'ಪ್ರತ್ಯೇಕತೆ ಹೋರಾಟಕ್ಕೆ ಕರ್ನಾಟಕ ಸಂಘಟನೆಗಳ ಒಕ್ಕೂಟದ ಬೆಂಬಲವಿಲ್ಲ'
ಬೆಂಗಳೂರು, ಜು.30: ಪ್ರತ್ಯೇಕ ಉತ್ತರ ಕರ್ನಾಟಕಕ್ಕೆ ಆಗ್ರಹಿಸಿ ಆ.2ರಂದು ಕರೆ ನೀಡಿರುವ ಬಂದ್‌ಗೆ ಕರ್ನಾಟಕ ಸಂಘಟನೆಗಳ ಒಕ್ಕೂಟ ಬೆಂಬಲ ನೀಡುವುದಿಲ್ಲ ಎಂದು ಒಕ್ಕೂಟದ ಅಧ್ಯಕ್ಷ ಕನ್ನಡ ಚಳುವಳಿ ನಾಗೇಶ್ ಹೇಳಿದ್ದಾರೆ.
ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಲವರು ತಮ್ಮ ಸ್ವಾರ್ಥ ಸಾಧನೆಗಾಗಿ ಬಂದ್‌ಗೆ ಕರೆ ನೀಡಿದ್ದಾರೆ. ಉತ್ತರ ಕರ್ನಾಟಕ ಭಾಗದ ಹಲವಾರು ಸಮಸ್ಯೆಗಳಿಗೆ ಒಕ್ಕೂಟ ಬೀದಿ ಹೋರಾಟ ನಡೆಸಿದೆ. ಮುಂದೆಯೂ ಸಮಸ್ಯೆಗಳ ವಿರುದ್ಧ ಹೋರಾಟ ನಡೆಸಲಿದೆ. ಯಾವುದೇ ಕಾರಣಕ್ಕೂ ಪ್ರತ್ಯೇಕ ಕೂಗಿಗೆ ಅವಕಾಶ ನೀಡುವುದಿಲ್ಲ ಎಂದು ತಿಳಿಸಿದರು.
ಬಂದ್, ರಾಜಕೀಯ ಪ್ರೇರಿತ ಎಂಬುದು ಮೇಲ್ನೋಟಕ್ಕೆ ಗೋಚರವಾಗುತ್ತಿದೆ. ಈಗಾಗಲೇ ವಿವಿಧ ಪಕ್ಷಗಳ ರಾಜಕೀಯ ಮುಖಂಡರು ಪ್ರತ್ಯೇಕತೆ ಬಗ್ಗೆ ಮಾತನಾಡಿದ್ದಾರೆ. ಇದು ಒಳ್ಳೆಯ ಬೆಳವಣಿಗೆ ಅಲ್ಲ. ಉತ್ತರ ಕರ್ನಾಟಕದ ಬಹುತೇಕ ಜನರು ಅಖಂಡ ಕರ್ನಾಟಕದ ಅಭಿವೃದ್ಧಿಯ ಬಗ್ಗೆ ಕನಸು ಕಾಣುತ್ತಿದ್ದಾರೆ. ಹೀಗಾಗಿ, ಉತ್ತರ ಕರ್ನಾಟಕ ಭಾಗದ ನೂರಕ್ಕೂ ಅಧಿಕ ಕನ್ನಡಪರ ಸಂಘಟನೆಗಳು ಈ ಬಂದ್‌ಗೆ ಬೆಂಬಲ ನೀಡುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.