದ್‌ಗೆ ವಿರೋಧಿಸಿ ಆ.1 ರಂದು ಹೈ-ಕ ಕನ್ನಡಪರ ಒಕ್ಕೂಟ ಧರಣಿ
ಕಲಬುರ್ಗಿ, ಜು.30: ಉತ್ತರ ಕರ್ನಾಟಕ ಬಂದ್ ನೀಡಿರುವುದನ್ನು ವಿರೋಧಿಸಿ ಆ.1ರಂದು ಹೈ-ಕರ್ನಾಟಕ ಕನ್ನಡಪರ ಸಂಘಟನೆಗಳು ಆ.1ರಂದು ನಗರದ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಪ್ರತಿಭಟನಾ ಧರಣಿ ಆಯೋಜಿಸಲಾಗಿದೆ ಎಂದು ಒಕ್ಕೂಟದ ಸಂಚಾಲಕ ಸಚಿನ್ ಫರತಾಬಾದ್ ತಿಳಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈ-ಕರ್ನಾಟಕ ಭಾಗಕ್ಕೆ 371 ಜೆ ಅಡಿಯಲ್ಲಿ ವಿಶೇಷ ಪ್ರಾತಿನಿಧ್ಯ ಸಿಕ್ಕಿದೆ. ಹಾಗೂ ಅಖಂಡ ಕರ್ನಾಟಕ ಒಂದಾಗಿ ಉಳಿದರೆ ಮಾತ್ರ ಭಾಷೆ, ಸಂಸ್ಕೃತಿ ಉಳಿಯಲು ಸಾಧ್ಯ. ಕೇವಲ ಸ್ವಾರ್ಥ ರಾಜಕಾರಣಕ್ಕಾಗಿ ಕೆಲವು ಜನಪ್ರತಿನಿಧಿಗಳು ವಿಭಜಿಸುವ ಮಾತನಾಡುತ್ತಿದ್ದಾರೆ. ಇಂತಹ ಹೇಳಿಕೆಗಳನ್ನು ಉತ್ತರ ಕರ್ನಾಟಕ ಜನತೆ ಒಕ್ಕೊರಲಿನಿಂದ ವಿರೋಧಿಸಬೇಕಿದೆ ಎಂದು ತಿಳಿಸಿದರು.
ಮಾತುಕತೆ: ಉತ್ತರ ಕರ್ನಾಟಕ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಜು.31 ರಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯೊಂದಿಗೆ ಮಾತುಕತೆ ನಡೆಸಲು ಒಪ್ಪಿಕೊಂಡಿದ್ದಾರೆ.
ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಸಮಿತಿ ರಾಜ್ಯಾಧ್ಯಕ್ಷ ಸೋಮಶೇಖರ್ ಕೊತಂಬರಿ ಸೇರಿದಂತೆ ಹಲವು ಹೋರಾಟಗಾರರು ಇಂದು ನಗರದ ಪ್ರವಾಸಿ ಮಂದಿರದಲ್ಲಿ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ನೇತೃತ್ವದಲ್ಲಿ ಸಭೆಯಲ್ಲಿ ಭಾಗಿಯಾಗಿ, ಮುಖ್ಯಮಂತ್ರಿಯೊಂದಿಗೆ ಮಾತುಕತೆ ನಡೆಸಲು ನಿರ್ಧರಿಸಿದ್ದಾರೆ.